ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ.
ಈ ಸಂಬಂಧ ಪುತ್ತೂರು ನಗರಸಭಾ ಸದಸ್ಯ ಮೊಹಮ್ಮದ್ ರಿಯಾಝ್ ಅವರು ಪುತ್ತೂರು ನಗರ ಠಾಣೆಯಲ್ಲಿ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಅವರು ಸುಳ್ಳು ಆರೋಪ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸಬೇಕು. ಅಲ್ಲದೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೊಹಮ್ಮದ್ ರಿಯಾಝ್ ದೂರಿನಲ್ಲಿ ಒತ್ತಾಯಿಸಿದ್ದಾರೆ. ಈ ಸಂಬಂಧ ಹರೀಶ್ ಪೂಂಜಾ ಮಾತನಾಡಿರುವ ವಿಡಿಯೋ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದಾರೆ. ಇದೇ ತಿಂಗಳ 22ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಹರೀಶ್ ಪೂಂಜಾ, 24 ಹಿಂದೂ ಕಾರ್ಯಕರ್ತರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆಂದು ಹೇಳಿದ್ದರು.
ಬಿಜೆಪಿ ಶಾಸಕನ ಆರೋಪ ವಿವಾದಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯನವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಆಕ್ರೊಶಕ್ಕೆ ಕಾರಣವಾಗಿದ್ದು, ಇದು ಮುಂದೆ ಯಾವ ಹಂತಕ್ಕೆ ಮುಟ್ಟಲಿದೆ ಎಂದು ಕಾದುನೋಡಬೇಕಿದೆ. ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆ ನಮಿತಾ ಕೆ ಪೂಜಾರಿ ಅವರು ನೀಡಿದ ದೂರಿನ ಮೇರೆಗೆ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಎಸ್ಪಿ ಡಾ.ವಿಕ್ರಮ್ ಅಮಾತೆ ಖಚಿತಪಡಿಸಿದ್ದಾರೆ.
ಕಾರ್ಯಕ್ರಮ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತ ಜಯಂತ್ ಕೋಟ್ಯಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದಾರೆ. ಶಾಸಕರು ಕೋಮುದ್ವೇಷ ಹರಡಿ ಸಮಾಜದಲ್ಲಿ ಶಾಂತಿ ಹಾಳು ಮಾಡಲು ಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ನಮಿತಾ ಆರೋಪಿಸಿದ್ದಾರೆ. ಪುತ್ತೂರು ನಗರಸಭಾ ಸದಸ್ಯ ಮಹಮ್ಮದ್ ರಿಯಾಝ್ ಕೆ ಪ್ರತಿಕ್ರಿಯಿಸಿ, “ಆರೋಪಗಳು ಸುಳ್ಳಿನಿಂದ ಕೂಡಿವೆ, ಘಟನೆಯ ಸಮಗ್ರ ತನಿಖೆ ನಡೆಯಲಿ” ಎಂದು ಆಗ್ರಹಿಸಿದ್ದಾರೆ. ಘಟನೆಯನ್ನು ಕಾಂಗ್ರೆಸ್ ಖಂಡಿಸಿದ್ದು, ಬಿಜೆಪಿ ಶಾಸಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದೆ.