ಹಾಸನ: ಮೈಸೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದಿರುವುದರಿಂದ ಸಮಸ್ಯೆ ಎದುರಾಗಿದೆ ಎಂದು ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ) ಸಂಘಟನೆಯು ಪ್ರತಿಭಟನೆ ನಡೆಸಿತು.
ಸಮಾಜ ಕಲ್ಯಾಣ ಇಲಾಖೆ ಕಛೇರಿಯ ಮುಂದೆ ಪ್ರತಿಭಟನೆಯಲ್ಲಿ ಈಗಾಗಲೇ ಕಳೆದ ಮೂರು ವರ್ಷಗಳಿಂದ ಪದವಿ ವಿದ್ಯಾರ್ಥಿಗಳಿಗೆ ವೇತನ ಸರಿಯಾಗಿ ನೀಡದೆ ಇರುವುದರಿಂದ ಕಾಲೇಜುಗಳಲ್ಲಿ ಪರೀಕ್ಷೆಗೆ ನಿರಾಕರಿಸುವ ಘಟನೆಗಳು ಹೆಚ್ಚಾಗಿವೆ. ಹಾಸನದ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ವರ್ಷಗಳ ಶುಲ್ಕ ಪಾವತಿ ಮಾಡಬೇಕು ಇಲ್ಲವಾದಲ್ಲಿ ಪರೀಕ್ಷೆಗೆ ಕೂರಿಸುವುದಿಲ್ಲಾ ಎಂದು ಪ್ರಾಂಶುಪಾಲರು ಹೇಳುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದೆ ಎಂದಿದ್ದಾರೆ.
ಇದಲ್ಲದೆ, ಸಮಾಜ ಕಲ್ಯಾಣ ಇಲಾಖೆಯಿಂದ ಆದ ಕೆಲ ತಾಂತ್ರಿಕ ದೋಷಗಳಿಂದಲೂ ವಿದ್ಯಾರ್ಥಿಗಳು ಇಂದು ಸಮಸ್ಯೆ ಎದುರಿಸುವಂತಾಗಿದೆ. ಜಿಲ್ಲಾ ಕೇಂದ್ರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ನಿರ್ಲಕ್ಷ್ಯ ಧೋರಣೆಯಿಂದಾಗಿಯೇ ಇಂದು ವಿದ್ಯಾರ್ಥಿ ವೇತನ ಸಕಾಲದಲ್ಲಿ ಬಿಡುಗಡೆಯಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಕೂಡಲೇ 3 ವರ್ಷದ ವಿದ್ಯಾರ್ಥಿ ವೇತನ ಮಂಜೂರು ಮಾಡಬೇಕು. ಮುಂದಿನ ಸೆಮಿಸ್ಟರ್ ಪರೀಕ್ಷೆಗೆ ಅನುಮತಿ ಕೊಡಬೇಕು. ಮೈಸೂರು ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳ ಶುಲ್ಕ ಕಡಿಮೆ ಮಾಡಬೇಕು. ಸಮಾಜ ಕಲ್ಯಾಣ ಇಲಾಖೆ ಕಾಲೇಜುಗಳಲ್ಲಿ ಸಭೆ ನಡೆಸಿ ಕುಂದುಕೊರತೆಗಳನ್ನು ಸರಿಪಡಿಸಬೇಕು. ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನಹರಿಸಬೇಕೆಂದು ಆಗ್ರಹಿಸಲಾಗಿದೆ.
ಎಸ್.ಎಫ್.ಐ. ಜಿಲ್ಲಾ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ರಮೇಶ್ ಹಾಸನ್, ಸಹ ಕಾರ್ಯದರ್ಶಿ ವಿವೇಕ್, ಹೇಮಂತ್ ಸ್ವರೂಪ್, ಪ್ರಮಿತ್, ಹೇಮಂತ್, ಚಿತ್ರ, ವಿದ್ಯಾ, ಪೂಜಾ, ಪುಟ್ಟ ಲಕ್ಷ್ಮೀ ಉಪಸ್ಥಿತರಿದ್ದರು.