- ಇತಿಹಾಸ ನಿರ್ಮಿಸಿದ ಮಹಿಳಾ ಹಾಕಿ ತಂಡ
- 41 ವರ್ಷಗಳ ಬಳಿಕ ಮೊದಲ ಬಾರಿ ಸೆಮೀಸ್ ಪ್ರವೇಶ
ಟೋಕಿಯೋ : ಭಾರತ ಮಹಿಳಾ ಹಾಕಿ ತಂಡ ಕ್ವಾರ್ಟರ್ ಫೈನಲ್ನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡದ ಎದುರು ಸೆಣಸಾಡಿದ ರಾಣಿ ರಾಂಪಾಲ್ ನೇತೃತ್ವದ ಭಾರತ ಮಹಿಳಾ ಹಾಕಿ ತಂಡ, ಶ್ರೇಷ್ಠ ಪ್ರದರ್ಶನ ತೋರುವ ಮೂಲಕ ಸೆಮಿಫೈನಲ್ಗೆ ಎಂಟ್ರಿಕೊಟ್ಟಿದೆ.
ತೀವ್ರ ಪೈಪೋಟಿಯಿಂದ ಸಾಗಿದ ಪಂದ್ಯದ ಮೊದಲಾರ್ಧದಲ್ಲಿ ಉಭಯ ತಂಡಗಳೂ ಗೋಲು ಗಳಿಸಲು ಸಾಧ್ಯವಾಗಲಿಲ್ಲ. ಆದ್ರೆ ನಂತರದ ಸೆಕೆಂಡ್ ಹಾಫ್ನಲ್ಲಿ ಭಾರತದ ಪರ ಗುರ್ಜಿತ್ ಕೌರ್ ಗೋಲು ಬಾರಿಸಿ, ತಂಡಕ್ಕೆ ಮುನ್ನಡೆ ತಂದುಕೊಟ್ಟರು.
ಮುನ್ನಡೆ ಬಳಿಕ ಸಮಯೋಜಿತ ಆಟ ಪ್ರದರ್ಶಿಸಿದ ಭಾರತ ವನಿತೆಯರು, ಬಲಿಷ್ಠ ಆಸ್ಟ್ರೇಲಿಯಾ ಎದುರು ಸಂಪೂರ್ಣ ಮೇಲುಗೈ ಸಾಧಿಸಿದರು. ಅಂತಿಮ ಕ್ಷಣದವರೆಗೆ ಕುತೂಹಲ ಕಾಯ್ದಿರಿಸಿದ್ದ ಪಂದ್ಯವನ್ನ 1-0 ಅಂತರದಿಂದ ಗೆಲ್ಲುವಲ್ಲಿ ಯಶಸ್ವಿಯಾದ ಭಾರತ, ಸೆಮಿಫೈನಲ್ಗೆ ಲಗ್ಗೆಯಿಟ್ಟಿತು.. ಆ ಮೂಲಕ ಮೊದಲ ಬಾರಿಗೆ ಒಲಿಂಪಿಕ್ಸ್ ಸೆಮೀಸ್ ಪ್ರವೇಶಿಸಿದ ಸಾಧನೆ ಮಾಡಿತು.
ಇತಿಹಾಸ ಬರೆದ ಮಹಿಳಾ ಹಾಕಿ ತಂಡ : ಒಲಿಂಪಿಕ್ಸ್ ಇತಿಹಾಸದಲ್ಲಿ ಬರೋಬ್ಬರಿ 41 ವರ್ಷಗಳ ಬಳಿಕ ಸೆಮೀಪೈನಲ್ ಗೆ ಲಗ್ಗೆ ಇಟ್ಟಿದೆ.ಎ ಗುಂಪಿನಲ್ಲಿ ಹ್ಯಾಟ್ರಿಕ್ ಸೋಲಿನ ನಡುವೆಯೂ ಕಡೇ ಎರಡು ಪಂದ್ಯಗಳಲ್ಲಿ ಉತ್ತಮ ನಿರ್ವಹಣೆ ತೋರಿದ ಭಾರತ ತಂಡ, 6 ಪಾಯಿಂಟ್ಸ್‌ಗಳೊಂದಿಗೆ 4ನೇ ಸ್ಥಾನಿಯಾಗಿ ಕ್ವಾರ್ಟರ್ ಫೈನಲ್ ಪ್ರವೇಶಿಸಿತ್ತು. ಕಡೇ ಎರಡು ಹಣಾಹಣಿಯಲ್ಲಿ ಐರ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ಎದುರು ಜಯ ದಾಖಲಿಸಿತ್ತು.
ಮಹಿಳಾ ತಂಡ 1980ರ ಮಾಸ್ಕೋ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ಅರ್ಹತೆ ಗಿಟ್ಟಿಸಿಕೊಂಡಾಗ ಎಂಟರಘಟ್ಟಕ್ಕೇರಿದ ಸಾಧನೆ ಮಾಡಿತ್ತು.