ಮುಂಬೈ: ಮರಾಠಿ ಭಾಷಿಕರಿಗೆ ಅನ್ಯಾಯವಾಗದಂತೆ ನಾವು ನೋಡಿಕೊಳ್ಳುತ್ತೇವೆ. ಮಹಾಮೇಳಾವ್ಗೆ ಕರ್ನಾಟಕ ಸರ್ಕಾರ ಅವಕಾಶ ಕೊಡದಿರುವುದು ಸರಿಯಲ್ಲ. ಗಡಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ವಿವಾದದ ವಿಚಾರ ಸಾಕಷ್ಟು ತಾರಕ್ಕೇರಿದ್ದು, ಮಹಾರಾಷ್ಟ್ರ ಬಿಜೆಪಿ ನಾಯಕ ಹಾಗೂ ಉಪಮುಖ್ಯಮಂತ್ರಿ ಗಡಿ ವಿಚಾರವಾಗಿ ನೀಡಿರುವ ಹೇಳಿಕೆ ಮತ್ತಷ್ಟು ಗಂಭೀರ ಸ್ವರೂಪ ಪಡೆಯುವ ಸಾಧ್ಯತೆಯಿದೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಡಿ ಭಾಗದ ಮರಾಠಿಗರೊಂದಿಗೆ ಮಹಾರಾಷ್ಟ್ರ ಸರ್ಕಾರವಿದೆ. ಮಹಾಮೇಳಾವ್ಗೆ ಅವಕಾಶ ನೀಡದಿರುವುದು ಕರ್ನಾಟಕ ಸರ್ಕಾರದ ನಡೆ ಸರಿಯಲ್ಲ. ಗಡಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲವೆಂದಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಈಗಾಗಲೇ ಗಡಿ ಭಾಗದ ನೀರಾವರಿ ಯೋಜನೆಗೆ 2 ಸಾವಿರ ಕೋಟಿ ರೂಪಾಯಿ ಘೋಷಿಸಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿವಾದ ಬಗ್ಗೆ ಮಾತನಾಡಿದ್ದಾರೆ.