ಬೆಂಗಳೂರು: ಈಗಾಗಲೇ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ರಾಜ್ಯ ನೈಸರ್ಗಿಕ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಅಸಾನಿ ಚಂಡಮಾರುತದ ಅಬ್ಬರ ಹೆಚ್ಚಾಗಲಿದ್ದು, ಒಡಿಶಾ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ. ಒಡಿಶಾದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ನೈಸರ್ಗಿಕ ವಿಕೋಪ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಕರ್ನಾಟಕದ ಕರಾವಳಿ, ಮಳೆನಾಡು ಪ್ರದೇಶಗಳಲ್ಲಿ ಇಂದು ಮಳೆ ಹೆಚ್ಚಾಗುವ ಸಂಭವವಿದೆ. ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಗಾಳಿಯ ವೇಗವು 30 ರಿಂದ 40 ಕಿ.ಮೀ. ನಷ್ಟು ರಭಸವಾಗಿದ್ದು, ನಂತರದ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನಲ್ಲೂ ಮಳೆ ಹೆಚ್ಚಾಗುವ ನಿರೀಕ್ಷೆಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೂಗ್ಗ, ಕೊಡಗು, ಹಾಸನ, ಚಿಕ್ಕ ಮಂಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಂತರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ, , ರಾಮನಗರ, ತುಮಕೂರು, ಬೆಳಗಾವಿ, ರಾಯಚೂರು, ಯಾದಗಿರಿ, ವಿಜಯಪುರ, ಕಲುಬುರುಗಿ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ ಇಂದು ಮಳೆ ಸುರಿಯಲಿದ್ದು, 3 ರಿಂದ 4 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಹಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು ಮಾತ್ರವಲ್ಲದೆ ಮಲೆನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ ಮೇ 12ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿದ್ದು, ಸುಮಾರು 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 15 ರಿಂದ 65 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ.