ಬೆಳಗಾವಿ: ಬಿಜೆಪಿ ಪಕ್ಷದ ಅನ್ಯಾಯ ಎಸಗುತ್ತಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಳಗಾವಿಯ ಬಿಜೆಪಿ ಪಕ್ಷದ ಶಾಸಕರು ಹಾಗೂ ಮುಖಂಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರಿತ್ತಿದ್ದಾರೆ.
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಬಿಜೆಪಿ ನಾಯಕರು, ಇತ್ತೀಚೆಗೆ ನಡೆದ ಬೆಳಗಾವಿಯ ಸ್ಥಳೀಯ ಸಂಸ್ಥೆಗಳಿಂದ ನಡೆದ ಎಂಎಲ್‌ಸಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ (ಕವಟಗಿಮಠ) ಸೋಲಿಗೆ ಜಾರಕಿಹೊಳಿ ಸಹೋದರರು ಕಾರಣರಾಗಿದ್ದಾರೆ ಎಂಬ ಆರೋಪವನ್ನು ಮಾಡಿದ್ದಾರೆ.
ಶಾಸಕರಾದ ಅಭಯ ಪಾಟೀಲ, ದುರ್ಯೋಧನ ಐಹೊಳೆ, ಪಿ ರಾಜೀವ್, ಮಹಾದೇವಪ್ಪ ಯಾದವಾಡ, ಸಂಸದರಾದ ಈರಣ್ಣ ಕಡಾಡಿ, ಅಣ್ಣಾ ಸಾಹೇಬ ಜೊಲ್ಲೆ, ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಾರಕಿಹೊಳಿ ಸಹೋದರರ ವಿರುದ್ಧ ದೂರು ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಎಂಎಲ್‌ಸಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರಿಂದಲೇ ಕವಟಗಿಮಠ ಸೋಲು ಅನುಭವಿಸಿದ್ದರು, ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಇಬ್ಬರೂ ಲಖನ್ ಜಾರಕಿಹೊಳಿ ಅವರನ್ನು ಬೆಂಬಲಿಸಿದ್ದಾರೆ ಎಂದು ತಿಳಿಸಿದ್ದಾರೆ.
ಅಲ್ಲದೆ, ಈಗ ಮತ್ತೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಬಿಜೆಪಿ ಪಕ್ಷಕ್ಕೆ ವಲಸೆ ಬಂದು ಸಚಿವರಾಗಿರುವವರು ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ತಿಳಿಸುತ್ತಿದ್ದಾರೆ. ಇದರ ನಡುವೆ ಬಿಜೆಪಿ ಕೇಂದ್ರ ನಾಯಕತ್ವವು ಸಹ ರಮೇಶ್ ಅಥವಾ ಬಾಲಚಂದ್ರ ಜಾರಕಿಹೊಳಿ ಇಬ್ಬರ ಪೈಕಿ ಒಬ್ಬರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಲು ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ನಡುವೆ ಶಾಸಕರು ರಮೇಶ್ ಅಥವಾ ಬಾಲಚಂದ್ರ ಅವರಿಗೆ ಸಚಿವ ಸ್ಥಾನ ನೀಡುವುದನ್ನು ತಡೆಯಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆಂದು ಹೇಳಲಾಗುತ್ತಿದೆ.
“ಬೆಳಗಾವಿಯ ಶಾಸಕರು ಜಾರಕಿಹೊಳಿಯವರ ಬೆಂಬಲವನ್ನು ಪಡೆಯುವ ಬದಲು ಪರಿಷತ್ತಿನಲ್ಲಿ ಬಹುಮತವನ್ನು ಸಾಧಿಸಲು ಇತರ ಪರ್ಯಾಯಗಳನ್ನು ಹುಡುಕಲು ಪಕ್ಷದ ನಾಯಕರ ಮೇಲೆ, ವಿಶೇಷವಾಗಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ” ಎಂದು ಮೂಲಗಳು ಮಾಹಿತಿ ನೀಡಿವೆ.