ಡೆಂಗ್ಯೂ ಹೆಚ್ಚಳಕ್ಕೆ ಹೈಕೋರ್ಟ್ ಕಳವಳ – ಸುಮೋಟೋ ಕೇಸ್ ದಾಖಲು

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ  ಪ್ರಕರಣ ಹೆಚ್ಚಳಕ್ಕೆ ಹೈಕೋರ್ಟ್  ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಸಂಬಂಧ ನ್ಯಾಯಾಲಯ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಈ ಬಗ್ಗೆ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಜು.23ರ ಒಳಗೆ ಉತ್ತರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆಯ ಕಾರ್ಯದರ್ಶಿ ಹಾಗೂ ಬಿಬಿಎಂಪಿಗೆ  ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಮುಖ್ಯ ನ್ಯಾ.ಎನ್.ವಿ ಅಂಜಾರಿಯಾ ನೇತೃತ್ವದ ಪೀಠ ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದು, ಅಧಿಕಾರಿಗಳಿಗೆ ಪೀಠ ಕೆಲವು ಪ್ರಮುಖ ಪ್ರಶ್ನೆಗಳನ್ನು ಇಟ್ಟಿದೆ. ಈ ಪ್ರಶ್ನೆಗಳಿಗೆ ನಿಗದಿತ ಸಮಯದಲ್ಲಿ ಉತ್ತರಿಸುವಂತೆ ಕೋರ್ಟ್ ಸೂಚಿಸಿದೆ.

ಉತ್ತಮ ವಾತಾವರಣದಲ್ಲಿ ಬದುಕುವುದು ಸಂವಿಧಾನ ಪರಿಚ್ಛೇದ 21ರ ಅಡಿಯಲ್ಲಿ ಮೂಲಭೂತ ಹಕ್ಕಾಗಿದೆ ಎಂದು ತಿಳಿಸಿದ ಪೀಠ, ಬೆಂಗಳೂರು ನಗರ ಸೇರಿದಂತೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಸೊಳ್ಳೆಗಳನ್ನು ನಿಯಂತ್ರಿಸಿ, ಡೆಂಗ್ಯೂ ಹರಡದಂತೆ ತಡೆಯಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳು, ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ರೋಗಿಗಳಿಗಾಗಿ ಒದಗಿಸಿರುವ ವೈದ್ಯಕೀಯ ಮೂಲಸೌಲಭ್ಯಗಳ ಕುರಿತ ಸಂಪೂರ್ಣ ವಿವರ, ಈ ಕರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೈಗೊಂಡಿರುವ ಕ್ರಮಗಳು, ಸೊಳ್ಳೆಗಳ ಸಂಖ್ಯೆ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಕುರಿತು ವಿವರಣೆ ನೀಡಬೇಕು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿತು.

ಹೈಕೋರ್ಟ್ ನೋಟಿಸ್‍ನಲ್ಲೇನಿದೆ?
1.ಬೆಂಗಳೂರು ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳೇನು?
2.ಬೆಂಗಳೂರು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆಯೇ?
3.ಒದಗಿಸಿರುವ ಮೂಲಸೌಕರ್ಯಗಳ ಮಾಹಿತಿ
4.ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕೈಗೊಂಡ ಕ್ರಮಗಳೇನು?
5.ಸೊಳ್ಳೆಗಳ ಉತ್ಪತ್ತಿ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ.
ಈ ಸಂಬಂಧ ಸಂಪೂರ್ಣ ಮಾಹಿತಿ ಒದಗಿಸುವುದಾಗಿ ಎಜಿ ಶಶಿಕಿರಣ್ ಶೆಟ್ಟಿ ಹೈಕೋರ್ಟ್‍ಗೆ ಉತ್ತರಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *