ಕನಿಷ್ಠ ವೇತನ, ಸೇವಾ ಭದ್ರತೆಗೆ ಆಗ್ರಹ: ಬೆಂಗಳೂರಿನಲ್ಲಿ ಹಾಸ್ಟೆಲ್–ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಬೆಂಗಳೂರು: ಸರ್ಕಾರಿ ಹಾಸ್ಟೆಲ್‌ಗಳು ಹಾಗೂ ವಸತಿ ಶಾಲೆ–ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಿತು. ಕನಿಷ್ಠ

ರಾಜ್ಯದ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ವ್ಯಾಪ್ತಿಯ ಹಾಸ್ಟೆಲ್‌ಗಳು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ವಸತಿ ಶಾಲೆಗಳಲ್ಲಿ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾ ಸಿಬ್ಬಂದಿ, ಕಾವಲುಗಾರರು, ಅಟೆಂಡರ್‌ಗಳು, ಕಂಪ್ಯೂಟರ್ ಮತ್ತು ಡೇಟಾ ಎಂಟ್ರಿ ಆಪರೇಟರ್‌ಗಳು ಸೇರಿದಂತೆ ಸಾವಿರಾರು ಮಂದಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಉದ್ಯೋಗ ಭದ್ರತೆ ದೊರೆಯುತ್ತಿಲ್ಲ ಹಾಗೂ ಹೆಚ್ಚುತ್ತಿರುವ ಜೀವನ ವೆಚ್ಚಕ್ಕೆ ಅನುಗುಣವಾಗಿ ವೇತನ ಪರಿಷ್ಕರಣೆಯಾಗಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ವಿಳಂಬವಿಲ್ಲದೆ ಜಾರಿಗೆ ತರಬೇಕು. ಹೊರಗುತ್ತಿಗೆ ನೌಕರರಿಗೆ ನಿವೃತ್ತಿವರೆಗೆ ಸೇವಾ ಭದ್ರತೆ ಒದಗಿಸಬೇಕು ಹಾಗೂ ದೀರ್ಘಾವಧಿಯಿಂದ ಕೆಲಸ ಮಾಡುತ್ತಿರುವವರನ್ನು ಕಾಯಂಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.

ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ವೇತನ ನೀಡುವ ಪದ್ಧತಿಯಿಂದ ಹಲವು ಸಮಸ್ಯೆಗಳು ಉಂಟಾಗುತ್ತಿವೆ ಎಂದು ಆರೋಪಿಸಿದ ನೌಕರರು, ಸರ್ಕಾರವೇ ಸಂಬಂಧಪಟ್ಟ ಇಲಾಖೆಗಳ ಮೂಲಕ ನೇರವಾಗಿ ವೇತನ ಪಾವತಿಸುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. ಕನಿಷ್ಠ

ಇದನ್ನೂ ಓದಿ : ರೈಲು ತಾಂತ್ರಿಕ ದೋಷ: ಪರೀಕ್ಷೆ ತಪ್ಪಿಸಿಕೊಂಡವರಿಗೆ ಮರುಪರೀಕ್ಷೆ ನಡೆಸಿ – ಡಿವೈಎಫ್ಐ

ನೇಮಕಾತಿ ಆದೇಶ, ಗುರುತಿನ ಚೀಟಿ, ವೇತನ ಚೀಟಿ, ಸೇವಾ ಪ್ರಮಾಣಪತ್ರ ಹಾಗೂ ಪಿಎಫ್–ಇಎಸ್‌ಐ ಸೇರಿದಂತೆ ಕಾರ್ಮಿಕರಿಗೆ ಕಾನೂನುಬದ್ಧವಾಗಿ ದೊರೆಯಬೇಕಾದ ಸೌಲಭ್ಯಗಳನ್ನು ಖಚಿತಪಡಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟರು.

ವಸತಿ ಶಾಲೆ ಮತ್ತು ಹಾಸ್ಟೆಲ್‌ಗಳಲ್ಲಿ ಹಲವು ವರ್ಷಗಳಿಂದ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸಿಬ್ಬಂದಿಯ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಹೊರಗುತ್ತಿಗೆ ವ್ಯವಸ್ಥೆಯಲ್ಲಿರುವ ಶೋಷಣೆಗೆ ಕಡಿವಾಣ ಹಾಕಿ, ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಉದ್ಯೋಗ ಭದ್ರತೆ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬೇಡಿಕೆಗಳ ಕುರಿತು ಸರ್ಕಾರ ಶೀಘ್ರ ನಿರ್ಧಾರ ಕೈಗೊಳ್ಳದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನೂ ನೌಕರರು ನೀಡಿದ್ದಾರೆ.

ಇದನ್ನೂ ನೋಡಿ : ಕಾರ್ಮಿಕರ ವಿಧಾನಸೌಧ ಚಲೋ | ಏನಿದು ಹೋರಾಟ? ಪ್ರಮುಖ ಬೇಡಿಕೆಗಳೇನು? – ಮೀನಾಕ್ಷಿ ಸುಂದರಂ Janashakthi Media

Donate Janashakthi Media

Leave a Reply

Your email address will not be published. Required fields are marked *