ಬೆಂಗಳೂರು: ರಾಜ್ಯದ ಶಾಲೆ, ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯನ್ನು ಜಾರಿಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸರ್ಕಾರಿ ಸಾರಿಗೆ ಸಂಸ್ಥೆಗಳ ಸಾಮಾನ್ಯ ಬಸ್ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ದೊರೆಯಲಿದೆ.
ಸರ್ಕಾರದ ಆದೇಶದ ಪ್ರಕಾರ, ಶಾಲೆಯಿಂದ ಹಿಡಿದು ಸ್ನಾತಕೋತ್ತರ ಹಂತದವರೆಗಿನ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಉಚಿತ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕಾಗಿದ್ದು, ಸಾರಿಗೆ ಇಲಾಖೆಯು ಅಗತ್ಯ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ.
ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿತ್ತು. ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು ಎದುರಿಸುತ್ತಿರುವ ಪ್ರಯಾಣ ವೆಚ್ಚದ ಹೊರೆಯನ್ನು ಕಡಿಮೆ ಮಾಡುವುದು ಹಾಗೂ ಶಿಕ್ಷಣಕ್ಕೆ ಪ್ರವೇಶವನ್ನು ಮತ್ತಷ್ಟು ಸುಲಭಗೊಳಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಸರ್ಕಾರ ತಿಳಿಸಿದೆ.
ಇದನ್ನೂ ಓದಿ : ಕರ್ನಾಟಕದಿಂದ ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ
ಇದುವರೆಗೆ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ನೀಡಲಾಗುತ್ತಿತ್ತು. ಇದೀಗ ಸಂಪೂರ್ಣ ಉಚಿತ ಬಸ್ ಪಾಸ್ ನೀಡುವ ಮೂಲಕ ವಿದ್ಯಾರ್ಥಿಗಳ ಕುಟುಂಬಗಳ ಮೇಲಿನ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು ಸರ್ಕಾರ ಮುಂದಾಗಿದೆ. ಈ ಯೋಜನೆಯಿಂದ ಗ್ರಾಮೀಣ ಹಾಗೂ ದೂರದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎನ್ನಲಾಗಿದೆ.
ಯೋಜನೆಯು ವಿದ್ಯಾರ್ಥಿಗಳ ಶಾಲಾ-ಕಾಲೇಜು ದಾಖಲಾತಿ, ಹಾಜರಾತಿ ಹಾಗೂ ಶಿಕ್ಷಣದ ನಿರಂತರತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.
ಇದನ್ನೂ ನೋಡಿ :ಸರಕಾರಕ್ಕೆ ತೈಲದ ಆಟ, ಜನರಿಗೆ ಜೇಬಿನ ದರೋಡೆ! | ವಿಶ್ಲೇಷಣೆ – ಗುರುರಾಜ ದೇಸಾಯಿ Janashakthi Media
