ಬೆಂಗಳ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ಭೂಸ್ವಾಧೀನ ವಿರೋಧಿಸಿ ನಡೆಸುತ್ತಿರುವ ಹೋರಾಟಗಾರರ ಮೇಲೆ ನಡೆದ ದೌರ್ಜನ್ಯ ಹಾಗೂ ಬಂಧನವನ್ನು ಖಂಡಿಸಿ ಸಿಪಿಐ(ಎಂ) ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿದೆ.
ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯಲ್ಲಿ ಬಲವಂತದ ಭೂಸ್ವಾದೀನದ ವಿರುದ್ಧ ಹಮ್ಮಿಕೊಂಡಿದ್ದ ದೇವನಹಳ್ಳಿ ಚಲೋ ಹೋರಾಟದಲ್ಲಿ ರೈತರು ಮತ್ತು ಹೋರಾಟಗಾರರ ಮೇಲೆ ದೌರ್ಜನ್ಯ ನಡೆಸಿ ಬಂಧಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ ಸಿಪಿಐ(ಎಂ)ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿತ್ತು. ಸಿಪಿಐ(ಎಂ) ಬೆಂಗಳೂರು ಉತ್ತರ-ದಕ್ಷಿಣ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ.ಕೆ.ಪ್ರಕಾಶ್, ಸಿಪಿಐಎಂ ರಾಜ್ಯ ನಾಯಕರಾದ ಯು.ಬಸವರಾಜ, ಗೋಪಾಲಕೃಷ್ಣ ಅರಳಹಳ್ಳಿ, ಕೆ.ಮಹಾಂತೇಶ್, ಉತ್ತರ ಜಿಲ್ಲಾ ಕಾರ್ಯದರ್ಶಿ ಎನ್.ಪ್ರತಾಪ್ ಸಿಂಹ ಹಾಗೂ ಇತರರು ಭಾಗವಹಿಸಿ ಮಾತನಾಡಿದರು.
ಹಾಸನ, ಕಲಬುರಗಿ, ಬಳ್ಳಾರಿ, ವಿಜಯನಗರ, ಮೈಸೂರು, ತುಮಕೂರು, ಗದಗ, ಮಂಡ್ಯ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಿಪಿಐ(ಎಂ) ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಬಲವಂತದ ಭೂಸ್ವಾಧೀನ ವಾಪಸ್ ಪಡೆಯಬೇಕು ಹಾಗೂ ಪ್ರತಿಭಟನಾನಿರತರನ್ನು ಬಂಧಿಸಲು ಹಿಂಸಾತ್ಮಕ ದಾರಿ ಬಳಸಿದ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಮುಖಂಡರು ಒತ್ತಾಯಿಸಿದ್ದರು.
