ಬೆಂಗಳೂರು : ರಾಜ್ಯ ದಲ್ಲಿ ವಿಧಾನಸಭೆ ಚುನಾವಣೆಯು ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದ್ದು, ನೀತಿ ಸಂಹಿತೆಯು ಜಾರಯಾಗಿದೆ. ಎಲ್ಲಾ ಪಕ್ಷಗಳಲ್ಲೂ ಪಕ್ಷಾಂತರ ಪರ್ವ ಆರಂಭಗೊಂಡಿದೆ. ಇದೀಗ ಮಾಜಿ ಸಚಿವ ಹಾಗೂ ಶಿವಮೊಗ್ಗ ಜಿಲ್ಲೆಯ ಪ್ರಭಾವಿ ಹಿಂದುಳಿದ ವರ್ಗಗಳ ನಾಯಕ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ.ರಾಜ ನಂದಿನಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬುಧವಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವೆ ಶೋಭಾ ಕರದ್ಲಾಂಜೆ ಸೇರಿದಂತೆ ಮತ್ತಿತರರ ಸಮ್ಮಖದಲ್ಲಿ ಸೇರ್ಪಡೆಗೊಂಡರು. ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಯಾಗಿದ್ದ ರಾಜ ನಂದಿನಿ ಅವರಿಗೆ ಟಿಕೆಟ್ ಕೈ ತಪ್ಪಿತ್ತು. ಮಾಜಿ ಶಾಸಕ ಗೋಪಾಲ ಕೃಷ್ಣ ಬೇಳೂರು ಅವರಿಗೆ ಟಿಕೆಟ್ ಸಿಕ್ಕಿದ್ದರಿಂದ ಅವರು ಅಸಮಾಧಾನಗೊಂಡಿದ್ದರು.
ಇದನ್ನೂ ಓದಿ : ಬಹು ಸಂಸ್ಕೃತಿಯ ಭಾರತದಲ್ಲಿ ತಕ್ಷಣದ ಬದಲಾವಣೆ ಅಸಾಧ್ಯ: ಕಾಗೋಡು ತಿಮ್ಮಪ್ಪ
ಕಾಗೋಡು ತಿಮ್ಮಪ್ಪ ತಮ್ಮ ಪುತ್ರಿಗೆ ಟಿಕೆಟ್ ಕೊಡಿಸಲು ಹೈ ಕಮಾಂಡ್ ಮಟ್ಟದಲ್ಲಿ ಸಾಕಷ್ಟು ಪ್ರಯತ್ನ ನಡೆಸಿದ್ದರು. ಆದರೆ, ಕೊನೆ ಕ್ಷಣದಲ್ಲಿ ಪಕ್ಷವು ಬೇಳೂರಿಗೆ ಮಣೆ ಹಾಕಿದ್ದರಿಂದ ರಾಜ ನಂದಿನಿ ಬಿಜೆಪಿ ಸೇರಲು ಮುಂದಾಗಿದ್ದಾರೆ.
ಬಿಜೆಪಿ ಸಾಗರ ಕ್ಷೇತ್ರದಿಂದ ಹಾಲಿ ಶಾಸಕರಾಗಿದ್ದ ಹರತಾಳು ಹಾಲಪ್ಪ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಕ್ಷೇತ್ರದಲ್ಲಿ ಕಾಗೋಡು ಸಾಕಷ್ಟು ಹಿಡಿತ ಸಾಧಿಸಿದ್ದು ಪುತ್ರಿ ಬಿಜೆಪಿ ಸೇರ್ಪಡೆ ಹಾಲಪ್ಪ ಅವರಿಗೆ ಬಲ ಬಂದಂತಾಗಿದೆ ಎಂಬ ಮಾತುಗಳು ಕೇಳಿ ಬಂದಿದೆ.