ಮಂಗಳೂರು : ಅನಿಯಮಿತ ವಿದ್ಯುತ್ ಕಡಿತಗೊಂಡಿದ್ದರಿಂದ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿ ಆಕ್ರೋಶ ವ್ಯಕ್ತಪಡಿಸಿ ಹೋರಾಟದ ಎಚ್ಚರಿಕೆಯನ್ನು ನೀಡಿದೆ.
ಕಳೆದ ಒಂದು ವಾರಗಳಿಂದ ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಮೆಸ್ಕಾಂ) ಯವರು ಯಾವುದೇ ಪ್ರಕಟಣೆ ಇಲ್ಲದೆ ಲೋಡ್ ಶೆಡ್ಡಿಂಗ್ ನಡೆಸುತ್ತಿರುವುದು ತೀರಾ ಖಂಡನೀಯ ಕ್ರಮವಾಗಿದೆ ಎಂದು ಡಿವೈಎಫ್ಐ ಆಪಾದಿಸಿದೆ. ಕರ್ನಾಟಕ ರಾಜ್ಯ ಸರಕಾರ ಗೃಹಜ್ಯೋತಿ ಯೋಜನೆ ಜಾರಿ ಮಾಡಿರುವ ಬೆನ್ನಲ್ಲೇ ದಿನನಿತ್ಯ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದು ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ನೀತಿ ಎಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಸರಕಾರವನ್ನು ಪ್ರಶ್ನಿಸಿದೆ.
ಇದನ್ನೂ ಓದಿ:ನೀರಿನ ಅಭಾವ : ಶಾಶ್ವತ ಪರಿಹಾರಕ್ಕೆ ಡಿವೈಎಫ್‌ಐ ಆಗ್ರಹ
ಅನಿಯಮಿತ ಲೋಡ್ ಶೆಡ್ಡಿಂಗ್ ಬಗ್ಗೆ ಕಾರಣಗಳನ್ನು ಮೆಸ್ಕಾಂ ಅಧಿಕಾರಿಗಳನ್ನು ಕೇಳಿದರೆ ಸಮರ್ಪಕ ಉತ್ತರ ಸಿಗುತ್ತಿಲ್ಲ, ಮೆಸ್ಕಾಂ ಕಚೇರಿಗಳಲ್ಲಿ ಸಿಬ್ಬಂದಿಗಳಿಗೂ ಲೋಡ್ ಶೆಡ್ಡಿಂಗ್ ಬಗ್ಗೆ ಮಾಹಿತಿ ಇರುವುದಿಲ್ಲ. ವಿದ್ಯುತ್ ಅಭಾವ ಇದೆಯೇ? ಇಂಧನ ಕೊರತೆಯೇ? ವಿದ್ಯುತ್ ಖರೀದಿಗೆ ಹಣಕಾಸಿನ ಸಂಕಷ್ಟ ಇದೆಯೇ ಎಂಬುದರ ಬಗ್ಗೆ ಸರಕಾರ ಕೂಡಲೇ ಸಾರ್ವಜನಿಕ ಪ್ರಕಟಣೆ ಹೊರಡಿಸಬೇಕು ಎಂದು ಡಿವೈಎಫ್ಐ ಆಗ್ರಹಿಸಿದೆ.
ಈಗಾಗಲೇ ಲೋಡ್ ಶೆಡ್ಡಿಂಗ್ ನಿಂದ ರೈತರು , ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಬಹುತೇಕ ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಮಾತ್ರವಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯ ಹತ್ತಿರ ಬರುತ್ತಿದ್ದು ಅವರ ಕಲಿಕೆ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರಲಿದೆ. ಮೆಸ್ಕಾಂ ಇಲಾಖೆ ಕೂಡಲೇ ಲೋಡ್ ಶೆಡ್ಡಿಂಗ್ ಕೈಬಿಟ್ಟು ಜನರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.
ಒಂದು ವೇಳೆ ವಿಫಲವಾದಲ್ಲಿ ಜಿಲ್ಲೆಯ ಎಲ್ಲಾ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗುತ್ತದೆ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಎಚ್ಚರಿಕೆಯನ್ನು ನೀಡುತ್ತದೆ ಎಂದು ಡಿವೈಎಫ್ಐ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಮತ್ತು ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.