ಕೋಲಾರ: ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿದ ಕೊತ್ತನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿರುವ ಘಟನೆಗೆ ಸಂಬಂಧಿಸಿದಂತೆ ಪ್ರಾಂಶುಪಾಲೆಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಮುರುಗಪ್ಪರಕ್ಕೆ ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು, ನಿನ್ನೆ ಕಡಲ ತೀರದಲ್ಲಿ ಆಟವಾಡುವಾಗ ಅಲೆಗಳ ಅಬ್ಬರಕ್ಕೆ ಸಿಲುಕಿ ನಾಲ್ವರು ವಿದ್ಯಾರ್ಥಿನಿಯರು ನೀರುಪಾಲಾಗಿದ್ದರು.
ಇದನ್ನೂ ಓದಿ: ಪಂಚಮಸಾಲಿಗೆ ಯಾವುದೇ ಕಾರಣಕ್ಕೂ ಮೀಸಲಾತಿ ನೀಡಬೇಡಿ: ಸಿಎಂ ಗೆ ಮನವಿ
ಓರ್ವ ವಿದ್ಯಾರ್ಥಿನಿ ಶ್ರವಂತಿ (15) ಶವವಾಗಿ ಪತ್ತೆಯಾಗಿದ್ದಾರೆ, ಇನ್ನೂ ಮೂವರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. 15 ವರ್ಷದ ದೀಕ್ಷಾ, ಲಾವಣ್ಯ, ವಂದನಾ ಈ ಮೂವರು ವಿದ್ಯಾರ್ಥಿನಿಯರು ಅಲೆಗಳ ಹೊಡೆತಕ್ಕೆ ಸಮುದ್ರದಲ್ಲಿ ಕೊಚ್ಚಿ ಹೋಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿನಿಯರು ನೀರುಪಾಲಾಗಿರುವ ಪ್ರಕರಣ ಸಂಬಂಧ ಇದೀಗ ಮೊರಾರ್ಜಿ ದೇಸಾಯಿ ಶಾಲೆ ಪ್ರಾಂಶುಪಾಲೆ ಶಶಿಕಲಾ ರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಪ್ರಾಂಶುಪಾಲೆ ಹಾಗೂ ಅತಿಥಿ ಶಿಕ್ಷಕರು ಹಾಗೂ ಡಿಗ್ರೂಪ್ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನಿರ್ದೇಶಕ ಕಾಂತರಾಜು ಆದೇಶ ಹೊರಡಿಸಿದ್ದಾರೆ.
ಈ ಘಟನೆಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ರಾಜ್ಯಾಧ್ಯಕ್ಷ ಶಿವಪ್ಪ ಕೋಲಾರ ಖಂಡಿಸಿದ್ದಾರೆ. ವಸತಿ ಶಾಲೆಯ ಸಿಬ್ಬಂದಿಯ ನಿರ್ಲಕ್ಯವೇ ಈ ಅವಘಡಕ್ಕೆ ಕಾರಣ ಎಂದು ಆರೋಪಸಿದ್ದಾರೆ. ಮೃತ ವಿದ್ಯಾರ್ಥಿನಿಯರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಕುಟುಂಬದ ಸದಸ್ಯರಿಗೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ ನೀಡಬೇಕು ಎಂದು ಎಸ್ಎಫ್ಐ ಆಗ್ರಹಿಸಿದೆ.
ಇದನ್ನೂ ನೋಡಿ: Karnataka legislative assembly Day 02 Live. 16ನೇ ವಿಧಾನಸಭೆಯ ಚಳಿಗಾಲದ ಅಧಿವೇಶನದ ನೇರ ಪ್ರಸಾರ