ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 31ರಿಂದ 35ಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
2023 ಜನವರಿ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈ ಮೂಲಕ 4 ಶೇದಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.
ಕಳೆದ ಜ. 1ರಿಂದಲೇ ಪೂರ್ವಾನ್ವಯವಾಗಿ ಈ ಪರಿಷ್ಕೃತ ಡಿಎ ಮಂಜೂರು ಮಾಡಲಾಗಿದ್ದು, ಮೇ ತಿಂಗಳ ವೇತನದಲ್ಲಿನಗದು ರೂಪದಲ್ಲಿಪಾವತಿ ಮಾಡಲಾಗುತ್ತದೆ. ನೌಕರ ಸಮುದಾಯಕ್ಕೆ ಇದು ನೂತನ ಸರಕಾರದ ಮೊದಲ ಉಡುಗೊರೆಯಾಗಿದೆ. ಸುಮಾರು 5.20 ಲಕ್ಷ ಸರಕಾರಿ ನೌಕರರು, ನಿಗಮ, ಮಂಡಳಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಸುಮಾರು 3 ಲಕ್ಷ ನೌಕರರು ಹಾಗೂ 4.50 ಲಕ್ಷ ನಿವೃತ್ತ ನೌಕರರು ಅನುಕೂಲ ಪಡೆಯಲಿದ್ದಾರೆ.
ಇದನ್ನೂ ಓದಿ : ರಾಜ್ಯ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ
ಸರ್ಕಾರದ ಆದೇಶದಲ್ಲಿ ಏನಿದೆ?
ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸುವಂತಿಲ್ಲ. ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ಜೀವನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ 2023 ರ ಜನವರಿ 1ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಶೇಕಡ 35ಕ್ಕೆ ಹೆಚ್ಚಿಸಿ ಮಂಜೂರು ಮಾಡಿದಕ್ಕೆ ಸರ್ಕಾರ ಹರ್ಷ ವ್ಯಕ್ತಪಡಿಸಿದೆ.
ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತಿಗಳಲ್ಲಿ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಶಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಯುಜಿಸಿ/ಎಐಸಿಟಿಇ/ಐಸಿಎಆರ್/ಎನ್‌ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು.
ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು. ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು ಎಂದು ಸರ್ಕಾರ ತಿಳಿಸಿದೆ.