ಚಿಕ್ಕಮಗಳೂರು: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ (87) ಅವರು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ನಿಧನರಾಗಿದ್ದಾರೆ.
ಕೆಲವು ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚಂದ್ರೇಗೌಡರು ಸಕ್ರಿಯ ರಾಜಕೀಯದಿಂದ ದೂರ ಉಳಿದಿದ್ದರು. ಬೆಂಗಳೂರಿನಲ್ಲಿ ವಾಸವಿದ್ದ ಅವರನ್ನು ಇತ್ತೀಚೆಗೆ ದಾರದಹಳ್ಳಿಗೆ ಕರೆತರಲಾಗಿತ್ತು ಎಂದು ಕುಟುಂಬ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ ಪಾರ್ಥಿವ ಶರೀರದ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಮಧ್ಯಾಹ್ನ ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ವಕೀಲರಾಗಿ ವೃತ್ತಿ ಆರಂಭಿಸಿದ್ದ ಡಿ.ಬಿ.ಚಂದ್ರೇಗೌಡ ಅವರು ರಾಜಕೀಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಂಡಿದ್ದರು. 1971ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. 1977 ರಲ್ಲಿ ಎರಡನೇ ಅವಧಿಗೆ ಸಂಸದರಾಗಿ ಆಯ್ಕೆಯಾಗಿ, 1978ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲೆಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದಿರ ಗಾಂಧಿ ಗೆ ಚಿಕ್ಕಮಗಳೂರಿನಿಂದ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟಿದ್ದರು. ಮೂರು ಬಾರಿ ಶಾಸಕರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಕಾನೂನು ಸಚಿವರಾಗಿ ಸೇವೆ ಸಲ್ಲಿಸಿದ್ದ ಚಂದ್ರೇಗೌಡ ಅವರು ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು. ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸೇರಿದ್ದರು.
ಇದನ್ನೂ ಓದಿ : ಖ್ಯಾತ ಆಹಾರ ತಜ್ಞ, ಚಿಂತಕ ಕೆ.ಸಿ.ರಘು ನಿಧನ
ಚಂದ್ರೇಗೌಡರ ರಾಜಕೀಯ : ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವಾರು ರಾಜಕೀಯ ಪಕ್ಷಗಳನ್ನು ಪ್ರತಿನಿಧಿಸಿದ್ದರು. ಪ್ರಜಾ ಸಮಾಜವಾದಿ ಪಕ್ಷ, ಜನತಾ ದಳ, ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದಲ್ಲಿದ್ದರು.
- 1971ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ನಿಂದ ಸ್ಪರ್ಧಿಸಿ ಗೆದ್ದಿದ್ದರು.
- 1977ರಲ್ಲಿ ಮತ್ತೆ ಅದೇ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಎರಡನೇ ಬಾರಿಗೆ ಗೆಲುವು ಸಾಧಿಸಿದ್ದರು.
- 1978ರಲ್ಲಿ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದಿರಾ ಗಾಂಧಿಯವರಿಗೆ ಅವಕಾಶ ಮಾಡಿಕೊಟ್ಟಿದ್ದರು.
- 1978-1983: ಕರ್ನಾಟಕ ವಿಧಾನಪರಿಷತ್ ಸದಸ್ಯರಾಗಿದ್ದರು. ಬಳಿಕ ದೇವರಾಜ್ ಅರಸ್ ಅವರ ಕ್ರಾಂತಿರಂಗಕ್ಕೆ ಸೇರ್ಪಡೆಯಾಗಿದ್ದರು.
- 1983ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಶಾಸಕರಾಗಿ(ಜನತಾ ಪಕ್ಷ) ಆಯ್ಕೆಯಾಗಿದ್ದರು.
- 1983 ರಿಂದ 1985 ರವರೆಗೆ ವಿಧಾನಸಭೆಯಲ್ಲಿ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.
- 1986ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು (ಜನತಾದಳ).
- 1989ರಲ್ಲಿ ಮತ್ತೆ ತೀರ್ಥಹಳ್ಳಿಯಿಂದ ಸ್ಪರ್ಧಿಸಿ ಮತ್ತೊಮ್ಮೆ ಶಾಸಕರಾಗಿ (ಜನತಾ ದಳ) ಆಯ್ಕೆಯಾಗಿದ್ದರು.
- 1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೃಂಗೇರಿ ವಿಧಾನಸಭೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
- 2008ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು.
- 2009ರಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.
ಈ ವಿಡಿಯೋ ನೋಡಿ : ಶಿಕ್ಷಣ ಇಲಾಖೆಯ ಜವಾಬ್ದಾರಿ ಪಂಚಾಯತ್ ರಾಜ್ ಇಲಾಖೆಗೆ! Janashakthi Media