- ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದ ಸಂಪತ್ ರಾಜ್, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ನಾಪತ್ತೆ
ಬೆಂಗಳೂರು: ಬೆಂಗಳೂರು ನಗರದ ಮಾಜಿ ಮೇಯರ್, ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಸಂಪತ್ ರಾಜ್ ನಾಪತ್ತೆಯಾಗಿದ್ದಾರೆ.
ಗಲಭೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಸಹ ಇದನ್ನು ಖಚಿತಪಡಿಸಿದ್ದಾರೆ.ಕೋವಿಡ್ ಸೋಂಕು ತಗುಲಿದ್ದ ಸಂಪತ್ ರಾಜ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ಗುರುವಾರ ಡಿಸ್ಚಾರ್ಜ್ ಮಾಡಲಾಗಿದ್ದು, ಬಳಿಕ ಅವರು ನಾಪತ್ತೆಯಾಗಿದ್ದಾರೆ.
ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಬಗ್ಗೆ ಎಸಿಪಿ ವೇಣುಗೋಪಾಲ್ ತನಿಖೆ ನಡೆಸುತ್ತಿದ್ದಾರೆ. ಗುರುವಾರ ಅವರು ಆಸ್ಪತ್ರೆಗೆ ಭೇಟಿ ನೀಡಿದಾಗ ಸಂಪತ್ ರಾಜ್ ಪರಾರಿಯಾಗಿರುವುದು ಪತ್ತೆಯಾಗಿದೆ.
ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನಕ್ಕೆ ಆಪ್ ಆಗ್ರಹ ಸಂಪತ್ ರಾಜ್ ಡಿಸ್ಚಾರ್ಜ್ ಮಾಡುವ ಮೊದಲು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಆಸ್ಪತ್ರೆ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿತ್ತು. ಆದರೆ, ಅದನ್ನು ಪಾಲಿಸದ ಸಿಬ್ಬಂದಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಸಂಪತ್ ರಾಜ್ ಆರೋಪಿ. ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿಯೂ ಅವರ ಹೆಸರು ಉಲ್ಲೇಖಿಸಿದ್ದಾರೆ. ಆದರೆ, ಕೋವಿಡ್ ಸೋಂಕಿನ ಕಾರಣ ಅವರನ್ನು ಬಂಧಿಸಿರಲಿಲ್ಲ.
ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ಪಿ. ನವೀನ್ ಒಂದು ಸಮುದಾಯದ ವಿರುದ್ಧ ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಗಲಭೆ ಆರಂಭವಾಗಿತ್ತು. ಬಳಿಕ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.
ಪಿ.ನವೀನ್ ಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 400ಕ್ಕೂ ಅಧಿಕ ಜನರನ್ನು ಬಂಧಿಸಲಾಗಿತ್ತು. ಗಲಭೆ ಹಿಂದೆ ಸಂಪತ್ ರಾಜ್ ಕೈವಾಡ ಇದೆ ಎಂಬುದು ಆರೋಪವಾಗಿದೆ.