ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಎಂಟು ವಿಶ್ವ ವಿದ್ಯಾಲಯಗಳ ಸ್ಥಾಪನೆಗೆ ಅನುವು ಮಾಡಿಕೊಡುವ ಉದ್ದೇಶದಿಂದ ‘ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ಇಂದು(ಆಗಸ್ಟ್ 25) ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಅಶ್ವತ್ಥನಾರಾಯಣ, ಕಾಯ್ದೆ ತಿದ್ದುಪಡಿಯಿಂದಾಗಿ ನೂತನವಾಗಿ ಚಾಮರಾಜನಗರ, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆ, ಬೀದರ್ ಮತ್ತು ಮಂಡ್ಯ ವಿಶ್ವವಿದ್ಯಾಲಯಗಳು ಸ್ಥಾಪನೆ ಸುಗಮವಾಗಿ ನಡೆಯಲಿದೆ ಎಂದರು.
ನೂತನ ವಿಶ್ವವಿದ್ಯಾಲಯಗಳ ಪೈಕಿ ಚಾಮರಾಜನಗರದ 18, ಹಾಸನದ 36, ಹಾವೇರಿಯ 40, ಬೀದರ್ನ 140, ಕೊಡಗು 24, ಕೊಪ್ಪಳದ 40 ಮತ್ತು ಬಾಗಲಕೋಟೆಯ 71 ಕಾಲೇಜುಗಳು ಆಯಾ ವಿಶ್ವವಿದ್ಯಾಲಯಗಳ ವ್ಯಾಪ್ತಿಗೆ ಬರಲಿವೆ ಎಂದು ತಿಳಿಸಿದರು. ಇವುಗಳ ಜತೆಗೆ ಮಂಡ್ಯ ವಿಶ್ವವಿದ್ಯಾಲಯ ವ್ಯಾಪ್ತಿಗೆ ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳು ಬರಲಿವೆ ಎಂದು ಸಚಿವರು ಸ್ಪಷ್ಪಡಿಸಿದರು.
ಮಂಡ್ಯ ವಿಶ್ವವಿದ್ಯಾಲಯವೊಂದು ಹೊರತುಪಡಿಸಿ ಉಳಿದ 7 ವಿವಿಗಳ ಆರಂಭವನ್ನು ಈ ವರ್ಷದ ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ ಈಗಾಗಲೇ ತಲಾ 2 ಕೋಟಿ ರೂಪಾಯಿಗಳಂತೆ ಒಟ್ಟು 14 ಕೋಟಿ ರೂಪಾಯಿ ಒದಗಿಸಲಾಗಿದೆ. ಏಕೀಕೃತ ವಿವಿಯಾಗಿದ್ದ ಮಂಡ್ಯದ ಸರಕಾರಿ ಕಾಲೇಜನ್ನು ಪೂರ್ಣ ಪ್ರಮಾಣದ ವಿವಿಯಾಗಿ ಮಾಡುವ ತೀರ್ಮಾನವನ್ನು ಇತ್ತೀಚೆಗೆ ಕೈಗೊಳ್ಳಲಾಗಿತ್ತು ಎಂದು ಅವರು ವಿವರಿಸಿದರು.
ಜಿಲ್ಲೆಗೊಂದು ವಿವಿ ಇರಬೇಕು ಎನ್ನುವುದು ಸರಕಾರದ ತೀರ್ಮಾನ. ಈ ಮೂಲಕ ಶೈಕ್ಷಣಿಕ ಅಸಮತೋಲನ ನಿವಾರಣೆ ಮಾಡಲಾಗುವುದು. ಜೊತೆಗೆ, ಯುವಜನರಿಗೆ ಮನೆ ಬಾಗಿಲಲ್ಲೇ ಗುಣಮಟ್ಟದ ಶಿಕ್ಷಣ ನೀಡುವ ಸದಾಶಯ ಇದೆ ಎಂದ ಸಚಿವರು, ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಆರ್ಥಿಕ ಮತ್ತು ಯೋಜನಾ ಇಲಾಖೆಗಳು ಒಪ್ಪಿಗೆ ನೀಡಿವೆ. ಇವು ಕಡಿಮೆ ಸ್ಥಳ, ಕಡಿಮೆ ಸಿಬ್ಬಂದಿ ಮತ್ತು ಕಡಿಮೆ ವೆಚ್ಚದೊಂದಿಗೆ ಕಾರ್ಯ ಚಟುವಟಿಕೆ ನಡೆಸಲಿವೆ ಎಂದು ಅವರು ಹೇಳಿದರು.