ಮಂಗಳೂರು: ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆರೆಂಜ್ ಅಲರ್ಟ್ ಇರವುದರಿಂದ ಬಂಟ್ವಾಳ, ಉಲ್ಲಾಳ,ಮುಲ್ಕಿ ಹಾಗೂ ಮೂಡಬಿದ್ರೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಪ್ರೌಢಶಾಲೆ, ಪಿ.ಯು ಹಾಗೂ ಸರ್ಕಾರಿ ಅನುದಾನಿತ ಸೇರಿದಂತೆ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಬೆಂಗಳೂರಿನಾದ್ಯಂತ ಧಾರಾಕಾರ ಮಳೆ, ಸಂಚಾರ ದಟ್ಟಣೆ : ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉಪ-ವಿಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು ಈಗಾಗಲೇ ಆರೆಂಜ್- ಅಲರ್ಟ್ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು ಪ್ರವಾಸಿಗರು ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧಸ್ಥಿತಿಯಲ್ಲಿರಿಸಿಕೊಳ್ಳುವುದು.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ -1077 ಅಥವಾ 08242442590