ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ದೋಷಪೂರಿತ ಮತ್ತು ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿರುವ ನಾಗರಿಕ ಸಮಾಜದ ವಿವಿಧ ಸಂಘಟನೆಗಳು ಸೆಪ್ಟೆಂಬರ್ 1ರಂದು ಬೆಂಗಳೂರಿನಲ್ಲಿ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ನಟ ಪ್ರಕಾಶ್ ರಾಜ್ ಅವರು ಆಗಸ್ಟ್ 25 ರಂದು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು. ಎಸ್‌ಐಆರ್
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಕರಡು ಮತದಾರರ ಪಟ್ಟಿಯಿಂದ ಹೊರಗುಳಿದಿವೆ ಎಂದು ಪ್ರಕಾಶ್ ರಾಜ್ ಆರೋಪಿಸಿದರು. ರಾಜ್ಯದಲ್ಲಿ ಮತದಾರರ ಪಟ್ಟಿಯ ಕರಡು ಪ್ರಕಟವಾಗಿರುವ ಹಿನ್ನೆಲೆಯಲ್ಲಿ, ಅರ್ಹ ಮತದಾರರ ಹಕ್ಕುಗಳನ್ನು ರಕ್ಷಿಸುವಂತೆ ಒತ್ತಾಯಿಸಿ ಈ ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.
ಮತದಾರರ ಹಕ್ಕು ಕಸಿಯುವಂತಿರುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ ಅವರು, ಅರ್ಹ ಮತದಾರರನ್ನು ಮತ್ತೆ ಪಟ್ಟಿಗೆ ಸೇರಿಸುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದರು. ಎಸ್‌ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಕೋರಿ ನಾಗರಿಕ ಸಮಾಜದ ಸಂಘಟನೆಗಳು ನ್ಯಾಯಾಲಯದ ಮೊರೆ ಹೋಗಲೂ ಸಿದ್ಧವಾಗಿವೆ ಎಂದು ಹೇಳಿದರು.
ಇದನ್ನೂ ಓದಿ : ಎಸ್‌ಐಆರ್ ಕರಡು ಪಟ್ಟಿ ಪ್ರಕಟ | 1 ಕೋಟಿ ಮತದಾರರ ಮುಂದಿನ ಚಿತ್ರವೇನು?
ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನೂ ಸುಮಾರು ಎರಡು ವರ್ಷಗಳಿರುವಾಗ ಇಷ್ಟು ದೊಡ್ಡ ಪ್ರಮಾಣದ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ತುರಾತುರಿಯಲ್ಲಿ ಕೈಗೊಳ್ಳುವ ಅಗತ್ಯವೇನಿತ್ತು ಎಂದು ಪ್ರಕಾಶ್ ರಾಜ್ ಪ್ರಶ್ನಿಸಿದರು. ಐದು ಕೋಟಿಗೂ ಹೆಚ್ಚು ಮತದಾರರನ್ನು ಒಳಗೊಂಡಿರುವ ಇಂತಹ ಪ್ರಕ್ರಿಯೆಯನ್ನು ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸುವುದು ಸೂಕ್ತವಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಕರ್ನಾಟಕದಲ್ಲಿ ಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ 1.08 ಕೋಟಿಗೂ ಹೆಚ್ಚು ಮತದಾರರನ್ನು ಎಎಸ್‌ಡಿಡಿಒ ವರ್ಗದಲ್ಲಿ ಗುರುತಿಸಲಾಗಿದೆ ಎಂಬ ಅಂಕಿ-ಅಂಶದ ಹಿನ್ನೆಲೆಯಲ್ಲಿ ಆತಂಕ ಮತ್ತಷ್ಟು ಹೆಚ್ಚಿದೆ. ಇದೇ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಅರ್ಹ ಮತದಾರರಿಗೆ ತಮ್ಮ ಹಕ್ಕು ಮಂಡಿಸಲು ಹೆಚ್ಚಿನ ಕಾಲಾವಕಾಶ ನೀಡಬೇಕು ಮತ್ತು ಹಕ್ಕು-ಆಕ್ಷೇಪಣೆಗಳ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಎಸ್‌ಐಆರ್ ಪ್ರಕ್ರಿಯೆಯನ್ನು ಪ್ರಜಾಪ್ರಭುತ್ವ ವಿರೋಧಿ ಹಾಗೂ ಅವೈಜ್ಞಾನಿಕ ರೀತಿಯಲ್ಲಿ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಪ್ರಕಾಶ್ ರಾಜ್, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೂ ಆಗ್ರಹಿಸಿದರು. ಚುನಾವಣಾ ಆಯೋಗದ ರಚನೆ ಹಾಗೂ ಅದರ ಕಾರ್ಯವೈಖರಿಯ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದರು.
ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1ರಂದು ನಡೆಯಲಿರುವ ‘ಚುನಾವಣಾ ಆಯೋಗ ಚಲೋ’ ಹೋರಾಟಕ್ಕೆ ನಾಗರಿಕರು, ವಿವಿಧ ಸಂಘಟನೆಗಳು ಹಾಗೂ ಪ್ರಜಾಪ್ರಭುತ್ವ ಪರ ಶಕ್ತಿಗಳು ಕೈಜೋಡಿಸಬೇಕು ಎಂದು ಕರೆ ನೀಡಲಾಗಿದೆ. ಎಸ್‌ಐಆರ್‌ನಿಂದ ಅರ್ಹ ಮತದಾರರು ಹೊರಗುಳಿಯದಂತೆ ಖಾತರಿಪಡಿಸುವುದು, ಪ್ರಕ್ರಿಯೆಯಲ್ಲಿನ ದೋಷಗಳನ್ನು ಸರಿಪಡಿಸುವುದು ಮತ್ತು ಮತದಾನದ ಹಕ್ಕನ್ನು ರಕ್ಷಿಸುವುದು ಹೋರಾಟದ ಪ್ರಮುಖ ಬೇಡಿಕೆಗಳಾಗಿವೆ.
ಇದನ್ನೂ ನೋಡಿ : 1 ಕೋಟಿ ಮತದಾರರ ಮೇಲೆ SIR ತೂಗುಕತ್ತಿ: Form-8 ಬದಲು Form-6 ಏಕೆ? ವಿಶ್ಲೇಷಣೆ : ಗುರುರಾಜ ದೇಸಾಯಿ ಎಸ್‌ಐಆರ್
