ಬೆಂಗಳೂರು: ರಾಜ್ಯದಲ್ಲಿ ಬರದಿಂದ ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಮತ್ತು ಎರಡು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದ್ದು, 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಬರಪೀಡಿತ ತಾಲ್ಲೂಕುಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ರಾಷ್ಟ್ರೀಯ ವಿಕೋಪ ಪರಿಹಾರ ಕಾರ್ಯ ಕೈಗೊಳ್ಳಲು ರಾಷ್ಟ್ರೀಯ ವಿಕೋಪ ಪರಿಹಾರ ನಿಧಿ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ನೆರವು ಕೋರಲು ಮನವಿ ಸಿದ್ದಪಡಿಸುವ ಕಂದಾಯ, ಕೃಷಿ, ತೋಟಗಾರಿಕೆ ಮತ್ತಿತರ ಇಲಾಖೆಗಳ ಅಧಿಕಾರಿಗಳ ಜತೆ ಸೆ-19 ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಇದನ್ನೂ ಓದಿ:ಕೇಂದ್ರದ ಮಾನದಂಡ ಆಧರಿಸಿ ಬರ ಪೀಡಿತ ಪ್ರದೇಶ ಘೋಷಣೆ:ಕಂದಾಯ ಸಚಿವ ಕೃಷ್ಣ ಬೈರೇಗೌಡ
ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಒಂದು ವಾರದೊಳಗೆ ಮನವಿ ಪತ್ರ ಸಲ್ಲಿಸಲಾಗುವುದು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ನಿಯಮಗಳ ಪ್ರಕಾರ ಒಟ್ಟು 5000 ರಿಂದ 6000 ಕೋಟಿ ರೂಪಾಯಿ ಪರಿಹಾರ ಪಡೆಯಲು ಅವಕಾಶವಿದೆ ಎಂದು ಸಚಿವರು ತಿಳಿಸಿದ್ದಾರೆ.
‘ರಾಜ್ಯಾದ್ಯಂತ ಈ ವರ್ಷ ತೀವ್ರ ಮಳೆಯ ಕೊರತೆ ಉಂಟಾಗಿದ್ದು, ಈಗಾಗಲೇ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅಂದಾಜು 42 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು, 2 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಬರಪೀಡಿತ ತಾಲೂಕುಗಳಿಗೆ ಸಂಬಂಧಿಸಿದಂತೆ ಕೇಂದ್ರಕ್ಕೆ ಸಲ್ಲಿಸಬೇಕಾದ ಮನವಿ ಪತ್ರವನ್ನು ತ್ವರಿತವಾಗಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮನವಿ ಪತ್ರ ಸಿದ್ಧಪಡಿಸುವ ಕಾರ್ಯ ಈಗಾಗಲೇ ಶೇ.70ರಷ್ಟು ಪೂರ್ಣಗೊಂಡಿದೆ. ಮೇವು, ಕುಡಿಯುವ ನೀರಿಗೆ ಪ್ರತ್ಯೇಕ ಪರಿಹಾರ ಪಡೆಯಲು ಅವಕಾಶವಿದ್ದು, ಮುಂದಿನ ಮೂರು ದಿನಗಳಲ್ಲಿ ಸಂಪೂರ್ಣ ಮನವಿ ಪತ್ರ ಸಿದ್ಧಪಡಿಸಲಾಗುವುದು ಎಂದರು.
ಇದನ್ನೂ ಓದಿ:ರಾಜ್ಯದ 195 ತಾಲ್ಲೂಕುಗಳು ಬರಪೀಡಿತ: ಸರ್ಕಾರದ ಅಧಿಕೃತ ಘೋಷಣೆ
ಮನವಿ ಪತ್ರ ಸಲ್ಲಿಕೆಯಾದ ಕೂಡಲೇ ರಾಜ್ಯಕ್ಕೆ ಆಗಮಿಸಿ ಪರಿಶೀಲನೆ ನಡೆಸುವುದಾಗಿ ಕೇಂದ್ರ ಸರ್ಕಾರದ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಹೀಗಾಗಿ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ವಾರಾಂತ್ಯದೊಳಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಕೇಂದ್ರದ ಬರ ಮಾರ್ಗಸೂಚಿಯಂತೆ 161 ತಾಲೂಕುಗಳಲ್ಲಿ ತೀವ್ರ ಬರವಿದ್ದು, 34ರಲ್ಲಿ ಭಾಗಶಃ ಬರವಿದೆ. ಉಳಿದ 41 ತಾಲೂಕುಗಳಲ್ಲಿಯೂ ಪರಿಸ್ಥಿತಿ ಭಿನ್ನವಾಗಿಲ್ಲ. ಆದರೆ ಮಾರ್ಗಸೂಚಿ ಪ್ರಕಾರ ಅಲ್ಲಿ ಬರ ಘೋಷಣೆ ಮಾಡಲು ಸಾಧ್ಯವಿಲ್ಲ. ಈ ತಾಲೂಕುಗಳಲ್ಲಿನ ಬರ ಪರಿಸ್ಥಿತಿಯ ಕುರಿತು ಈ ತಿಂಗಳ ಅಂತ್ಯದಲ್ಲಿ ಮತ್ತೊಮ್ಮೆ ಪರಿಶೀಲಿಸಲಾಗುವುದು ಎಂದಿದ್ದಾರೆ.
ವಿಡಿಯೋ ನೋಡಿ:ಪರ್ಯಾಯ ಕೃಷಿ ಧೋರಣೆಗಳು:ಭೂಮಿ ಹಕ್ಕು ನಿಜವಾದ ಸ್ವಾತಂತ್ರ್ಯ – ಯು. ಬಸವರಾಜ Janashakthi Media