ಕರ್ಫ್ಯೂ ಬೇಕಾದಾಗ ವಿಧಿಸಿ-ಬೇಡವಾದಾಗ ತೆಗೆಯುವ ಸಂಸ್ಕೃತಿ ಬಿಜೆಪಿಯದ್ದು: ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿದ್ದುದು ಬಿಜೆಪಿ ಕರ್ಫ್ಯೂ. ಅವರಿಗೆ ಬೇಕಾದಾಗ ವಿಧಿಸುತ್ತಾರೆ, ಬೇಡವಾದಾಗ ತೆರವುಗೊಳಿಸುತ್ತಾರೆ. ನಾನು ಹಿಂದೆಯೇ ಹೇಳಿದ್ದೆ, ಇದು ಬಿಜೆಪಿ ಕರ್ಫ್ಯೂ ಎಂದು. ನಾವು ಮೇಕೆದಾಟು ಪಾದಯಾತ್ರೆ ಮಾಡುತ್ತೇವೆ ಎಂಬ ಕಾರಣಕ್ಕೆ ಜನರಿಗೆ ಕೊಡಬಾರದ ಕಷ್ಟ ಕೊಟ್ಟರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ರಾಜ್ಯದಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಕಡಿಮೆ ಇದ್ದಾಗ ಕರ್ಫ್ಯೂ ವಿಧಿಸಿದ್ದವರು, ಸೋಂಕು ಪ್ರಮಾಣ ಹೆಚ್ಚಾದಾಗ ಕರ್ಫ್ಯೂ ಹಿಂಪಡೆದಿದ್ದಾರೆ. ರಾಜಕೀಯ ಕಾರಣಕ್ಕೆ ಅವರು ಈ ರೀತಿ ಮಾಡುತ್ತಿದ್ದಾರೆ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಕರ್ಫ್ಯೂನಿಂದ ಜನರಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ. ಹಣ್ಣು, ತರಕಾರಿ ಬೆಳೆಯುವವರ, ಮಾರುವವರ ಪರಿಸ್ಥಿತಿ ಏನಾಗಿದೆ ಎಂದು ನೀವೇ ನೋಡಿದ್ದೀರಿ. ಕೆಎಸ್ಆರ್‌ಡಿಸಿ, ಮೆಟ್ರೋದಲ್ಲಿ ಪೂರ್ಣ ಪ್ರಮಾಣದಲ್ಲಿ ಪ್ರಯಾಣ ಮಾಡಬಹುದು, ವಿಮಾನಗಳಲ್ಲಿಯೂ ಪೂರ್ಣ ಪ್ರಮಾಣದಲ್ಲಿ ಪ್ರಯಾಣ ಮಾಡಬಹುದು. ಬಡವರು, ಹೋಟೆಲ್ ನವರು, ಚಿತ್ರಮಂದಿರಗಳವರು ಹಾಗೂ ಇತರರು ಶೇ.50 ರಷ್ಟು ಮಾತ್ರ ವ್ಯಾಪಾರ ಮಾಡಬೇಕಂತೆ. ಕುಟುಂಬ ಸದಸ್ಯರು ವಾಹನಗಳಲ್ಲಿ ಸಂಚಾರ ಮಾಡುವಾಗ ಶೇ.50 ರಷ್ಟು ನಿಯಮ ಪಾಲನೆ ಮಾಡಲು ಸಾಧ್ಯವೇ? ಸರ್ಕಾರ ಪ್ರಾಯೋಗಿಕವಾಗಿ ಯೋಚಿಸಬೇಕು ಎಂದು ಹೇಳಿದರು.

ಔಷಧಿ ನೀಡಿ, ಸಹಾಯ ಮಾಡಿ, ಆರೋಗ್ಯ ಕಾಪಾಡಿ ಸರ್ಕಾರ ಜನರಿಗೆ ಮಾನಸಿಕವಾಗಿ ಧೈರ್ಯ ತುಂಬಬೇಕು. ಆದರೆ, ಈ ಸರ್ಕಾರ ಅವೈಜ್ಞಾನಿಕವಾಗಿ ನಿಯಮಗಳನ್ನು ಜಾರಿ ಮಾಡುತ್ತಿದೆ. ಸರ್ಕಾರಗಳು ರಾಜ್ಯ ಹಾಗೂ ದೇಶದ ಆರ್ಥಿಕತೆ ನೋಡಬೇಕು. ಆಂಧ್ರ, ತೆಲಂಗಾಣ ಹಾಗೂ ಬೇರೆ ರಾಜ್ಯಗಳಲ್ಲಿ ಇಲ್ಲದ ನಿಯಮ ಇಲ್ಲಿ ಯಾಕೆ? ಎಂದು ಪ್ರಶ್ನೆ ಮಾಡಿದರು.

ವಿದ್ಯುತ್ ದರ ಏರಿಕೆ:

ಜನಸಾಮಾನ್ಯರ ಆದಾಯ ಖಾತರಿ ಮತ್ತು ಹೆಚ್ಚಳಕ್ಕೆ ಸರ್ಕಾರ ಮೊದಲು ಕ್ರಮಕೈಗೊಳ್ಳಲಿ. ಅವರಿಗೆ ಆದಾಯ ಬಂದ ಮೇಲೆ ವಿದ್ಯುತ್ ದರ ಏರಿಕೆ ಮಾಡಲಿ. ಈಗ ಲಾಕ್‌ಡೌನ್, ಸೀಲ್ ಡೌನ್ ನಿರ್ಬಂಧ ಹೇರಿದ್ದಾರೆ. ಇಂತಹ ಸಂದರ್ಭದಲ್ಲಿ ಹಾಲಿನ ದರ, ವಿದ್ಯುತ್ ದರ ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದರು.

ರೈತನಿಗೆ ತೊಂದರೆ ಆದಾಗ ಅವನ ರಕ್ಷಣೆಗೆ ಸರ್ಕಾರ ನಿಲ್ಲಲಿಲ್ಲ. ಬೆಳೆ ಖರೀದಿ ದರ ಏಕೆ ಹೆಚ್ಚಿಸಲಿಲ್ಲ? ಬೆಂಬಲ ಬೆಲೆ ಯಾಕೆ ನೀಡಲಿಲ್ಲ. ಏರಿಕೆಯಾಗಿರುವ ಕಬ್ಬಿಣ, ಸಿಮೆಂಟ್ ದರ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಿಲ್ಲ. ಈಗ ವಿದ್ಯುತ್ ದರ ಬಾಕಿ ಕೊಡಬೇಕು ಎನ್ನುತ್ತಿದ್ದಾರೆ. ವಿದ್ಯುತ್ ಕಂಪನಿಗಳ ಪರಿಸ್ಥಿತಿ ಹೇಗಿದೆ ಎಂದು ನಮಗೆ ಗೊತ್ತಿದೆ. ಸರ್ಕಾರ ಸಾರ್ವಜನಿಕರಿಗೆ ಅನುಕೂಲವಾಗುವ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಮಿಳುನಾಡಿನ ಹೊಗೆನಕಲ್ ವಿಚಾರವಾಗಿ ಈಗ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸರ್ಕಾರ ಏನೆಲ್ಲಾ ಹೇಳಿಕೆ ನೀಡುತ್ತದೆಯೋ ನೀಡಲಿ. ನಂತರ ಮಾತನಾಡುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

Donate Janashakthi Media

Leave a Reply

Your email address will not be published. Required fields are marked *