ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಪ್ರದೇಶದಲ್ಲಿರುವ ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ (ಐಟಿಐ)ಗೆ ಸೇರಿದ 44 ಎಕರೆ ಭೂಮಿಯನ್ನು ಖಾಸಗಿಯವರಿಗೆ ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ.
ಈ ಕುರಿತು ರಾಜ್ಯ ಕಾರ್ಯದರ್ಶಿ ಡಾ. ಕೆ.ಪ್ರಕಾಶ್ ಹೇಳಿಕೆ ನೀಡಿದ್ದು, ಇ-ಹರಾಜು ಮೂಲಕ ಐಟಿಐಗೆ ಸೇರಿದ ಭೂಮಿಯನ್ನು ಖಾಸಗಿಯವರಿಗೆ ಮಾರಾಟ ಮಾಡುವ ಕೇಂದ್ರ ಸರ್ಕಾರದ ಕ್ರಮ ಜನವಿರೋಧಿ ಎಂದು ಸಿಪಿಐ(ಎಂ) ಆರೋಪಿಸಿದೆ. ಈ ಭೂಮಿಯನ್ನು 1948ರಲ್ಲಿ ಬೆಂಗಳೂರಿನ ಅಭಿವೃದ್ಧಿ ಹಾಗೂ ಉದ್ಯೋಗಾವಕಾಶಗಳ ಸೃಷ್ಟಿಗಾಗಿ ಐಟಿಐ ಕಂಪನಿಗೆ ನೀಡಲಾಗಿತ್ತು ಎಂದು ಹೇಳಿದ್ದಾರೆ.
ಒಂದು ಹಂತದಲ್ಲಿ ಐಟಿಐ ಸಂಸ್ಥೆ 20 ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ್ದು, ಲಕ್ಷಾಂತರ ಕುಟುಂಬಗಳಿಗೆ ಆಸರೆಯಾಗಿತ್ತು. ಹೀಗಾಗಿ ಸಾರ್ವಜನಿಕ ಉದ್ದೇಶಕ್ಕಾಗಿ ನೀಡಲಾದ ಈ ಭೂಮಿಯನ್ನು ಭೂನಗದೀಕರಣದ ಹೆಸರಿನಲ್ಲಿ ಖಾಸಗಿಯವರಿಗೆ ಮಾರಾಟ ಮಾಡುವ ಬದಲು, ಬೆಂಗಳೂರಿನ ಅಭಿವೃದ್ಧಿಗೆ ಪೂರಕವಾದ ಸಾರ್ವಜನಿಕ ಉದ್ದಿಮೆಗಳನ್ನು ಬೆಳೆಸಲು ಬಳಸಬೇಕು ಎಂದು ಸಿಪಿಐ(ಎಂ) ಒತ್ತಾಯಿಸಿದೆ.
ಇದನ್ನೂ ಓದಿ : ಬಡವರಿಗೆ ನಿವೇಶನ: ತಿಂಗಳಾಂತ್ಯದೊಳಗೆ ಭೂಮಿ ಗುರುತಿಸಿ – ಪರಮೇಶ್ವರ್
ವೇಗವಾಗಿ ಕಾಂಕ್ರೀಟ್ ನಗರವಾಗಿ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ನಗರದ ಪರಿಸರ ಸಮತೋಲನಕ್ಕೂ ಸಾರ್ವಜನಿಕ ಹಿತಾಸಕ್ತಿಗೂ ಧಕ್ಕೆ ಉಂಟಾಗುವಂತಹ ಭೂ ಮಾರಾಟದ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಪಕ್ಷ ಆಗ್ರಹಿಸಿದೆ.
ಕರ್ನಾಟಕದ ಹಿತಾಸಕ್ತಿಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ, ಹೈಕೋರ್ಟ್ನಿಂದ ತಡೆಯಾಜ್ಞೆ ಪಡೆಯಬೇಕು ಎಂದು ಸಿಪಿಐ(ಎಂ) ರಾಜ್ಯ ಸಮಿತಿ ಒತ್ತಾಯಿಸಿದೆ.
ಅದೇ ವೇಳೆ, ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಭೂ ನಗದೀಕರಣ ನಿಗಮವು ಇ-ಹರಾಜು ಪ್ರಕ್ರಿಯೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಪಕ್ಷ ಆಗ್ರಹಿಸಿದೆ.
ಇದನ್ನೂ ನೋಡಿ :ಹೈ.ಕ. ವಿಲೀನ ದಿನ | ಜಗತ್ತಿಗೆ ಭತ್ತ, ತೊಗರಿ, ಚಿನ್ನ ಕೊಟ್ಟ ಪ್ರದೇಶಕ್ಕೆ ಸಿಕ್ಕಿದ್ದು ಕಹಿಯೇ? Janashakthi Media
