ಡಿಕೆಶಿ ಸಹೋದರರ ಮನೆ ಮೇಲೆ ಸಿಬಿಐ ದಾಳಿ

Please follow and like us:
  • ಅಕ್ರಮ ಹಣ  ಸಂಪಾದನೆ ಪ್ರಕರಣದಲ್ಲಿ ಇಡಿ, ಐಟಿ ದಾಳಿ ಎದುರಿಸಿದ್ದ ಡಿಕೆ ಶಿವಕುಮಾರ್‍
  • ಡಿಕೆಶಿ ಸಹೋದರ, ಸಂಸದ ಡಿ.ಕೆ.ಸುರೇಶ್ ಮನೆ ಮೇಲೂ ದಾಳಿ, ವಿಚಾರಣೆ

ಬೆಂಗಳೂರು: ಕೆಪಿಸಿಸಿ  ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆಶಿ ಮನೆ ಮೇಲೆ ದಾಳಿ ನಡೆಸಿದ ಐವರು ಸಿಬಿಐ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇಂದು ಮುಂಜಾನೆ 6 ಗಂಟೆಗೆ ಸಿಬಿಐ ದಾಳಿ ನಡೆಸಲಾಗಿದೆ. ತುಮಕೂರು ಜಿಲ್ಲೆಯ ಶೀರಾ ಮತ್ತು ಬೆಂಗಳೂರಿನ ಆರ್‍.ಆರ್‍.ನಗರ ಉಪಚುನಾವಣೆ ಹೊಸ್ತಿಲಲ್ಲಿ ಸಿಬಿಐ ದಾಳಿ ರಾಜಕೀಯ ತಿರುವು ಪಡೆದುಕೊಳ್ಳಲಿದೆ.

ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದಿಂದ ಹಣ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿಂದೆ ಐಟಿ ಮತ್ತು ಇಡಿ ಅಧಿಕಾರಿಗಳು ಕೂಡ ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಡಿಕೆ ಶಿವಕುಮಾರ್ ಜೈಲು ಸೇರಿದ್ದರು. ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಈ ಪ್ರಕರಣದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಹಿನ್ನೆಲೆಯಲ್ಲಿ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ನಡೆದಿರುವ ಸಾಧ್ಯತೆಯಿದೆ.

ಡಿ.ಕೆ. ಶಿವಕುಮಾರ್ ಮನೆ ಜೊತೆಗೆ ಸಂಸದ ಡಿ.ಕೆ. ಸುರೇಶ್ ಮನೆ ಮೇಲೂ ದಾಳಿ ನಡೆಸಲಾಗಿದೆ. ಈಗಾಗಲೇ ಐಟಿ ಮತ್ತು ಇಡಿ ಎರಡೂ ತನಿಖಾ ಸಂಸ್ಥೆಗಳಿಂದ ಡಿಕೆಶಿ ವಿಚಾರಣೆ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಸಿಬಿಐ ಅಧಿಕಾರಿಗಳಿಂದ ವಿಚಾರಣೆ ನಡೆಯುತ್ತಿರುವುದರಿಂದ ಕಾಂಗ್ರೆಸ್​ನ ಟ್ರಬಲ್ ಶೂಟರ್ ಎಂದೇ ಕರೆಸಿಕೊಳ್ಳುವ ಡಿಕೆ ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

ಡಿಕೆ ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್​ಗೆ ಕೋಟಿ ಕೋಟಿ ಹಣ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಸಿಬಿಐ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರ ಮನೆಯನ್ನು ಪರಿಶೀಲನೆ ಮಾಡುತ್ತಿದ್ದಾರೆ. ಸಿಬಿಐ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಇಬ್ಬರನ್ನೂ ವಿಚಾರಣೆ ಮಾಡುತ್ತಿದ್ದಾರೆ. ಡಿ.ಕೆ. ಸುರೇಶ್ ಕೂಡ ಡಿ.ಕೆ. ಶಿವಕುಮಾರ್ ಮನೆಯಲ್ಲೇ ಇದ್ದರು.. ಹೀಗಾಗಿ, ಸಹೋದರರಿಬ್ಬರ ವಿಚಾರಣೆಯನ್ನೂ ಒಟ್ಟಿಗೇ ಮಾಡುತ್ತಿದ್ದಾರೆ.

Please follow and like us:
Donate Janashakthi Media

Leave a Reply

Your email address will not be published. Required fields are marked *