ಜನಮತ 2023 : ಬಿಜೆಪಿ ಟಿಕೆಟ್‌ ಆಕಾಂಕ್ಷಿ ಎನ್‌.ಆರ್. ಸಂತೋಷ್ ಚಿತ್ತ ಜೆಡಿಎಸ್‌ನತ್ತ

ಹಾಸನ: ಜಿಲ್ಲೆಯ ಅರಸೀಕೆರೆ ಕ್ಷೇತ್ರದಲ್ಲಿ ಬಿಜೆಪಿ ಆಕಾಂಕ್ಷಿಯಾಗಿದ್ದ ಎನ್‌.ಆರ್. ಸಂತೋಷ್‌ ಅವರಿಗೆ ಟಿಕೆಟ್‌ ಕೈತಪ್ಪಿದೆ. ಈ ಬಾರಿ ಜಿ.ವಿ. ಬಸವರಾಜು ಅವರಿಗೆ ಟಿಕೆಟ್‌ ನೀಡಲಾಗಿದೆ. ಕ್ಷೇತ್ರದಾದ್ಯಂತ ಬಿಜೆಪಿ ಅಭ್ಯರ್ಥಿ ಎಂದೇ ಬಿಂಬಿಸಿಕೊಂಡಿದ್ದ ಸಂತೋಷ್‌ಗೆ ತೀವ್ರ ಹಿನ್ನಡೆ ಉಂಟಾಗಿದ್ದು, ಬಿಜೆಪಿ ತೊರೆದು, ಬೇರೆ ಪಕ್ಷಗಳಿಂದ ಸ್ಪರ್ಧೆ ಮಾಡುವ ಸಾಧ್ಯತೆಗಳು ಹೆಚ್ಚಿವೆ.

ಈಗಾಗಲೇ ಕಾಂಗ್ರೆಸ್‌ನಿಂದ ಶಿವಲಿಂಗೇಗೌಡರು ಸ್ಪರ್ಧಿಸುವುದು ಖಚಿತವಾಗಿದೆ. ಜೆಡಿಎಸ್‌ನಿಂದ ಬಾಣಾವರ ಅಶೋಕ್‌ ಅವರನ್ನು ಕಣಕ್ಕೆ ಇಳಿಸಲು ಜೆಡಿಎಸ್‌ ನಿರ್ಧರಿಸಿದೆ. ಈ ಮಧ್ಯೆ ಸಂತೋಷ್‌ಗೆ ಬಿಜೆಪಿ ಟಿಕೆಟ್‌ ಕೈತಪ್ಪಿದ್ದರಿಂದ ಜೆಡಿಎಸ್‌ನಿಂದ ಸ್ಪರ್ಧೆ ಮಾಡಬಹುದು ಎನ್ನುವ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬರುತ್ತಿವೆ. ಈ ಬಗ್ಗೆ ಈಗಾಗಲೇ ರೇವಣ್ಣ ಹಾಗೂ ದೇವೇಗೌಡರ ಜೊತೆಗೆ ಸಂತೋಷ್‌ ಮಾತನಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಎನ್‌.ಆರ್. ಸಂತೋಷ್‌ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದು, ಅರಸೀಕೆರೆ ಕ್ಷೇತ್ರದಲ್ಲಿ ಲಿಂಗಾಯತ ಮತಗಳು ಹೆಚ್ಚಾಗಿವೆ. ಹಾಗಾಗಿ ಸಂತೋಷ್‌ ಅವರಿಗೆ ಟಿಕೆಟ್‌ ನೀಡುವ ನಿಟ್ಟಿನಲ್ಲಿ ಜೆಡಿಎಸ್ ಮುಖಂಡರೂ ಆಸಕ್ತಿ ತೋರಿದ್ದಾರೆ. ಆದರೆ, ಜೆಡಿಎಸ್-ಕಾಂಗ್ರೆಸ್‌ ಮೈತ್ರಿ ಸರ್ಕಾರದ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಂತೋಷ್‌ ಅವರಿಗೆ ಜೆಡಿಎಸ್‌ನಿಂದ ಟಿಕೆಟ್‌ ನೀಡಲು ಎಚ್‌.ಡಿ.ಕುಮಾರಸ್ವಾಮಿ ಒಪ್ಪುತ್ತಿಲ್ಲ. ಹೀಗಾಗಿ ಇನ್ನೂ ಚರ್ಚೆಯ ಹಂತದಲ್ಲಿದೆ. ರಾಜಕೀಯದಲ್ಲಿ ಏನೂ ಬೇಕಾದರೂ ನಡೆಯಬಹುದು. ಹಾಗಾಗಿ ಸಂತೋಷ್‌ ಜೆಡಿಎಸ್‌ನಿಂದ ಸ್ಪರ್ಧೆಗೆ ಇಳಿದರೂ ಅಚ್ಚರಿ ಇಲ್ಲ ಎನ್ನುವುದು ಕ್ಷೇತ್ರದ ಮತದಾರರು ಹೇಳುವ ಮಾತು.

ಇದನ್ನೂ ಓದಿ : ಬಿಜೆಪಿ ಮೊದಲ ಪಟ್ಟಿಯಲ್ಲಿ ಟಿಕೆಟ್‌ ಮಿಸ್‌ : ದೆಹಲಿಯತ್ತ ಪ್ರಯಾಣ ಬೆಳೆಸಿದ ಜಗದೀಶ್ ಶೆಟ್ಟರ್

ಒಂದು ವರ್ಷದಿಂದಲೇ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕ್ಷೇತ್ರದಲ್ಲಿ ಶಿವಲಿಂಗೇಗೌಡರಿಗೆ ಸ್ಪರ್ಧೆ ನೀಡುತ್ತಲೇ ಬಂದಿರುವ ಸಂತೋಷ್‌, ಇದೀಗ ಟಿಕೆಟ್‌ ತಪ್ಪಿದ್ದರಿಂದ ತಮ್ಮೆಲ್ಲ ಶ್ರಮ ವ್ಯರ್ಥವಾಗುತ್ತದೆ. ಅದಕ್ಕಾಗಿ ಬೇರೆ ಪಕ್ಷ ಅಥವಾ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಅರಸೀಕೆರೆಯಲ್ಲಿ ಗುರುವಾರ ಮಧ್ಯಾಹ್ನ ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದ್ದು, ಆ ಸಭೆಯಲ್ಲಿ ಸ್ಪಷ್ಟ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

Donate Janashakthi Media

Leave a Reply

Your email address will not be published. Required fields are marked *