ಹಿಮಾಚಲ ಪ್ರದೇಶ ವಿಧಾನಸಭಾ ಚುಣಾವಣೆ; ನ.12ಕ್ಕೆ ಮತದಾನ

ನವದೆಹಲಿ: ಹಿಮಾಚಲ ಪ್ರದೇಶದ ವಿಧಾನಸಭೆಗೆ ನಿರೀಕ್ಷೆಯಂತೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದೇ ನವೆಂಬರ್ 12ರಂದು ಮತದಾನ ನಡೆಯಲಿದೆ ಮತ್ತು ಡಿಸೆಂಬರ್‌ 8ಕ್ಕೆ ಮತ ಎಣಿಕೆ ನಡೆಯಲಿದೆ.

ಇಂದು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್  68 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 12ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ  ಅಕ್ಟೋಬರ್ 25 ಕೊನೆ ದಿನವಾಗಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಮಾಹಿತಿ ನೀಡಿದರು.‌

ಯಾವುದೇ ಅಡೆ ತಡೆ ಇಲ್ಲದೆ ಚುನಾವಣೆ ನಡೆಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಹಣ ಸಾಗಾಣೆ, ಡ್ರಗ್ಸ್ ಸೇರಿದಂತೆ ಇತರ ಯಾವುದೇ ಕಾನೂನು ಬಾಹಿರ ಸಾಗಣೆಗೆ ಅವಕಾಶ ನೀಡದಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

80 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನ ಮತದಾರರ ಮನೆಗೆ ತೆರಳಿ ಮತದಾನ ಮಾಡಿಸಿಕೊಳ್ಳಲಾಗುವುದು. ಸಿಬ್ಬಂಧಿಗಳು ಅವರ ಮನೆಗೆ ತೆರಳಿ ಮತದಾನಕ್ಕೆ ವ್ಯವಸ್ಥೆ ಮಾಡಲಿದ್ದಾರೆ. ಸಂಪೂರ್ಣ ಪ್ರಕ್ರಿಯೆ ವಿಡಿಯೋ ರೆಕಾರ್ಡ್ ಮಾಡಲಾಗುವುದು. ಹಾಗೇ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಕೋವಿಡ್ ಮಾರ್ಗಸೂಚಿಗಳು ಪಾಲನೆಯಾಗಲಿದೆ ಎಂದು ಸ್ಪಷ್ಟಪಡಿಸಿದರು.

ಮತದಾನ ಬಳಿಕ ಎಣಿಕೆಗೆ ಇಷ್ಟೊಂದು ಅಂತರವೇಕೆ ಎಂದು ಕೇಳಲಾದ ಪ್ರಶ್ನೆಗೆ ಅಲ್ಲಿನ ಹವಾಮಾನ ಪರಿಸ್ಥಿತಿಯನ್ನು ಪರಿಗಣಿಸಿ ಚುನಾವಣೆ ದಿನಾಂಕ ನಿಗದಿ ಮಾಡಲಾಗಿದೆ. ಸಮಸ್ಯೆಯಾದಲ್ಲಿ ಬೇರೆ ದಿನ ಚುನಾವಣೆ ಮಾಡಲಾಗುತ್ತದೆ ಎಂದು ರಾಜೀವ್‌ ಕುಮಾರ್ ಉತ್ತರಿಸಿದರು.

ಹಿಮಾಚಲ ಪ್ರದೇಶದ ವಿಧಾನಸಭೆಯ ಅವಧಿ 2023ರ ಜನವರಿ 8ರಂದು ಅಂತ್ಯಗೊಳ್ಳಲಿದೆ. ವಿಧಾನಸಭೆ 68 ಸದಸ್ಯ ಬಲ ಹೊಂದಿದ್ದು, ಬಹುಮತಕ್ಕೆ 35 ಸ್ಥಾನದ ಅಗತ್ಯವಿದೆ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 44 ಸ್ಥಾನಗಳಲ್ಲಿ ಗೆಲುವು ಗಳಿಸಿ ಅಧಿಕಾರ ಹಿಡಿದಿತ್ತು. ಕಾಂಗ್ರೆಸ್ 21 ಸ್ಥಾನವನ್ನು ಗೆದ್ದುಕೊಂಡಿತ್ತು.

Donate Janashakthi Media

Leave a Reply

Your email address will not be published. Required fields are marked *