ಬೆಳಗಾವಿ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ. ಜಿ, ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಎಸ್‌ಸಿಪಿ, ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಬಳಸಿಕೊಂಡಿದ್ದು ನಿಜ ಎಂದು ಹೇಳಿದ್ದಾರೆ.
ಶನಿವಾರ (ಜು.13) ರಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಎಸ್.ಸಿ.ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಎಸ್‌ಟಿಪಿ, ಟಿಎಸ್‌ಪಿ ಕಾರ್ಯಕ್ರಮ ದೇಶದಲ್ಲಿಯೇ ಅತ್ಯುತ್ತಮವಾದದ್ದು. ತಳಮಟ್ಟದ ಸಮುದಾಯಗಳಿಗೆ ನ್ಯಾಯ ಒದಗಿಸುವ ಕೆಲಸವನ್ನು ಸಿದ್ದರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ವೇಳೆಯೇ ಮಾಡಿದ್ದರು. ಅದೇ ರೀತಿ 7ಸಿ, 7ಡಿ ಸೆಕ್ಷನ್‌ಗಳನ್ನು ಹಾಕಿ ಕಾನೂನಾತ್ಮಕಗೊಳಿಸಿದ್ದಾರೆ. ವಿಶೇಷ ಸಂದರ್ಭದಲ್ಲಿ ಉತ್ತಮ ಕಾರ್ಯಗಳಿಗೆ ಆ ಅನುದಾನ ಬಳಸಬಹುದು ಎಂಬುದನ್ನು ಸೆಕ್ಷನ್ 7ಸಿಯಲ್ಲಿ ಉಲ್ಲೇಖಿಸಲಾಗಿದೆ’ ಎಂದರು.
ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು, ಮಧ್ಯವರ್ತಿಗಳ ಹಾವಳಿ ಹೆಚ್ಚುತ್ತಿರುವ ಕುರಿತು ಕೆಲವು ದೂರುಗಳು ಬರುತ್ತಿವೆ. ಹಾಗಾಗಿ ಯಾವುದೇ ಮಧ್ಯವರ್ತಿಗಳು ಇಲ್ಲದೇ ಯೋಜನೆಗಳ ಸೌಲಭ್ಯ ಫಲಾನುಭವಿಗೆ ದೊರೆಯುವಂತೆ ಎಲ್ಲ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ವಾಲ್ಮೀಕಿ ನಿಗಮ ಆಕ್ರಮ ಪ್ರಕರಣ;ನಾಗೇಂದ್ರ ಬಂಧನ ನಂತರ ಬಸವನಗೌಡ ದದ್ದಲ್ ನಾಪತ್ತೆ
ಜಿಲ್ಲಾ ಕೇಂದ್ರಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ನಿಗಮದ ಕೆಲಸ ನಿರ್ವಹಿಸಬೇಕು, ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿನ ಯೋಜನೆಗಳ ಅರ್ಜಿಗಳ ಅಂಕಿ ಅಂಶಗಳ ಮಾಹಿತಿ ಅಧಿಕಾರಿಗಳಿಗೆ ಇರಬೇಕು ಎಂದು ತಿಳಿಸಿದರು.
ಇಲಾಖೆ ಯೋಜನೆಗಳಿಗಾಗಿ ಸಲ್ಲಿಸಿದ ಅರ್ಜಿಗಳ ಮಾಹಿತಿಯನ್ನು ಅಧಿಕಾರಿಗಳು ಕಡ್ಡಾಯವಾಗಿ ತರಬೇಕು. ಸಭೆಗೆ ಮುಂಚಿತವಾಗಿ ಎಲ್ಲಾರಿಗೂ ಸಭೆಯ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ದಾಖಲಾತಿ ಒದಗಿಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಸಿದ ಅಲೆಮಾರಿಗಳ, ಅರೆ ಅಲೆಮಾರಿ ಜನನಗಳ ಅಂಕಿ ಅಂಶಗಳನ್ನು ಮಾಹಿತಿಗಾಗಿ ಸಂಗ್ರಹಿಸಬೇಕು. ಆಯ್ಕೆಯಾದ ಫಲಾನುಭವಿಗಳಿಗೆ ಕೆಲವು ಬ್ಯಾಂಕ್ ಸಾಲ ಸೌಲಭ್ಯ ನೀಡುವುದಿಲ್ಲ ಅಂತಹ ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಿಂದ ವಿರ್ದೇಶನ ನೀಡುವಂತೆ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ತಿಳಿಸಿದರು.
ಈಗಾಗಲೇ ಮಂಜೂರಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ಯಾವುದೇ ಅನುದಾನವನ್ನು ಬಾಕಿ ಉಳಸಿಕೊಳ್ಳಬಾರದು ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನವೀನ ಶಿ೦ತೆ ಸೇರಿಂತ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸಿಬ್ಬಂದಿಗಳ ಸಭೆಯಲ್ಲಿ ಉಪಸ್ಥಿತರಿದ್ದರು.
ಇದನ್ನೂ ನೋಡಿ: ವಚನಾನುಭವ – 04 | ಆಲೈ ಆಡಿದೆನೊ ಬೊಂಸೈ ಆಡಿದೆನೊ | ಕಡಕೋಳ ಮಡಿವಾಳಪ್ಪ ತತ್ವಪದ – ಮೀನಾಕ್ಷಿ ಬಾಳಿ Janashakthi Media