ಪಿಂಚಣಿಗಾಗಿ ಮುಷ್ಕರ – ಇಬ್ಬರು ಶಿಕ್ಷಕರ ಆತ್ಮಹತ್ಯೆ; ಸರ್ಕಾರದ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ

ಬೆಂಗಳೂರು: ಪಿಂಚಣಿ ಯೋಜನೆ ಜಾರಿಗೆ ತರಬೇಕು ಎಂದು  ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಜಿಲ್ಲೆ ಬಾದಾಮಿಯ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲದ ಶಂಕರಪ್ಪ ಬೋರಡ್ಡಿ ರಾಜ್ಯ ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಇದನ್ನು ಸರ್ಕಾರಿ ಕೊಲೆಗಳು ಅನ್ನದೇ ಬೇರೇನು ಹೇಳಬೇಕು? ಎಂದು ಪ್ರಶ್ನಿಸಿದ್ದಾರೆ.

ಕಳೆದ 141 ದಿನಗಳಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ ಶಾಲಾ ಶಿಕ್ಷಕರ ಗೋಳು ಕೇಳುವವರಿಲ್ಲ. ಶಿಕ್ಷಕರು ಕೇಳುತ್ತಿರುವುದು ತಮ್ಮ ಹಕ್ಕಿನ ಪಿಂಚಣಿಯನ್ನು ಎಂಬ ಕನಿಷ್ಠ ಜ್ಞಾನವಾದರೂ ಈ ಸರ್ಕಾರಕ್ಕೆ ಬೇಡವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಶಾಲಾ ಶಿಕ್ಷಕರನ್ನು ‘ಸರ್’, ‘ಮೇಡಂ’ ಎನ್ನುವ ಬದಲು ‘ಟೀಚರ್‌‌’ ಎಂದು ಸಂಬೋಧಿಸಬೇಕು: ಕೇರಳ ಮಕ್ಕಳ ಹಕ್ಕು ಆಯೋಗ

ಬಸವರಾಜ ಬೊಮ್ಮಾಯಿ ಅವರು ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು? ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, ಶಿಕ್ಷಕರು ಪ್ರತಿಭಟನೆ ಆರಂಭಿಸಿ 141 ದಿನಗಳು ಕಳೆದರೂ ಇನ್ನು ಈ ವಿಚಾರ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರ ಇಷ್ಟು ದಿನ ಕೋಮಾದಲ್ಲಿತ್ತು ಎಂಬುದನ್ನು ಸ್ವತಃ ಒಪ್ಪಿಕೊಂಡಂತಾಗಿದೆ ಎಂದು ಛೇಡಿಸಿದ್ದಾರೆ.

ಸದಾ ಕಾಲ ಕಿವಿಯಲ್ಲಿ ಕಮಿಷನ್ ಸದ್ದು ಗುಯ್ಗುಡುವಾಗ ಬಡವರ ಕೂಗು ಕೇಳುವುದಾದರೂ ಹೇಗೆ ಮುಖ್ಯಮಂತ್ರಿಗಳೇ? ಕೋಮುಗಲಭೆ ನಡೆದು ಕೊಲೆಯಾದರೆ ಗಂಟೆಯೊಳಗೆ ಹೆಣದ ಸುತ್ತ ನೊಣದಂತೆ ಹೋಗಿ ಕೂರುವ ಬಿಜೆಪಿ ಸರ್ಕಾರಕ್ಕೆ, ಸಾವಿರಾರು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೀವಗಳು ಅಮೂಲ್ಯ ಅನ್ನಿಸುವುದಿಲ್ಲವೇ? ಎಂದಿದ್ದಾರೆ.

ಇನ್ನಷ್ಟು ಜೀವಗಳು ಬಲಿಯಾಗುವ ಮುನ್ನ ಮುಷ್ಕರದಲ್ಲಿ ತೊಡಗಿರುವ ಅನುದಾನಿತ ಶಾಲಾ ಶಿಕ್ಷಕರನ್ನು ಕರೆದು ಸರ್ಕಾರ ಮಾತುಕತೆ ನಡೆಸಿ, ಅವರ ಬೇಡಿಕೆಗಳನ್ನು ತಕ್ಷಣ ಈಡೇರಿಸುವ ಕೆಲಸ ಮಾಡಬೇಕು ಮತ್ತು ಈಗಾಗಲೇ ಪ್ರಾಣ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *