ಧಾರವಾಡ: ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ಹಾಸ್ಟೆಲ್ ಆಯ್ಕೆ ಪಟ್ಟಿ ಪ್ರಕಟಿಸಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಧಾರವಾಡ ಸಂಘಟನಾ ಸಮಿತಿ ನೇತೃತ್ವದಲ್ಲಿ ಇಂದು ನಗರ ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿಗಳು ಪ್ರತಿಭಟನಾ ಧರಣಿ ನಡೆಸಿದರು.
ಅಧಿಕಾರಿಗಳಾದ ವೀರನಗೌಡ ಪಾಟೀಲ್ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳಾದ ಪುರುಷೋತ್ತಮ್ ಅವರಿಗೆ ಮನವಿ ಸಲ್ಲಿಸಿದರು.
ಇದನ್ನು ಓದಿ : ಗಜೇಂದ್ರಗಡದಲ್ಲಿ ಪಿಜಿ ಸೆಂಟರ ಪ್ರಾರಂಭಿಸಿಲು SFI ನಿಂದ ಶಾಸಕರಿಗೆ ಮನವಿ..
ಎಸ್ಎಫ್ಐ ರಾಜ್ಯ ಸಮಿತಿ ಸದಸ್ಯರಾದ ಬಸವರಾಜ ಭೋವಿ ಮಾತಾನಾಡಿ ʻʻರಾಜ್ಯದಲ್ಲಿ ಶಾಲಾ ಕಾಲೇಜು ಆರಂಭವಾಗಿ 2-3 ತಿಂಗಳು ಕಳೆದರು ತಾಲ್ಲೂಕಿನಲ್ಲಿ ಹಾಸ್ಟೆಲ್ ಬಯಸಿ ವಿದ್ಯಾರ್ಥಿಗಳು ಹಾಸ್ಟೆಲ್ ಅರ್ಜಿ ಹಾಕಿದರೂ ಸಹ ದಿನವೂ ವಿದ್ಯಾರ್ಥಿಗಳು ಗ್ರಾಮಗಳಿಂದ ಕಾಲೇಜುಗಳಿಗೆ ಹಣ ಕೊಟ್ಟು ಬರುತ್ತಿದ್ದಾರೆ.
ಒಂದಡೆ ಅನೇಕ ಗ್ರಾಮಗಳಿಗೆ ಸೂಕ್ತವಾದ ಬಸ್ ಸೌಲಭ್ಯ ಇಲ್ಲ ಮತ್ತು ಅನೇಕ ವಿದ್ಯಾರ್ಥಿಗಳು ಹಾಸ್ಟೆಲ್ ಗೆ ಅರ್ಜಿ ಹಾಕಿ ಆಯ್ಕೆ ಪಟ್ಟಿ ಪ್ರಕಟಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಅನೇಕ ವಿದ್ಯಾರ್ಥಿಗಳು ದೂರದ ಊರಿನಿಂದ ನೂರಾರು ರೂಪಾಯಿ ಖರ್ಚು ಮಾಡಿಕೊಂಡು ಬರುತ್ತಿದ್ದಾರೆ.
ಆಯ್ಕೆ ಸಮಿತಿಯ ಅಧ್ಯಕ್ಷರು ಶಾಸಕರು ಆಗಿರುವುದರಿಂದ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಬಿಡುಗಡೆಗೆ ವಿಳಂಬ ಮಾಡಬಾರದು ಹಾಗೂ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು ಮತ್ತು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಹಾಸ್ಟೆಲ್ ಗಳನ್ನು ಕಲ್ಪಿಸಬೇಕು ಹಾಗೂ ಹಾಸ್ಟೆಲ್ ಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೇಂದು ಆಗ್ರಹಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಕೂಡಲೇ ಶಾಸಕರ ಗಮನಕ್ಕೆ ತಂದು ಹಾಸ್ಟೆಲ್ ಆಯ್ಕೆ ಪಟ್ಟಿ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಸುತ್ತೇವೆ ಎಂದು ಎಸ್‌ಎಫ್‌ಐ ಸಂಘಟನೆಯ ವಿದ್ಯಾರ್ಥಿಗಳು ಪಟ್ಟುಹಿಡಿದರು.
ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳಾದ ಪುರುಷೋತ್ತಮ ಅವರು ಮನವಿ ಸ್ವೀಕರಿಸಿ ಸಂಜೆ ಒಳಗೆ ಹಾಸ್ಟೆಲ್ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಹೋರಾಟದ ಪರಿಣಾಮವಾಗಿ ಸಮಾಜ ಕಲ್ಯಾಣ ಇಲಾಖೆಯು ಹಾಸ್ಟೆಲ್ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ.
ಈ ಸಂದರ್ಭದಲ್ಲಿ ಎಸ್‌ಎಫ್‌ಐ ಧಾರವಾಡ ಸಂಘಟನಾ ಸಮಿತಿ ಅಧ್ಯಕ್ಷ ಯುವರಾಜ್ ಲಮಾಣಿ, ಕಾರ್ಯದರ್ಶಿ ಆನಂದ್ ಎ ಎಲ್, ಉಪಾಧ್ಯಕ್ಷರಾದ ರಂಗನಾಥ ಎಚ್, ಈರಣ್ಣ ಎಸ್ ಡಿ, ಸುಂದರರಾಜ್ ಎಲ್., ಹೇಮಂತ್ ಆರ್, ಸಹ ಕಾರ್ಯದರ್ಶಿಗಳಾದ ವಿಕಾಸ ಆರ್ ಡಿ, ಯಲ್ಲಪ್ಪ ಎಚ್ ಎಲ್, ರಾಘವೇಂದ್ರ ವಿ ಎಚ್, ಸುನೀಲ್ ವೈ ಎಚ್, ಗ್ಯಾನೆಶ್ ಸೇರಿದಂತೆ ಅನೇಕ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.