ಕಸಾಪ ನಿಧಿ ದುರುಪಯೋಗ ಆರೋಪ ; ಮಹೇಶ್ ಜೋಶಿ ಅವರ ಕಸಾಪ ಜೀವಮಾನ ಸದಸ್ಯತ್ವ ರದ್ದು

Please follow and like us:
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ನಿಧಿಗಳ ದುರುಪಯೋಗಕ್ಕೆ ಸಂಬಂಧಿಸಿದ ಆರೋಪಗಳ ಹಿನ್ನೆಲೆಯಲ್ಲಿ ಮಾಜಿ ಅಧ್ಯಕ್ಷ ಮಹೇಶ್ ಜೋಶಿ ಅವರ ಜೀವಮಾನ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ.

ಕಸಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಪರಿಷತ್ತಿನ ಹಣಕಾಸು ವ್ಯವಹಾರಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಕುರಿತು ಹಲವು ದಿನಗಳಿಂದ ವಿವಾದ ನಡೆಯುತ್ತಿತ್ತು.

‘ಕಸಾಪ ಪದಾಧಿಕಾರಿಗಳ ಕಾರ್ಯವೈಖರಿ, ಅನುದಾನ ಮತ್ತು ಖರ್ಚು-ವೆಚ್ಚಗಳ ಕುರಿತು ವಿಚಾರಣೆ ನಡೆಸಲು ತನಿಖಾಧಿಕಾರಿ ನೇಮಕ ಮಾಡಿ 2025ರ ಜೂನ್ 26 ಹಾಗೂ 30ರಂದು ಸಹಕಾರ ಸಂಘಗಳ ನೋಂದಣಾಧಿಕಾರಿ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಬೇಕು’ ಎಂಬುದೂ ಸೇರಿದಂತೆ ಮಹೇಶ್‌ ಜೋಶಿ ಸಲ್ಲಿಸಿರುವ ಮೂರು ರಿಟ್‌ ಅರ್ಜಿಗಳನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದ ರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಇದನ್ನೂ ಓದಿ: ಭಾರತದಲ್ಲಿ ವೈದ್ಯಕೀಯ ಮೇಲ್ವಿಚಾರಣೆಯಿಲ್ಲದ ಸಾವುಗಳ ಏರಿಕೆ: ಆರೋಗ್ಯ ವ್ಯವಸ್ಥೆಯ ವಾಸ್ತವ ಬಯಲು

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್ ಪ್ರತಿಮಾ ಹೊನ್ನಾಪುರ ಅವರು, ‘ಜೋಶಿ ಅವರ ವಿರುದ್ಧ ಆಪಾದನೆಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ, ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ–1960ರ ಕಲಂ 25ರ ಅಡಿಯಲ್ಲಿ ವಿಚಾರಣೆ ನಡೆಸಿತ್ತು. ಈ ವಿಚಾರಣೆಯಲ್ಲಿ ಆಪಾದನೆಗಳು ಸಾಬೀತಾಗಿರುವ ಕಾರಣ ಅವರ ಸದಸ್ಯತ್ವನ್ನು ವಜಾ ಮಾಡಲಾಗಿದೆ’ ಎಂದರು.

‘ಹೈಕೋರ್ಟ್‌ನ ರಿಟ್‌ ಅರ್ಜಿ ಸಂಖ್ಯೆ 6086/2026ರಲ್ಲಿನ ಅಂತಿಮ ಆದೇಶಕ್ಕೆ ಒಳಪಟ್ಟಂತೆ, ತಕ್ಷಣದಿಂದ ಜಾರಿಗೆ ಬರುವಂತೆ ಮಹೇಶ್‌ ಜೋಶಿ ಅವರನ್ನು ಸದಸ್ಯತ್ವದಿಂದ ವಜಾಗೊಳಿಸಿ ಆಡಳಿತಾಧಿಕಾರಿ ಆದೇಶಿಸಿದ್ದಾರೆ. ಈ ಕುರಿತಂತೆ ಸಂಬಂಧಿಸಿದವರಿಗೆ ಸಂವಹನ ಮಾಡಲಾಗಿದೆ’ ಎಂದು ವಿವರಿಸಿದರು.

ಅರ್ಜಿದಾರ ಜೋಶಿ ಪರ ಪದಾಂಕಿತ ಹಿರಿಯ ವಕೀಲ ಜಯಕುಮಾರ್ ಎಸ್‌.ಪಾಟೀಲ್ ಮತ್ತು ಕಸಾಪ ಪರ ಪದಾಂಕಿತ ಹಿರಿಯ ವಕೀಲ ರವಿವರ್ಮ ಕುಮಾರ್ ಹಾಜರಾಗಿದ್ದರು. ಜೋಶಿ ಅವರ ಪರ ವಕೀಲರಿಗೆ ವಾದ ಆಲಿಸಲು ಮುದ್ದತು ನಿಗದಿಪಡಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಿದೆ.

ಇದನ್ನೂ ನೋಡಿ: ಸರಕಾರಕ್ಕೆ ತೈಲದ ಆಟ, ಜನರಿಗೆ ಜೇಬಿನ ದರೋಡೆ! | ವಿಶ್ಲೇಷಣೆ – ಗುರುರಾಜ ದೇಸಾಯಿ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *