ಬೆಂಗಳೂರು: ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು, ಐಎಎಸ್ ಅಧಿಕಾರಿಯಾಗಿದ್ದ, ಬಿಜೆಪಿ ಮುಖಂಡ, ನಟ ಕೆ ಶಿವರಾಮ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ. ಮಾಜಿ
ಬುಧವಾರ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ, ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೋದಿ ರಸ್ತೆಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕೆ ಶಿವರಾಮ್ 1953ರ ಏಪ್ರಿಲ್ 6ರಂದು ರಾಮನಹಗರ ಜಿಲ್ಲೆಯ ಉರಗಳ್ಳಿಯಲ್ಲಿ ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ತಮ್ಮ ಹಳ್ಳಿಯಲ್ಲಿ ಮುಗಿಸಿದ ಇವರು, ಬೆಂಗಳೂರಿನ ಮಲ್ಲೇಶ್ವರಂ ಸರ್ಕಾರಿ ಶಾಲೆಯಲ್ಲಿ ಪ್ರೌಢಶಿಕ್ಷಣ ಪೂರ್ಣಗೊಳಿಸಿದರು. ವಿವಿ ಪುರಂನ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಡಿಗ್ರಿ ಮುಗಿದ ಶಿವರಾಮ್, ನಂತರ 1982ರಲ್ಲಿ ಮೈಸೂರು ಯುನಿವರ್ಸಿಟಿಯಿಂದ ಇತಿಹಾಸ ವಿಷಯದಲ್ಲಿ ಮಾಸ್ಟರ್ ಆಫ್ ಆಟ್ಸ್ ಪದವಿ ಪಡೆದರು. 1985ರಲ್ಲಿ ಕೆಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದರು. ನಂತರ ಕನ್ನಡ ಭಾಷೆಯಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಭಾರತದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದರು.
1993ರಲ್ಲಿ ತೆರೆಕಂಡ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಮೂಲಕ ಕೆ ಶಿವರಾಮ್ ಕನ್ನಡ ಚಿತ್ರರಂಗ ಪ್ರವೇಶಿಸಿದರು. ನಂತರ ವಸಂತಕಾವ್ಯ, ಸಾಂಗ್ಲಿಯಾನ ಪಾರ್ಟ್ ೩, ಪ್ರತಿಭಟನೆ, ಖಳನಾಯಕ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್, ನಾಗ, ಓ ಪ್ರೇಮ ದೇವತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು.
2013ರಲ್ಲಿ ನಿವೃತ್ತಿಯ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದರು. 2014ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ನಂತರ ಅದೇ ವರ್ಷ ದಲಿತರಿಗೆ ಸಿ.ಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಪರವಾಗಿ ಚರ್ಚೆ ಹುಟ್ಟುಹಾಕಿದ್ದರು.ನಂತರ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಸೇರಿದರು. ಛಲವಾದಿ ಮಹಸಭಾದ ಅಧ್ಯಕ್ಷರಾಗಿದ್ದರು.