ನಂಜನಗೂಡು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರೈತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಂಜನಗೂಡು ತಾಲ್ಲೂಕಿನ ಅಹಲ್ಯ ಗ್ರಾಮದಲ್ಲಿ ಸೇತುವೆಯ ಚೆಕ್ ಡ್ಯಾಮ್ ನಿರ್ಮಾಣ ಕಾಮಗಾರಿ ಮತ್ತು ಕೆರೆ ಏರಿ ನಿರ್ಮಾಣದ ಕಾಮಗಾರಿ ಅವೈಜ್ಞಾನಿಕವಾಗಿ ಕೂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಡ್ಯಾಮ್
ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ನೇತೃತ್ವದಲ್ಲಿ ರೈತರು ಜಮಾಯಿಸಿ, ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಅಹಲ್ಯ ಗ್ರಾಮದ ಸೇತುವೆಯ ಕೆಳಗೆ ನಿರ್ಮಾಣ ಮಾಡಲಾಗುತ್ತಿರುವ ಚೆಕ್ ಡ್ಯಾಮ್ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಒಂದು ಕೋಟಿ ರೂ. ವೆಚ್ಚದಲ್ಲಿ ನಡೆಸಲಾಗುತ್ತಿದೆ.
ಇದನ್ನೂ ಓದಿ: ಪಹಲ್ಗಾಂನಲ್ಲಿ ಭಯೋತ್ಪಾದಕ ದಾಳಿ: ಓರ್ವ ಕನ್ನಡಿಗ ಸಾವು, ಆರು ಮಂದಿ ಗಾಯ
ಅಲ್ಲದೆ ಗ್ರಾಮದ ಕೆರೆ ಏರಿ ನಿರ್ಮಾಣ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಗೆ ಒಂದು ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುತ್ತಿದ್ದು, ಒಟ್ಟು ಎರಡು ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಯೂ ಅವೈಜ್ಞಾನಿಕವಾಗಿದ್ದು, ಇದರಿಂದ ರೈತರಿಗೆ ಅನುಕೂಲವಾಗುವುದಿಲ್ಲ. ಕಾಮಗಾರಿಯೂ ಕಳಪೆಯಾಗಿದೆ. ಸಿಎಂ ಕ್ಷೇತ್ರದಲ್ಲಿ ಅಧಿಕಾರಿಗಳು ಬೇಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ. ನಮಗೆ ಕಾಮಗಾರಿಯ ದಾಖಲೆಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಈ ಕಾಮಗಾರಿಗೆ ಖರ್ಚು ಮಾಡುತ್ತಿರುವ ಹಣ ನಮ್ಮದು ನಾವು ನಮ್ಮ ಹಣಕ್ಕೆ ಲೆಕ್ಕ ಕೇಳುತ್ತಿದ್ದೇವೆ. ಇನ್ನು ಮುಂದೆ ಇಂತಹ ಅವೈಜ್ಞಾನಿಕ ಕಾಮಗಾರಿಗಳು ಮತ್ತು ಕಳಪೆ ಕಾಮಗಾರಿ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಎಚ್ಚರಿಕೆ ನೀಡಿದರು.
ಸ್ಥಳದಲ್ಲಿದ್ದ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯ ಎಇ ರಮೇಶ್, ಎಇಇ ಹಜರುದ್ದೀನ್ ಹಾರಿಕೆಯ ಉತ್ತರ ನೀಡಿ ಸ್ಥಳದಿಂದ ಕಾಲ್ಕಿತ್ತರು. ಈ ಸಂದರ್ಭದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್, ತಾಲ್ಲೂಕು ಅಧ್ಯಕ್ಷ ಸತೀಶ್ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಇಮ್ಮಾವು ರಘು, ಮಹಿಳಾ ಘಟಕದ ಅಧ್ಯಕ್ಷ ಶ್ವೇತಾ, ತಾಲ್ಲೂಕು ಉಪಾಧ್ಯಕ್ಷ ನಂಜುಂಡ, ಗಜ, ಯೋಗಿ, ಸಿದ್ದಪ್ಪಾಜಿ, ವಿನಯ್ ಕುಮಾರ್, ಮಂಜು, ನಾಗೇಂದ್ರ, ಮೋಟೆಗೌಡ, ಶಿವಮೂರ್ತಿ, ಜವರಯ್ಯ, ಪ್ರಕಾಶ್, ಲಿಂಗಣ್ಣ ಸ್ವಾಮಿ ಸೇರಿದಂತೆ ರೈತರು ಹಾಜರಿದ್ದರು.
ಇದನ್ನೂ ನೋಡಿ: ಪಿಚ್ಚರ್ ಪಯಣ – 156 | ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕೆಲವು ಸಿನಿಮಾಗಳ ಅವಲೋಕನ