ಶೇಜವಾಡ ವಿದ್ಯಾರ್ಥಿ ವಸತಿ ನಿಲಯದ ಮೂಲಸೌಕರ್ಯಕ್ಕೆ ಆಗ್ರಹ: ಜಿಲ್ಲಾಧಿಕಾರಿ ಕಚೇರಿ ಎದುರು ಎಸ್‌ಎಫ್‌ಐ ಪ್ರತಿಭಟನೆ

ಕಾರವಾರ: ತಾಲೂಕಿನ ಶೇಜವಾಡ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್‌ (ಎಸ್‌ಎಫ್‌ಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಶೇಜವಾಡದ ವಸತಿ ನಿಲಯದಲ್ಲಿ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸಿಸುತ್ತಿದ್ದು, ಪ್ರತಿನಿತ್ಯ ಕಾರವಾರ ನಗರದ ಕಾಲೇಜುಗಳಿಗೆ ತೆರಳಲು ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಸತಿ ನಿಲಯದ ಸಮೀಪದಲ್ಲಿ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ಗಳಿಗೆ ಕಡ್ಡಾಯ ನಿಲುಗಡೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ವಸತಿ ನಿಲಯಕ್ಕೆ ತೆರಳುವ ರಸ್ತೆಯಲ್ಲಿ ಬೀದಿ ದೀಪಗಳ ವ್ಯವಸ್ಥೆ ಇಲ್ಲದಿರುವುದರಿಂದ ರಾತ್ರಿ ವೇಳೆ ವಿದ್ಯಾರ್ಥಿಗಳ ಸುರಕ್ಷತೆಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣ ಬೀದಿ ದೀಪಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಪ್ರವೇಶ ಶುಲ್ಕದ ತಾಂತ್ರಿಕ ಸಮಸ್ಯೆ ಬಗೆಹರಿಸಲು ಆಗ್ರಹ: ಎಸ್‌ಎಫ್‌ಐ ದಿಢೀರ್ ಪ್ರತಿಭಟನೆ

ಇದರೊಂದಿಗೆ ವಸತಿ ನಿಲಯದಲ್ಲಿ ನೀಡಲಾಗುತ್ತಿರುವ ಉಪಹಾರದ ಗುಣಮಟ್ಟ ಸುಧಾರಿಸಬೇಕು, ಸಮರ್ಪಕ ಆಹಾರ ಮೆನು ರೂಪಿಸಬೇಕು, ವಾರ್ಡನ್‌ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ವಿದ್ಯಾರ್ಥಿಗಳಿಗೆ ಅಗತ್ಯ ಆರೋಗ್ಯ ಸೌಲಭ್ಯ ಕಲ್ಪಿಸುವುದು, ವಸತಿ ನಿಲಯದಲ್ಲಿ ಗ್ರಂಥಾಲಯ ಸ್ಥಾಪಿಸುವುದು ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ತುರ್ತಾಗಿ ಒದಗಿಸಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಎಫ್‌ಐ ಒತ್ತಾಯಿಸಿದೆ.

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ತಾಲೂಕು ಸಂಚಾಲಕ ವೀರೇಶ್‌ ರಾಠೋಡ್‌, ಶೇಕಪ್ಪ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು.

ಇದನ್ನೂ ನೋಡಿ : ರೈತ–ಕಾರ್ಮಿಕರ ಜೈಲ್‌ ಭರೋ: ಕೇಂದ್ರದ ನೀತಿಗಳ ವಿರುದ್ಧ ದೇಶಾದ್ಯಂತ ಆಕ್ರೋಶ Janashakthi Media

 

Donate Janashakthi Media

Leave a Reply

Your email address will not be published. Required fields are marked *