ಬೆಂಗಳೂರು: ಬಿಸಿಯೂಟ ಕಾರ್ಯಕರ್ತೆಯರ ಅಹೋರಾತ್ರಿ ಧರಣಿಯನ್ನು ಹಿಂಪಡೆದುಕೊಳ್ಳಲಾಗಿದೆ. ರಾಜ್ಯ ಸರಕಾರ ಕೆಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ ಹಿಂಪಡೆಯಲಾಗಿದೆ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮಿ ತಿಳಿಸಿದ್ದಾರೆ.
ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಸಂಘಟನೆಯ ಪ್ರಮುಖರೊಂದಿಗೆ ಚರ್ಚೆ ನಡೆಸಿದ್ದು, ಸದ್ಯ 60 ಕೋಟಿ ಹಣ ಮಂಜೂರು ಮಾಡಿ ಎಂದು ಮನವಿ ಮಾಡಿದ್ದೇವೆ. ರಾಜ್ಯ ಸರಕಾರ ನಮ್ಮ ಬೇಡಿಕೆಗಳನ್ನ ಆಲಿಸಿದ್ದು 15 ದಿನದೊಳಗೆ ಕೆಲ ಬೇಡಿಕೆಗಳ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.
60 ವರ್ಷ ಮೇಲ್ಪಟ್ಟ ನೌಕರರನ್ನು ಕೆಲಸದಿಂದ ನಿವೃತ್ತಿಗೊಳಿಸುವಾಗ 1 ಲಕ್ಷ ರೂಪಾಯಿ ಇಡಿಗಂಟು ನೀಡಬೇಕು. ಬಿಸಿಯೂಟ ನೌಕರರನ್ನು ಖಾಯಂಗೊಳಿಸಬೇಕು. ಇವರನ್ನು ಸರ್ಕಾರಿ ಕಾರ್ಮಿಕರೆಂದು ಗುರುತಿಸಬೇಕು. ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ 1 ಸಾವಿರ ರೂಪಾಯಿಗಳನ್ನ ಜಾರಿ ಮಾಡಬೇಕು. ಜೊತೆಗೆ ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ಕೊಡಬೇಕು ಎಂದು ಬಿಸಿಯೂಟ ನೌಕರರು ಪ್ರತಿಭಟನೆ ನಡೆಸುತ್ತಿದ್ದರು. ಸರಕಾರ 15 ದಿನದೊಳಗೆ ಬೇಡಿಕೆ ಈಡೇರಿಸದೇ ಹೋದಲ್ಲಿ ಮತ್ತೆ ಧರಣಿ ನಡೆಸಲು ಸಿದ್ಧರಿದ್ದೇವೆ ಎಂದು ಸಂಘಟಿಕರು ತಿಳಿಸಿದ್ದಾರೆ.