ಬೆಂಗಳೂರು: ರಾಜಧಾನಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ಕುರಿತು ಸಾರ್ವಜನಿಕರಿಂದ ವ್ಯಾಪಕ ದೂರುಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ನಗರದ ರಸ್ತೆ ಅಭಿವೃದ್ಧಿ ಹಾಗೂ ರಾಜಕಾಲುವೆ ಕಾಮಗಾರಿಗಳಿಗೆ ವೇಗ ನೀಡುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿನ ಬಹುತೇಕ ರಸ್ತೆ ಕಾಮಗಾರಿಗಳನ್ನು 2027ರ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಗಡುವು ನೀಡಿದ್ದಾರೆ. ಕಾಮಗಾರಿ
ಬುಧವಾರ ಜಿಬಿಎ ಹಾಗೂ ಐದು ನಗರ ಪಾಲಿಕೆಗಳ ಅಧಿಕಾರಿಗಳೊಂದಿಗೆ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕಾಮಗಾರಿಗಳ ವಿಳಂಬಕ್ಕೆ ಮಳೆಗಾಲ ಮತ್ತು ಡಾಂಬರು ಬೆಲೆ ಏರಿಕೆ ಕಾರಣವಾಗಿದೆ ಎಂದು ತಿಳಿಸಿದರು. ಇದೀಗ ಮಳೆಗಾಲ ಮುಗಿದಿರುವುದರಿಂದ ಕಾಮಗಾರಿಗಳನ್ನು ತ್ವರಿತಗೊಳಿಸಿ, ಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ನಗರದಾದ್ಯಂತ ಒಟ್ಟು 2,875 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ ಇದುವರೆಗೆ 553 ಕಿ.ಮೀ. ರಸ್ತೆಗಳಿಗಷ್ಟೇ ಡಾಂಬರೀಕರಣ ಪೂರ್ಣಗೊಂಡಿದೆ. ಉಳಿದ ರಸ್ತೆಗಳಲ್ಲಿ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಿ ಪೂರ್ಣಗೊಳಿಸಬೇಕು. ಇನ್ನೂ 100ರಿಂದ 200 ಕಿ.ಮೀ. ರಸ್ತೆ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಕಾಮಗಾರಿ ಆರಂಭವಾಗದ ಕಡೆ ತಕ್ಷಣವೇ ಕೆಲಸ ಪ್ರಾರಂಭಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.
ಗುತ್ತಿಗೆದಾರರೊಂದಿಗೆ ಸಭೆ ನಡೆಸಿ, ಅಗತ್ಯವಿರುವ ಕಡೆ ಹೆಚ್ಚುವರಿ ಕಾರ್ಮಿಕರನ್ನು ನಿಯೋಜಿಸುವ ಮೂಲಕ ಕಾಮಗಾರಿಗಳಿಗೆ ವೇಗ ನೀಡುವಂತೆಯೂ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ : ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಎಚ್.ಕೆ. ವಿವೇಕಾನಂದ
2,321 ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್
ನಗರದಲ್ಲಿ ದೀರ್ಘಕಾಲ ಬಾಳಿಕೆ ಬರುವ ರಸ್ತೆಗಳನ್ನು ನಿರ್ಮಿಸುವ ಉದ್ದೇಶದಿಂದ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ. ಒಟ್ಟು 2,321 ಕೋಟಿ ರೂ. ವೆಚ್ಚದಲ್ಲಿ 130 ಕಿ.ಮೀ. ಉದ್ದದ 88 ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಯೋಜಿಸಲಾಗಿದೆ. ಈಗಾಗಲೇ ಸುಮಾರು 120 ಕಿ.ಮೀ. ಉದ್ದದ ಕಾಮಗಾರಿ ಪ್ರಗತಿಯಲ್ಲಿದೆ.
ಉಳಿದ 20ರಿಂದ 25 ಕಿ.ಮೀ. ರಸ್ತೆಗಳಲ್ಲಿ ಸಂಚಾರಕ್ಕೆ ಸಂಬಂಧಿಸಿದ ಅನುಮತಿಗಳು ದೊರೆಯದ ಕಾರಣ ಕಾಮಗಾರಿ ವಿಳಂಬವಾಗಿದೆ. ವಾಹನ ಸವಾರರಿಗೆ ಹೆಚ್ಚಿನ ತೊಂದರೆಯಾಗದಂತೆ ಹಂತ ಹಂತವಾಗಿ ಕಾಮಗಾರಿ ನಡೆಸಲಾಗುತ್ತಿದೆ. ಅನುಮತಿ ದೊರೆತಿರುವ ಕಡೆ ಡಿಸೆಂಬರ್ ಅಂತ್ಯದೊಳಗೆ ಕೆಲಸ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ.
ಹೊರ ವರ್ತುಲ ರಸ್ತೆಯ ಅಭಿವೃದ್ಧಿಗಾಗಿ ಪ್ರತ್ಯೇಕವಾಗಿ 487 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಕೆಲವು ರಸ್ತೆಗಳಲ್ಲಿ ಜಲಮಂಡಳಿಯ ನೀರು ಮತ್ತು ಒಳಚರಂಡಿ ಕಾಮಗಾರಿಗಳೂ ನಡೆಯುತ್ತಿರುವುದರಿಂದ, ರಸ್ತೆಗಳನ್ನು ಮತ್ತೆ ಮತ್ತೆ ಅಗೆದು ಹಾಳು ಮಾಡದಂತೆ ಸಂಬಂಧಪಟ್ಟ ಇಲಾಖೆಗಳ ನಡುವೆ ಸಮನ್ವಯ ಸಾಧಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದ್ದಾರೆ.
200 ಕಿ.ಮೀ. ರಾಜಕಾಲುವೆ ಅಭಿವೃದ್ಧಿ
ನಗರದಲ್ಲಿ ಮಳೆನೀರು ಸರಾಗವಾಗಿ ಹರಿದುಹೋಗಲು ಸುಮಾರು 200 ಕಿ.ಮೀ. ಉದ್ದದ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ವಿಶೇಷವಾಗಿ ನಗರದ ಹೊರವಲಯಗಳಲ್ಲಿ ಈವರೆಗೆ ಅಭಿವೃದ್ಧಿಯಾಗದ ರಾಜಕಾಲುವೆ ಪ್ರದೇಶಗಳನ್ನು ಗುರುತಿಸಲು ಸಮೀಕ್ಷೆ ನಡೆಸಲಾಗುತ್ತಿದೆ.
ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸುವ ಕಾರ್ಯವೂ ನಡೆಯುತ್ತಿದ್ದು, ಸುಮಾರು 20 ಎಕರೆ ಒತ್ತುವರಿ ಭೂಮಿಯನ್ನು ಪಾಲಿಕೆ ವಶಕ್ಕೆ ಪಡೆದಿದೆ ಎಂದು ಸಚಿವರು ತಿಳಿಸಿದ್ದಾರೆ. ರಾಜಕಾಲುವೆಗಳ ಪಕ್ಕದಲ್ಲಿ ಬಫರ್ ರಸ್ತೆಗಳ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ 200 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕುಗಳ (TDR) ಮೂಲಕ ಈ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನೂ ರೂಪಿಸಲಾಗಿದೆ.
ಡಾಂಬರೀಕರಣ ಮತ್ತು ವೈಟ್ ಟಾಪಿಂಗ್ ಹೊರತುಪಡಿಸಿ ಕೈಗೆತ್ತಿಕೊಂಡಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗಳನ್ನು ಮುಂದಿನ ಮೂರು ತಿಂಗಳೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ರಸ್ತೆ ಅಭಿವೃದ್ಧಿ ಎಂದರೆ ಕೇವಲ ಡಾಂಬರೀಕರಣಕ್ಕೆ ಸೀಮಿತವಾಗಬಾರದು. ಪಾದಚಾರಿ ಮಾರ್ಗಗಳ ನಿರ್ಮಾಣ, ಚರಂಡಿಗಳ ಹೂಳು ತೆಗೆಯುವುದು ಹಾಗೂ ಇತರ ಮೂಲಸೌಕರ್ಯ ಕಾಮಗಾರಿಗಳನ್ನೂ ಸಮಗ್ರವಾಗಿ ಕೈಗೆತ್ತಿಕೊಳ್ಳಬೇಕು ಎಂದು ಸಚಿವರು ಹೇಳಿದ್ದಾರೆ.
ರಸ್ತೆ ಕಾಮಗಾರಿಗಳ ಮೇಲೆ ತಂತ್ರಜ್ಞಾನದ ನಿಗಾ
ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳ ಮಾಹಿತಿ ಒಂದೇ ವೇದಿಕೆಯಲ್ಲಿ ಲಭ್ಯವಾಗುವಂತೆ ಮಾಡಲು ಏಕೀಕೃತ ಆನ್ಲೈನ್ ಡ್ಯಾಶ್ಬೋರ್ಡ್ ರೂಪಿಸುವಂತೆ ಸಚಿವರು ಸೂಚಿಸಿದ್ದಾರೆ.
ರಸ್ತೆ ಕಾಮಗಾರಿಗಳ ವಿವರಗಳನ್ನು ರಸ್ತೆ ಮೂಲಸೌಕರ್ಯ ನಿರ್ವಹಣಾ ವ್ಯವಸ್ಥೆ (RIMS) ಅಡಿಯಲ್ಲಿ ದಾಖಲಿಸಬೇಕು. ಭೌಗೋಳಿಕ ಮಾಹಿತಿ ವ್ಯವಸ್ಥೆ (GIS) ಮೂಲಕ ಕಾಮಗಾರಿಗಳ ಆರಂಭದ ದಿನಾಂಕ, ಭೌತಿಕ ಪ್ರಗತಿ ಮತ್ತು ಆರ್ಥಿಕ ಪ್ರಗತಿಯ ಮಾಹಿತಿಯನ್ನು ಸಂಗ್ರಹಿಸಬೇಕು. ಕಾಮಗಾರಿಯ ನೈಜ ಪ್ರಗತಿಗೆ ಅನುಗುಣವಾಗಿ ಬಿಲ್ಗಳನ್ನು ಲೆಕ್ಕಹಾಕುವ ಸ್ವಯಂಚಾಲಿತ ವ್ಯವಸ್ಥೆ ಜಾರಿಗೆ ತರಬೇಕು. ಇದಕ್ಕೆ ಪೂರಕವಾಗಿ ಸಮಗ್ರ ಹಣಕಾಸು ನಿರ್ವಹಣಾ ವ್ಯವಸ್ಥೆ (IFMS) ತಂತ್ರಾಂಶವನ್ನು ಮೇಲ್ದರ್ಜೆಗೇರಿಸುವಂತೆಯೂ ಸೂಚಿಸಲಾಗಿದೆ.
ಅಲ್ಲದೆ, ವಾಹನಗಳ ಡ್ಯಾಶ್ಕ್ಯಾಮ್ಗಳಿಂದ ಸಂಗ್ರಹವಾಗುವ ದೃಶ್ಯಗಳನ್ನು ಬಳಸಿಕೊಂಡು ರಸ್ತೆ ಗುಂಡಿಗಳು ಹಾಗೂ ರಸ್ತೆಗಳ ಸ್ಥಿತಿಗತಿಯನ್ನು ಗುರುತಿಸಿ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಜಿಬಿಎ ವಿಶೇಷ ಆಯುಕ್ತರಾದ ನಿತೀಶ್, ಲಕ್ಷ್ಮಿಪ್ರಿಯಾ ಸೇರಿದಂತೆ ಐದು ನಗರ ಪಾಲಿಕೆಗಳ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಗರದ ರಸ್ತೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದಾಗಿ ಸರ್ಕಾರ ಭರವಸೆ ನೀಡಿದ್ದು, ಫೆಬ್ರವರಿ ಗಡುವಿನೊಳಗೆ ಕಾಮಗಾರಿಗಳು ಎಷ್ಟರಮಟ್ಟಿಗೆ ಪೂರ್ಣಗೊಳ್ಳಲಿವೆ ಎಂಬುದು ಈಗ ಸಾರ್ವಜನಿಕರ ನಿರೀಕ್ಷೆಯಾಗಿದೆ.
ಇದನ್ನೂ ನೋಡಿ : ಎಸ್ಐಆರ್ | ಮತದಾರರ ಪಟ್ಟಿ ಅಂತಿಮ: 99.32 ಲಕ್ಷ ಹೆಸರು ಡಿಲೀಟ್! ಗುರುರಾಜ ದೇಸಾಯಿ
