ಬೆಂಗಳೂರು: ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರವು ನ್ಯಾಯಮೂರ್ತಿ ಭಕ್ತವತ್ಸಲ ಅಧ್ಯಕ್ಷತೆಯಲ್ಲಿ ಪ್ರತ್ಯೇಕ ಆಯೋಗ ರಚಿಸಿದೆ. ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಿಸಲಾಗಿದೆ.
ಹಿಂದುಳಿದ ವರ್ಗಗಳಿಗೆ ಪಂಚಾಯತ್ ರಾಜ್ ಸಂಸ್ಥೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ಕುರಿತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2010ರಲ್ಲಿ ಸುಪ್ರೀಂಕೋರ್ಟ್ ರಾಜ್ಯಗಳಿಗೆ ನಿರ್ದೇಶನ ನೀಡಿತ್ತು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅದರಂತೆ ಈ ಆಯೋಗ ರಚಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶನಿವಾರ ಹೊರಡಿಸಿರುವ ಆದೇಶದ ಪ್ರಕಾರ, ಮಾರ್ಚ್ 23 ಹಾಗೂ 31ರಂದು ನಡೆದ ಸರ್ವಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಹಿಂದುಳಿದ ವರ್ಗಗಳಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಿಯೇ ಚುನಾವಣೆ ನಡೆಸುವ ಕುರಿತು ಚರ್ಚೆ ನಡೆದಿತ್ತು.
ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಗುರುತಿಸಿ, ಈ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಅಧ್ಯಯನ ನಡೆಸಿ, ಶಿಫಾರಸು ಮಾಡಲು ಈ ಆಯೋಗಕ್ಕೆ ಸೂಚಿಸಲಾಗಿದೆ.