ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕುಸಿದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬರ ಪರಿಸ್ಥಿತಿಯತ್ತ ಸಾಗುತ್ತಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಕೊರತೆ ಎದುರಾಗುವ ಸಾಧ್ಯತೆ ಇರುವುದರಿಂದ ಜನರು ‘ಮಾನಸಿಕವಾಗಿ ಸಿದ್ಧರಾಗಿರಬೇಕು’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ. ಕರ್ನಾಟಕದಲ್ಲಿ
ರಾಜ್ಯದಲ್ಲಿ ಮಳೆಯ ಪ್ರಮಾಣ ನಿರೀಕ್ಷೆಗಿಂತ ಕಡಿಮೆಯಾಗಿದ್ದು, ಬರ ಪರಿಸ್ಥಿತಿ ಕುರಿತು ಸರ್ಕಾರ ಸಮಗ್ರ ವರದಿ ಸಿದ್ಧಪಡಿಸುತ್ತಿದೆ ಎಂದು ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಸರ್ಕಾರದಿಂದ ಬರ ಪರಿಸ್ಥಿತಿಯ ಪರಿಶೀಲನೆ ನಡೆಯುವ ಹಿನ್ನೆಲೆಯಲ್ಲಿ, ರಾಜ್ಯದ ವಾಸ್ತವ ಸ್ಥಿತಿಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ವರದಿ ಸಿದ್ಧಪಡಿಸಲಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಅಧ್ಯಯನ ಪೂರ್ಣಗೊಂಡಿದ್ದು, ವರದಿಗಳು ಬಂದಿವೆ. ಉಳಿದ ಪ್ರದೇಶಗಳ ವರದಿಗಳನ್ನು ಸಿದ್ಧಪಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸರ್ಕಾರ ವ್ಯವಸ್ಥೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಇದೇ ವೇಳೆ ವಿದ್ಯುತ್ ಕ್ಷೇತ್ರದಲ್ಲಿಯೂ ಸಮಸ್ಯೆಗಳು ಎದುರಾಗುತ್ತಿವೆ ಎಂದು ಅವರು ಒಪ್ಪಿಕೊಂಡಿದ್ದಾರೆ. ಜನರು ಆತಂಕಪಡುವ ಅಗತ್ಯವಿಲ್ಲ ಎಂದಿರುವ ಅವರು, ಮುನ್ನೆಚ್ಚರಿಕೆಯ ಕ್ರಮವಾಗಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬರ ಪರಿಸ್ಥಿತಿಯನ್ನು ರಾಜಕೀಯಗೊಳಿಸದಂತೆ ಶಾಸಕರಿಗೆ ಮನವಿ ಮಾಡಿದ ಶಿವಕುಮಾರ್, ಪ್ರತಿಭಟನೆಗಳನ್ನು ನಡೆಸುವ ಮೂಲಕ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. “ಮಳೆ ಪ್ರಮಾಣ ತುಂಬಾ ಕಡಿಮೆಯಾಗುತ್ತಿದೆ. ಶಾಸಕರು ಆತಂಕಪಡುವ ಅಗತ್ಯವಿಲ್ಲ. ರಾಜಕೀಯ ಉದ್ದೇಶಕ್ಕಾಗಿ ಪ್ರತಿಭಟನೆ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ. ಸರ್ಕಾರ ನಿಮಗಿಂತ ಹೆಚ್ಚು ಕಾಳಜಿ ವಹಿಸುತ್ತಿದೆ” ಎಂದು ಅವರು ಹೇಳಿದ್ದಾರೆ. ಪ್ರತಿಪಕ್ಷಗಳು ಪರಿಸ್ಥಿತಿಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿವೆ ಎಂಬ ಆರೋಪವನ್ನೂ ಮಾಡಿದ್ದಾರೆ. ಕರ್ನಾಟಕದಲ್ಲಿ
ಇದನ್ನೂ ಓದಿ : ಕಸ್ತೂರಿ ರಂಗನ್ ವರದಿ: 7ನೇ ಕರಡು ಅಧಿಸೂಚನೆ ವಿರೋಧಿಸಿ ಸಚಿವ ರಾಮಲಿಂಗಾರೆಡ್ಡಿಗೆ ಸಿಪಿಐ(ಎಂ) ನಿಯೋಗ ಮನವಿ
ರಾಜ್ಯ ಸರ್ಕಾರ ಈಗಾಗಲೇ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಇನ್ನಷ್ಟು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವ ಸಾಧ್ಯತೆಯಿದ್ದು, ಈ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ. ರೈತರ ಸಮಸ್ಯೆಗಳ ಚರ್ಚೆ ಹಾಗೂ ಬರ ಪರಿಸ್ಥಿತಿಯನ್ನು ಎದುರಿಸುವ ಕ್ರಮಗಳ ಕುರಿತು ಚರ್ಚಿಸಲು ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಇದೇ ವೇಳೆ ಈ ವಾರ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿಯೂ ರೈತರೊಂದಿಗೆ ಚರ್ಚಿಸಿ ಮತ್ತಷ್ಟು ಘೋಷಣೆಗಳನ್ನು ಮಾಡುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ. ಕರ್ನಾಟಕದಲ್ಲಿ
ಮುಖ್ಯಮಂತ್ರಿಗಳ ಈ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶವೂ ವ್ಯಕ್ತವಾಗಿದೆ. ಬರ, ಕುಡಿಯುವ ನೀರಿನ ಕೊರತೆ ಹಾಗೂ ವಿದ್ಯುತ್ ಸಮಸ್ಯೆ ಎದುರಾಗಬಹುದು ಎಂದು ಹೇಳಿ ಜನರನ್ನು ‘ಮಾನಸಿಕವಾಗಿ ಸಿದ್ಧರಾಗಿ’ ಎಂದು ಎಚ್ಚರಿಸುವುದಕ್ಕಿಂತ, ಇಂತಹ ಪರಿಸ್ಥಿತಿ ಜನರ ಬದುಕಿನ ಮೇಲೆ ಪರಿಣಾಮ ಬೀರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಸರ್ಕಾರದ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಜನರು ಸಂಕಷ್ಟವನ್ನು ಎದುರಿಸಲು ಸಿದ್ಧರಾಗಬೇಕು ಎಂದು ಹೇಳುವುದು ಮಾತ್ರವಲ್ಲದೆ, ಸರ್ಕಾರ ತನ್ನ ಆಡಳಿತಾತ್ಮಕ ಸಾಮರ್ಥ್ಯ ಬಳಸಿಕೊಂಡು ಜನರನ್ನು ಕಷ್ಟದಲ್ಲಿ ಸಿಲುಕದಂತೆ ನೋಡಿಕೊಳ್ಳಬೇಕು. ಬರ ಪರಿಸ್ಥಿತಿ ಎದುರಾಗುವ ಮುನ್ನವೇ ಕುಡಿಯುವ ನೀರು, ಕೃಷಿ, ಜಾನುವಾರು, ವಿದ್ಯುತ್ ಸೇರಿದಂತೆ ಅಗತ್ಯ ಕ್ಷೇತ್ರಗಳಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಹೊಣೆ. ಜನರಿಗೆ ಆತಂಕ ಮೂಡಿಸುವ ಹೇಳಿಕೆಗಳ ಬದಲಿಗೆ, ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಕೈಗೊಳ್ಳಲಿರುವ ಸ್ಪಷ್ಟ ಕ್ರಮಗಳ ಬಗ್ಗೆ ಭರವಸೆ ನೀಡಬೇಕು ಎಂಬ ಆಗ್ರಹವೂ ಸಾರ್ವಜನಿಕವಾಗಿ ಕೇಳಿಬಂದಿದೆ. ಕರ್ನಾಟಕದಲ್ಲಿ
ಇದನ್ನೂ ನೋಡಿ : ಜಿಡಿಪಿ ಬೆಳವಣಿಗೆ ಎಂದರೆ ಅಸಮಾನತೆ, ನಿರುದ್ಯೋಗದ ಬೆಳವಣಿಗೆಯೇ? Janashakthi Media
