ಚಿತ್ರದುರ್ಗ: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಚಿನ್ಮಯ್ ಶಾಲೆಯಲ್ಲಿ ನಡೆದಿದ್ದು, ಇದೀಗ ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಗೆ ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಶಾಲೆ ಮುಂಭಾಗ ಇರುವ ಕಸದ ತೊಟ್ಟಿಯಲ್ಲಿ ರಾಷ್ಟ್ರಧ್ವಜ ಪತ್ತೆಯಾಗಿದ್ದು ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದ್ದು, ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಕೇಂದ್ರ ಸರ್ಕಾರದಿಂದ ಧ್ವಜ ಸಂಹಿತೆ ತಿದ್ದುಪಡಿ: ಬಿ.ಕೆ. ಹರಿಪ್ರಸಾದ್ ವಿರೋಧ
ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ತಾಲೂಕು ಆಡಳಿತ ಹಾಗೂ ಪೋಲಿಸ್ ಇಲಾಖೆ ತನಿಖೆ ನಡೆಸಿ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
ರಾಷ್ಟ್ರಧ್ವಜ ಅಥವಾ ರಾಷ್ಟ್ರಗೀತೆಗೆ ಅವಹೇಳನ ಮಾಡಿದರೆ ಮೂರು ವರ್ಷ ಜೈಲು ಶಿಕ್ಷೆ ಜೊತೆಗೆ ದಂಡ ಕಟ್ಟಬೇಕು. ಭಾರತ ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜಕ್ಕೆ ಅವಹೇಳನ ಮಾಡದಂತೆ ಭಾರತ ಸರ್ಕಾರ ರಾಷ್ಟ್ರೀಯ ಗೌರವ ಕಾಯ್ದೆ 1971 ಮೂಲಕ ಕೊಟ್ಟಿರುವ ರಕ್ಷಣೆಯಿದು. ರಾಷ್ಟ್ರದ್ವಜವನ್ನು ಉರಿಸುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ, ಮಾತು, ಬರಹ ಅಥವಾ ಕೃತ್ಯದ ಮೂಲಕ ಅಗೌರವ ತೋರಿದರೆ ರಾಷ್ಟ್ರೀಯ ಗೌರವದ ಅವಮಾನ ವಿರೋಧಿ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂದು ಆ ಕಾಯ್ದೆಯಲ್ಲಿ ಹೇಳಲಾಗಿದೆ.