ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಪ್ರಮಾಣವಚನ ಸ್ವೀಕಾರ

ನವದೆಹಲಿ: ಭಾರತದ ಸುಪ್ರೀಂ ಕೋರ್ಟಿನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ ಅವರು ಇಂದು(ನವೆಂಬರ್‌ 09) ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು.

ಇಂದು ಬೆಳಗ್ಗೆ 10ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಸರಳ ಸಮಾರಂಭವನ್ನು ಏರ್ಪಿಡಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿಯಾಗಿದ್ದ ಉದಯ್‌ ಉಮೇಶ್ ಲಲಿತ್ ಅವರ ಅಧಿಕಾರಾವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಕಾರ್ಯನಿರ್ವಹಿಸಲಿದ್ದಾರೆ.

ನವೆಂಬರ್‌ 11, 1959 ರಂದು ಜನಿಸಿದ ಡಿ.ವೈ. ಚಂದ್ರಚೂಡ್ ಅವರು ಮೇ 13, 2016 ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡರು. ಅವರು ಅಕ್ಟೋಬರ್‌ 31, 2013 ರಿಂದ ಸುಪ್ರೀಂ ಕೋರ್ಟ್‌ಗೆ ನೇಮಕಗೊಳ್ಳುವವರೆಗೆ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಇದಕ್ಕೂ ಮುಂಚಿತವಾಗಿ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿದ್ದರು.

ಮುಖ್ಯನ್ಯಾಯಮೂರ್ತಿ ಆಗಿ ಕಾರ್ಯ ನಿರ್ವಹಿಸಿದ ತಂದೆ, ಮಗ

ಸುಪ್ರೀಂಕೋರ್ಟ್ ನ್ಯಾಯಾಧೀಶರು 65ನೇ ವಯಸ್ಸಿನಲ್ಲಿ ನಿವೃತ್ತರಾಗಲಿದ್ದಾರೆ. ಹೀಗಾಗಿ, ಡಿ.ವೈ.ಚಂದ್ರಚೂಡ್ ಅವರು ನವೆಂಬರ್ 10, 2024 ರವರೆಗೆ ಅಧಿಕಾರಾವಧಿ ಹೊಂದಿರುತ್ತಾರೆ. ಡಿ.ವೈ.ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್‌ನ 2ನೇ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದಾರೆ. ಅವರ ತಂದೆ ನ್ಯಾಯಮೂರ್ತಿ ವೈ.ವಿ ಚಂದ್ರಚೂಡ್ ಫೆಬ್ರವರಿ 2, 1978 ರಿಂದ ಜುಲೈ 11, 1985 ರವರೆಗೆ ಭಾರತದ 16ನೇ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು.

ನಿವೃತ್ತಿ ಹೊಂದಿರುವ ಯುಯು ಲಲಿತ್ ಅವರು ಕೇವಲ 74 ದಿನಗಳ ಅಲ್ಪಾವಧಿಗೆ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು.

ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್, ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜೂ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Donate Janashakthi Media

Leave a Reply

Your email address will not be published. Required fields are marked *