ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ/ಎಸ್‌ಟಿ ಹಾಸ್ಟೆಲ್‌ಗೆ ಆಗ್ರಹ

ಬೆಂಗಳೂರು: ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರಿಗಾಗಿ ಪ್ರತ್ಯೇಕ ಹಾಸ್ಟೆಲ್ ಆರಂಭಿಸುವಂತೆ ಆಗ್ರಹಿಸಿ ಎಸ್‌ಎಫ್‌ಐ ಬೆಂಗಳೂರು ಜಿಲ್ಲಾ ಸಮಿತಿ ಬುಧವಾರ ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ನಗರ ಜಿಲ್ಲೆಯ ಜಂಟಿ ನಿರ್ದೇಶಕರಾದ ಲಕ್ಷ್ಮಣ್ ರೆಡ್ಡಿ ಅವರಿಗೆ ಮನವಿ ಸಲ್ಲಿಸಿತು. ಮಹಾರಾಣಿ

ವಿಶ್ವವಿದ್ಯಾಲಯದಲ್ಲಿ ಸುಮಾರು 2,600 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ಇವರಲ್ಲಿ 350ಕ್ಕೂ ಹೆಚ್ಚು ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ಸೌಲಭ್ಯದ ಅಗತ್ಯವಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈಗಾಗಲೇ ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಬಾಡಿಗೆ ಆಧಾರಿತ ಹಾಸ್ಟೆಲ್ ವ್ಯವಸ್ಥೆ ನಿರ್ಮಾಣವಾಗಿದ್ದರೂ, ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಸೌಲಭ್ಯ ಇಲ್ಲದ ಕಾರಣ ವಿದ್ಯಾರ್ಥಿನಿಯರು ವರ್ಷಕ್ಕೆ ಸುಮಾರು 34 ಸಾವಿರ ರೂಪಾಯಿ ಹಾಗೂ ತಿಂಗಳಿಗೆ ಆಹಾರಕ್ಕಾಗಿ 2 ಸಾವಿರ ರೂಪಾಯಿ ಮೆಸ್ ಶುಲ್ಕ ಪಾವತಿಸಬೇಕಾಗಿದೆ ಎಂದು ಆರೋಪಿಸಲಾಗಿದೆ.

ವಿಶ್ವವಿದ್ಯಾಲಯದಲ್ಲಿ ವಲಸೆ ಕಾರ್ಮಿಕರ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುತ್ತಿದ್ದು, ಸುಮಾರು ಶೇ.45ರಷ್ಟು ವಿದ್ಯಾರ್ಥಿಗಳು ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹೀಗಾಗಿ ಹೆಚ್ಚಿನ ಶುಲ್ಕ ಪಾವತಿಸುವುದು ಬಡ ಹಾಗೂ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿನಿಯರಿಗೆ ಕಷ್ಟಕರವಾಗಿದೆ ಎಂದು ಎಸ್‌ಎಫ್‌ಐ ತಿಳಿಸಿದೆ.

ಇದನ್ನೂ ಓದಿ : NEET ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಶಿವಪ್ಪ ಎನ್. ಅಂಬ್ಲಿಕಲ್

ಈ ಹಿನ್ನೆಲೆ, ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿಯೇ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರಿಗಾಗಿ ಪ್ರತ್ಯೇಕ ಹಾಸ್ಟೆಲ್ ಆರಂಭಿಸಲು ಅವಕಾಶವಿದ್ದು, ಅದಕ್ಕಾಗಿ ಕಟ್ಟಡ ಒದಗಿಸಲು ವಿಶ್ವವಿದ್ಯಾಲಯ ಆಡಳಿತ ಸಮ್ಮತಿ ಸೂಚಿಸಿದೆ ಎಂದು ಮನವಿಯಲ್ಲಿ ಹೇಳಲಾಗಿದೆ. ತಾತ್ಕಾಲಿಕವಾಗಿ ಹೊಸ ಬೃಹತ್ ಕಟ್ಟಡದಲ್ಲಿ ಹಾಸ್ಟೆಲ್ ವ್ಯವಸ್ಥೆ ಆರಂಭಿಸುವ ಕುರಿತು ಚರ್ಚೆ ನಡೆದಿದ್ದು, ಎಸ್‌ಎಸ್‌ಪಿ ಮೂಲಕ ಹಾಸ್ಟೆಲ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ.

ಮನವಿ ಸಲ್ಲಿಸುವ ವೇಳೆ ಎಸ್‌ಎಫ್‌ಐ ರಾಜ್ಯ ಉಪಾಧ್ಯಕ್ಷ ದೊಡ್ಡ ಬಸವರಾಜ್ ಗುಳೇದಾಳ್, ಜಿಲ್ಲಾ ಕಾರ್ಯದರ್ಶಿ ವೆಂಕಟೇಶ್, ಸಹ ಕಾರ್ಯದರ್ಶಿ ಮಣಿಭಾರದಿ ಹಾಗೂ ಸಂಜೀವ್ ಸಿಂಗ್ ಉಪಸ್ಥಿತರಿದ್ದರು.

ಇದನ್ನೂ ನೋಡಿ : ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ | ಚೀನಾ ಮಾದರಿ ಭಾರತದಲ್ಲಿ ಸಾಧ್ಯವೇ? Janashakthi Media

Donate Janashakthi Media

Leave a Reply

Your email address will not be published. Required fields are marked *