ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದುವುದು ಮತ್ತು ಅರ್ಥೈಸುವುದನ್ನು ಕಡ್ಡಾಯಗೊಳಿಸಿ ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ಸೂಚಿಸಿದ್ದಾರೆ.
ಕರ್ನಾಟಕದಾದ್ಯಂತ ಶಾಲೆಗಳಲ್ಲಿ ಇನ್ನು ಸಂವಿಧಾನದ ಪ್ರಸ್ತಾವನೆಯನ್ನು ಓದುವುದು ಹಾಗೂ ಅರ್ಥೈಸಿಕೊಳ್ಳುವುದು ಕಡ್ಡಾಯವಾಗಿರಲಿದೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ಸಿ ಮಹದೇವಪ್ಪ ಮಾಹಿತಿ ನೀಡಿದ್ದು, ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಆ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆ ಓದಿದ್ದಲ್ಲದೆ, ನಂತರ ಶಾಲೆಗಳಲ್ಲಿ ಓದಿಸುವ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ.
ಸಚಿವರು ಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಎಲ್ಲರೂ ಸಂವಿಧಾನ ತೋರಿದ ಮಾರ್ಗದಲ್ಲಿ ಕೆಲಸ ಮಾಡಲು ಸೂಚಿಸಿದರು. ಇದೇ ವೇಳೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸುವುದಕ್ಕೆ ಪೂರಕವಾಗಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು’ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಟ್ವಿಟರ್ ಹ್ಯಾಂಡಲ್ನಿಂದ ಟ್ವೀಟ್ ಮಾಡಲಾಗಿದೆ.
ಗುರುವಾರ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಸಭೆಗೂ ಮುನ್ನ ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಸಂವಿಧಾನದ ಪೀಠಿಕೆಯನ್ನು ಓದಿದರು. ರಾಜ್ಯಾದ್ಯಂತ ಶಾಲೆ, ಕಾಲೇಜುಗಳಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಪಠಿಸುವುದು ಕಡ್ಡಾಯಗೊಳಿಸಲಾಗಿದ್ದು, ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲು ಸೂಚನೆ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.