ಮೇ 25 | ಫ್ರೀಡಂ ಪಾರ್ಕ್‌ನಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ನಿಲಯಗಳು, ಶಾಲೆಗಳು ಮತ್ತು ಕಾಲೇಜುಗಳಲ್ಲಿ ಕಳೆದ 15-20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳು ಮೇ 25ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಮೇ 25

ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ-ಗ್ರೂಪ್ ಅಟೆಂಡರ್‌ಗಳು, ಕಂಪ್ಯೂಟರ್ ಆಪರೇಟರ್‌ಗಳು, ಡಾಟಾ ಎಂಟ್ರಿ ಆಪರೇಟರ್‌ಗಳು ಹಾಗೂ ಅತಿಥಿ ಶಿಕ್ಷಕರು ಸೇರಿದಂತೆ ಸಾವಿರಾರು ಸಿಬ್ಬಂದಿಗಳು ಈ ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ.

ಹೊರಗುತ್ತಿಗೆ ಸಿಬ್ಬಂದಿಗಳನ್ನು ಗುತ್ತಿಗೆದಾರರು ಮತ್ತು ವಿವಿಧ ಹಂತದ ಅಧಿಕಾರಿಗಳು ವರ್ಷಗಳಿಂದ ಶೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಕಡಿಮೆ ಸಂಬಳ, ಸೇವಾ ಭದ್ರತೆಯ ಕೊರತೆ, ಸಂಬಳ ವಿಳಂಬ, ಅನ್ಯಾಯವಾಗಿ ಕೆಲಸದಿಂದ ತೆಗೆದುಹಾಕುವುದು, ಕಿರುಕುಳ ಹಾಗೂ ಕಾರ್ಮಿಕ ಕಾನೂನುಗಳ ಉಲ್ಲಂಘನೆ ವಿರುದ್ಧ ಈ ಹೋರಾಟ ನಡೆಯುತ್ತಿದೆ ಎಂದು ಸಂಘಟನೆ ತಿಳಿಸಿದೆ.

ಸಂಘಟನೆ ಪ್ರಮುಖವಾಗಿ ಕನಿಷ್ಠ ₹36 ಸಾವಿರ ಮಾಸಿಕ ವೇತನ ಜಾರಿಗೆ ಒತ್ತಾಯಿಸಿದೆ. ರಾಜ್ಯ ಸರ್ಕಾರ ಮತ್ತು ಕಾರ್ಮಿಕ ಇಲಾಖೆ 2025ರ ಏಪ್ರಿಲ್ 11ರಂದು ಹೊರಡಿಸಿದ್ದ ಕನಿಷ್ಠ ವೇತನ ಪರಿಷ್ಕರಣೆ ಕರಡು ಅಧಿಸೂಚನೆಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಆಗ್ರಹಿಸಿದೆ. ನಾಲ್ಕು ವೇತನ ವಲಯಗಳ ಬದಲಾಗಿ ಮೂರು ವಲಯಗಳನ್ನು ರೂಪಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟಿದೆ. ಮೇ 25

ಇದನ್ನೂ ಓದಿ : ಬಯಲೇ ಶೌಚಾಲಯ! ಹಸಿ ಸೌದೆ ಬಳಸಿ ಅಡುಗೆ!! ಇದು ಸರಕಾರಿ ಹಾಸ್ಟೇಲ್‌ನ ಅವ್ಯವಸ್ಥೆ.

ಎಲ್ಲಾ ಹೊರಗುತ್ತಿಗೆ ಸಿಬ್ಬಂದಿಗಳಿಗೆ ನಿವೃತ್ತಿವರೆಗೆ ಸೇವಾ ಭದ್ರತೆ ನೀಡಿ, ಕೆಲಸ ಮಾಡುತ್ತಿರುವ ಸ್ಥಳಗಳಲ್ಲೇ ಖಾಯಂ ನೇಮಕ ಮಾಡಬೇಕು ಎಂದು ಒತ್ತಾಯಿಸಲಾಗಿದೆ. ಸಂಬಳವನ್ನು ನೇರವಾಗಿ ಇಲಾಖೆಯೇ ಪಾವತಿಸಬೇಕು, ಇಎಸ್‌ಐ ಮತ್ತು ಪಿಎಫ್ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು, ವಾರಕ್ಕೆ ಒಂದು ರಜೆ ನೀಡಬೇಕು ಹಾಗೂ ಕೆಲಸದ ಸಮಯ ನಿಗದಿಪಡಿಸಬೇಕು ಎಂಬ ಬೇಡಿಕೆಗಳೂ ಸೇರಿವೆ.

ಇದೇ ವೇಳೆ, ಹಾಸ್ಟೆಲ್ ಸಿಬ್ಬಂದಿಗಳ ಸಂಖ್ಯೆ ಕಡಿತಗೊಳಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಸಂಘಟನೆ ಆಗ್ರಹಿಸಿದೆ. 50 ವಿದ್ಯಾರ್ಥಿಗಳಿಗೆ ಮೂವರು ಸಿಬ್ಬಂದಿ ನೇಮಕ ಮಾಡುವ ಹಿಂದಿನ ಪದ್ಧತಿಯನ್ನು ಮುಂದುವರಿಸಬೇಕು ಎಂದು ಹೇಳಲಾಗಿದೆ. ಹೊಸದಾಗಿ ಆರಂಭವಾಗಿರುವ ವಸತಿ ಶಾಲೆಗಳಲ್ಲಿ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದೂ ಒತ್ತಾಯಿಸಲಾಗಿದೆ.

ಹೊರಗುತ್ತಿಗೆ ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಿ, ಅವರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು, ಮಹಿಳಾ ನೌಕರರಿಗೆ ವೇತನ ಸಹಿತ ಹೆರಿಗೆ ರಜೆ ನೀಡಬೇಕು, ನಿವೃತ್ತಿ ನಂತರ ₹10 ಲಕ್ಷ ಪರಿಹಾರ ನೀಡಬೇಕು ಮತ್ತು “ಸಮಾನ ಕೆಲಸಕ್ಕೆ ಸಮಾನ ವೇತನ” ಎಂಬ ಸುಪ್ರೀಂಕೋರ್ಟ್ ಆದೇಶ ಜಾರಿಗೊಳಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

“ಸರ್ಕಾರ ನಮ್ಮ ಬೇಡಿಕೆಗಳನ್ನು ತಕ್ಷಣ ಈಡೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು” ಎಂದು ಸಂಘಟನೆಯ ಅಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಉಪಾಧ್ಯಕ್ಷ ಎಂ. ಜಂಬಯ್ಯ ನಾಯಕ ಹಾಗೂ ಪ್ರಧಾನ ಕಾರ್ಯದರ್ಶಿ ಕೆ. ಹನುಮೇಗೌಡ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ನೋಡಿ : ವೇತನ ಬಿಡುಗಡೆ ಹಾಗೂ ಖಾಯಂಗೆ ಆಗ್ರಹಿಸಿ ಹಾಸ್ಟೇಲ್ ನೌಕರರ ಪ್ರತಿಭಟನೆ || Janashakthi Media

Donate Janashakthi Media

Leave a Reply

Your email address will not be published. Required fields are marked *