ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ ಮನೆಯೊಡತಿಗೆ ಮಾಸಿಕ 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮೀ’ ಯೋಜನೆಗೆ ಇಂದು ಬುಧವಾರ ಚಾಲನೆ ನೀಡಲಾಗುತ್ತಿದೆ. ಅದರೊಂದಿಗೆ ನಾಲ್ಕನೇ ಗ್ಯಾರಂಟಿ ಅನುಷ್ಠಾನವಾದಂತಾಗಲಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ಸಂಜೆ 5ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಲಿದ್ದಾರೆ.
ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ನೀಡುವುದಾಗಿ ಭರವಸೆ ಕೊಟ್ಟಿತ್ತು. ಅದರಲ್ಲಿ ಶಕ್ತಿ ಯೋಜನೆ ಜಾರಿಯಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿ ಅಕ್ಕಿಯ ಬದಲು ಹಣ ಖಾತೆಗಳಿಗೆ ಈಗಾಗಲೇ ಜಮಾ ಆಗುತ್ತಿದೆ. ಗೃಹಜ್ಯೋತಿಯ ನೋಂದಣಿ ಒಂದು ಕೋಟಿ ದಾಟಿದೆ. ಇಂದು ಗೃಹಲಕ್ಷ್ಮಿ ಯೋಜನೆಯು ಜಾರಿಗೆ ಬರುತ್ತಿದೆ.
ಇದನ್ನೂ ಓದಿ:ಜುಲೈ 19 ರಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿಸಲ್ಲಿಕೆ ಪ್ರಾರಂಭ
ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಗೆ ತಿಂಗಳಿಗೆ 2000 ರೂ ದೊರೆಯಲಿದೆ. ಯಜಮಾನಿ ಅಥವಾಆಕೆಯ ಪತಿ ಆದಾಯ ತೆರಿಗೆ ಪಾವತಿದಾಋರಾಗಿದ್ದಲ್ಲಿ ಯೋಜನೆಗೆ ಅರ್ಹರಾಗುವುದಿಲ್ಲ. ಅಲ್ಲದೇ ಜಿಎಸ್‌ಟಿ ಲೆಕ್ಕಪತ್ರ ಸಲ್ಲಿಸುವವರಾಗಿದ್ದಲ್ಲಿಯೂ ಯೋಜನೆಗೆ ಅರ್ಹರಾಗುವುದಿಲ್ಲ.
1.28 ಕೋಟಿ ಮಹಿಳೆಯರು ಈ ಯೋಜನೆಗೆ ಅರ್ಹರಿದ್ದು, ಹೆಸರು ನೋಂದಾಯಿಸಲು ಪಡಿತರ ಚೀಟಿಯ ಸಂಖ್ಯೆ, ಯಜಮಾನಿ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ,ಯಜಮಾನಿ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಆಧಾರ್‌ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ಪಾಸ್‌ಬುಕ್ ಅಥವಾ ಫಲಾನುಭವಿಯು ಇಚ್ಛಿಸುವ ಪರ್ಯಾಯ ಬ್ಯಾಂಕ್ ಖಾತೆಯ ದಾಖಲೆಗಳನ್ನು ನೀಡಬೇಕು. ಪ್ರತಿ ದಿನ ಅರ್ಹ 60 ಫಲಾನುಭವಿಗಳಿಗೆ ಸಮಯ ಹಾಗೂ ನೋಂದಾಣಿ ಕೇಂದ್ರದ ವಿವರಗಳು ಮೊಬೈಲ್ ಸಂದೇಶದ ಮೂಲಕ ಸ್ವೀಕೃತವಾಗಲಿವೆ. ಸಂದೇಶ ಸ್ವೀಕೃತಗೊಂಡ ಫಲಾನುಭವಿಗಳು ಮಾತ್ರ ಸಂದೇಶದಲ್ಲಿ ವಿವರಿಸಿದ ಸೇವಾ ಕೇಂದ್ರಕ್ಕೆ ನಿಗದಿಪಡಿಸಿದ ಸಮಯಕ್ಕೆ ಹಾಜರಾಗಿ ಅರ್ಜಿ ಸಲ್ಲಿಸಬಹುದು.
ಯೋಜನೆಯಡಿ ಆ.15ಕ್ಕೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಸಂದಾಯ ಆಗಲಿದೆ. ರೇಷನ್ ಕಾರ್ಡ್ನಲ್ಲಿ ಮನೆಯ ಯಜಮಾನಿಯಾಗಿರುವವರು ಯೋಜನೆಯ ಫಲಾನುಭವಿಯಾಗಲಿದ್ದಾರೆ. ಅವರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ಅವರ ಪತಿಯ ಆಧಾರ್ ಕಾರ್ಡ್ ನೀಡಬೇಕು. ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಪಾವತಿದಾರರ ಪತ್ನಿಯರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಗ್ರಾಪಂಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಣಿಗೆ ಅವಕಾಶ ಇದೆ. ಸರ್ಕಾರ ನೇಮಕ ಮಾಡಿರುವ ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ಬಂದು ನೋಂದಣಿ ಮಾಡಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಯೋಜನೆಯ ಲಾಂಛನ ಹಾಗೂ ಪೋಸ್ಟರ್ ಬಿಡುಗಡೆ ಮಾಡಲಿದ್ದಾರೆ. ಶಾಸಕ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಉಪಸ್ಥಿತರಿರಲಿದ್ದಾರೆ.