ಕಾಕ್ರೋಚ್‌ ಜನತಾ ಪಾರ್ಟಿ ಪ್ರತಿಭಟನೆ ; ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ನವದೆಹಲಿ: ಶಿಕ್ಷಣ ಕ್ಷೇತ್ರದಲ್ಲಿನ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ಪ್ರಕ್ರಿಯೆಯಲ್ಲಿನ ಅವ್ಯವಸ್ಥೆ ಹಾಗೂ ನಿರುದ್ಯೋಗದ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಶನಿವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಸಾವಿರಾರು ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಮತ್ತು ಯುವಕರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಭಿಜೀತ್ ದೀಪ್ಕೆ, ಶಿಕ್ಷಣ ವ್ಯವಸ್ಥೆಯ ವೈಫಲ್ಯಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ ಎಂದು ಆರೋಪಿಸಿದರು. ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಮತ್ತು ನೇಮಕಾತಿ ಹಗರಣಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಜಂತರ್ ಮಂತರ್ ಪ್ರದೇಶದಲ್ಲಿ ಜನಸಾಗರವೇ ನೆರೆದಿದ್ದು, ಪ್ರತಿಭಟನಾಕಾರರು ಕೈಯಲ್ಲಿ ರಾಷ್ಟ್ರಧ್ವಜ, ಪುಸ್ತಕಗಳು ಹಾಗೂ ವಿವಿಧ ಬೇಡಿಕೆಗಳ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು. ಹಲವರು ಕಾಕ್ರೋಚ್ ಮುಖವಾಡಗಳನ್ನು ಧರಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ಗಮನ ಸೆಳೆಯಿತು.

ಇದನ್ನೂ ಓದಿ : ಜಂತರ್ ಮಂತರ್‌ನಲ್ಲಿ ‘ಜಿರಳೆ ಜನತಾ ಪಾರ್ಟಿ’ ಪ್ರತಿಭಟನೆ: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ಈ ಹೋರಾಟಕ್ಕೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ), ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ (ಎಐಎಸ್‌ಎಫ್) ಸೇರಿದಂತೆ ಹಲವು ಎಡಪಂಥೀಯ ವಿದ್ಯಾರ್ಥಿ ಹಾಗೂ ಯುವಜನ ಸಂಘಟನೆಗಳು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡವು. ಶಿಕ್ಷಣದ ಖಾಸಗೀಕರಣ, ನಿರುದ್ಯೋಗ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ಹೋರಾಟ ನಡೆಸುತ್ತಿರುವ ವಿವಿಧ ವಿದ್ಯಾರ್ಥಿ ಸಂಘಟನೆಗಳು ಕಾಕ್ರೋಚ್ ಜನತಾ ಪಾರ್ಟಿಯೊಂದಿಗೆ ಐಕ್ಯತೆ ವ್ಯಕ್ತಪಡಿಸಿದವು.

ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕರ್ತರು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯಾತ್ಮಕ ಅಭಿಯಾನವಾಗಿ ಆರಂಭವಾದ ಕಾಕ್ರೋಚ್ ಜನತಾ ಪಾರ್ಟಿ, ಇದೀಗ ಯುವಜನರ ಅಸಮಾಧಾನವನ್ನು ವ್ಯಕ್ತಪಡಿಸುವ ರಾಷ್ಟ್ರೀಯ ಮಟ್ಟದ ಚಳವಳಿಯಾಗಿ ಬೆಳೆಯುತ್ತಿದೆ. ಶಿಕ್ಷಣ, ಉದ್ಯೋಗ ಮತ್ತು ಸಾಮಾಜಿಕ ನ್ಯಾಯದ ಪ್ರಶ್ನೆಗಳನ್ನು ಮುನ್ನೆಲೆಗೆ ತರುವಲ್ಲಿ ಈ ಚಳವಳಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ನೋಡಿ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್‌ ಜನತಾ ಪಕ್ಷದಿಂದ ಪ್ರತಿಭಟನೆ

Donate Janashakthi Media

Leave a Reply

Your email address will not be published. Required fields are marked *