ತುಮಕೂರು: ರಾಜ್ಯದಲ್ಲಿ ಒಳಮೀಸಲಾತಿ ವಿಚಾರ ರಾಜಕೀಯ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ಈ ಗೊಂದಲಕ್ಕೆ ಶೀಘ್ರದಲ್ಲೇ ತೆರೆ ಬೀಳುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಮಾರ್ಚ್ 28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದ್ದು, ಅದರಲ್ಲಿ ಒಳಮೀಸಲಾತಿ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು. ಸಭೆಯ ನಂತರ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸುವ ನಿರೀಕ್ಷೆಯಿದೆ ಎಂದರು.
ರಾಜ್ಯದಲ್ಲಿ ಒಳಮೀಸಲಾತಿ ವಿಚಾರವಾಗಿ ರಾಜಕೀಯ ವಲಯದಲ್ಲಿ ಚರ್ಚೆಗಳು ಮತ್ತು ವಾದ-ವಿವಾದಗಳು ನಡೆಯುತ್ತಿರುವ ಹಿನ್ನೆಲೆ, ಈ ವಿಶೇಷ ಸಂಪುಟ ಸಭೆ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ಸಭೆಯಲ್ಲಿ ತೀರ್ಮಾನವಾದ ಬಳಿಕ ಈ ವಿಷಯದಲ್ಲಿ ಸ್ಪಷ್ಟತೆ ಬರಲಿದೆ ಎಂಬ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದರು.
ಇದನ್ನೂ ಓದಿ :ಅಡುಗೆ ಅನಿಲದ ಕೊರತೆಯನ್ನು ನಿವಾರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು -ಪ್ರಧಾನಿಗಳಿಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪತ್ರ
ಇದೇ ವೇಳೆ ಸರ್ಕಾರಿ ನೇಮಕಾತಿ ಪ್ರಕ್ರಿಯೆಗೂ ವೇಗ ಸಿಗಲಿದೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ಸುಮಾರು 50 ಸಾವಿರ ಹುದ್ದೆಗಳ ಭರ್ತಿಗೆ ಸರ್ಕಾರ ಸಿದ್ಧತೆ ನಡೆಸಿದ್ದು, ಪೊಲೀಸ್ ಇಲಾಖೆಯಲ್ಲಿಯೇ ಸುಮಾರು 8 ಸಾವಿರ ಹುದ್ದೆಗಳು ಖಾಲಿ ಇವೆ. ಸರ್ಕಾರದ ತೀರ್ಮಾನ ಹೊರಬಂದ ಬಳಿಕ ಆಯ್ಕೆ ಪ್ರಕ್ರಿಯೆ ತುರ್ತಾಗಿ ಆರಂಭವಾಗಲಿದೆ ಎಂದು ತಿಳಿಸಿದರು.
ಗ್ಯಾಸ್ ಸಿಲಿಂಡರ್ ಸಮಸ್ಯೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ತುಮಕೂರು ಜಿಲ್ಲೆಯಲ್ಲಿ ಗೃಹಬಳಕೆಯ ಸಿಲಿಂಡರ್ ಕೊರತೆ ಇಲ್ಲ. ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಬಗ್ಗೆ ಕೆಲವೊಂದು ಸಮಸ್ಯೆಗಳ ಬಗ್ಗೆ ಮಾಹಿತಿ ಬಂದಿದೆ. ಹೋಟೆಲ್‌ಗಳಿಗೆ ಒಂದು-ಎರಡು ದಿನಗಳಷ್ಟು ತೊಂದರೆ ಉಂಟಾಗುವ ಸಾಧ್ಯತೆ ಇದ್ದರೂ, ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ಇದನ್ನೂ ನೋಡಿ : LIVE: 56 ಸಾವಿರ ಹುದ್ದೆಗಳಿಗೆ ಒಳಮೀಸಲಾತಿ ಅನ್ವಯಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ
