ಬಿಎಸ್​ವೈ ವಿರುದ್ಧ ಹೈಕಮಾಂಡ್​ಗೆ ದೂರು ನೀಡಿದ ಸಚಿವ ಈಶ್ವರಪ್ಪ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪ ಅವರು, ತಮ್ಮ ಇಲಾಖೆಯ ಕೆಲಸಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾನೂನು ಮೀರಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ದೆಹಲಿಯ ವರಿಷ್ಠರಿಗೆ ದೂರು ನೀಡಿದ್ದಾರೆ.

ಕಳೆದ ಒಂದುವರೆ ವರ್ಷದಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಚಿವನಾಗಿ ಕೆಲಸ ಮಾಡುತ್ತಿರುವ ತಮ್ಮ ಗಮನಕ್ಕೆ ಬಾರದಂತೆ ಸಿಎಂ ಯಡಿಯೂರಪ್ಪ ಇಲಾಖೆಯ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಪಕ್ಷದ ಹಿರಿಯ ಸಚಿವನಾಗಿರುವ ತಮಗೆ ಇದರಿಂದ ನೋವಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಡಿನೋಟಿಫಿಕೇಶನ್ : ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ

ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಿಡುಗಡೆಯಾಗಿರುವ 1200 ಕೋಟಿ ರೂ.ಗೆ ಸಂಬಂಧಿಸಿದಂತೆ ಕಾನೂನು ಮೀರಿ ಸುಖಾಸುಮ್ಮನೆ ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಆರ್​ಡಿಪಿಆರ್​ ಇಲಾಖೆಯ ಅನುದಾನವನ್ನು ನೇರವಾಗಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಹಂಚಿದ್ದಾರೆ ಎಂದು ರಾಜ್ಯಪಾಲ ವಜುಭಾಯಿವಾಲಾ ಅವರನ್ನು ಭೇಟಿ ಮಾಡಿ ಈಶ್ವರಪ್ಪ ಅವರು ಲಿಖಿತ ದೂರು ನೀಡಿದ್ದಾರೆ.

ಮುಖ್ಯಮಂತ್ರಿ ವಿರುದ್ಧ ಈಶ್ವರಪ್ಪ ದೂರು ನೀಡುವ ಮೂಲಕ ಬಿಜೆಪಿಯಲ್ಲಿ ಮತ್ತೆ ಭಿನ್ನಮತದ ಹೊಗೆ ಕಾಣತೊಡಗಿದೆ. ರಮೇಶ್‌ ಜಾರಕಿಹೊಳಿ ಪ್ರಕರಣದಲ್ಲಿ ಸ್ವಪಕ್ಷದ ಶಾಸಕರು ಯಡಿಯೂರಪ್ಪ ಮೇಲೆ ಸಾಕಷ್ಟು ಒತ್ತಡ ನೀಡಿದ್ದರು. ಡಿನೋಟಿಫಿಕೇಶನ್ ಸಂಕಟ ಒಂದೆಡೆಯಾದರೆ, ಇನ್ನೊಂದೆಡೆ ಆಪರೇಷನ್‌ ಕಮಲದ ಆಡಿಯೋ ಪ್ರಕರಣದಲ್ಲಿ ಹೈಕೋರ್ಟ್‌ ತನಿಖೆಗೆ ಆದೇಶಿಸಿದೆ. ಈಗ ಸಚಿವರೆ ಬಿಜೆಪಿ ಹೈಕಮಾಂಡ್​ಗೆ ದೂರು ನೀಡಿರುವುದು ಯಡಿಯೂರಪ್ಪಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.

 

ಇದನ್ನೂ ಓದಿ :ಆಪರೇಷನ್‌ ಕಮಲ ಆಡಿಯೊ ಪ್ರಕರಣ ತನಿಖೆಗೆ ಸೂಚಿಸಿದ ಕೋರ್ಟ್

Donate Janashakthi Media

Leave a Reply

Your email address will not be published. Required fields are marked *