ಬೆಂಗಳೂರು : ಒಂದು ಕಡೆ ವಿಧಾನಸಭೆ ಅಧಿವೇಶನ ನಡೆಯುತ್ತಿದೆ. ಮತ್ತೊಂದು ಕಡೆ ರಾಜ್ಯ ರಾಜಕೀಯದಲ್ಲಿ ಹಲವು ಬೆಳವಣಿಗೆ ನಡೆಯುತ್ತಿದೆ. ಒಂದೇ ದಿನ ಇಬ್ಬರು ಜೆಡಿಎಸ್ ಶಾಸಕರು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಜೆ.ಟಿ. ದೇವೇಗೌಡ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿರುವ ಬೆನ್ನಲ್ಲೇ, ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಕೆ. ಶ್ರೀನಿವಾಸ ಗೌಡ ಕೂಡ ಕಾಂಗ್ರೆಸ್ ಬಾಗಿಲು ತಟ್ಟಿದ್ದಾರೆ.
ಜೆಡಿಎಸ್ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡಿರುವ ಅವರು ‘ಕೈ’ ಹಿಡಿಯಲು ತೆರೆಮರೆಯಲ್ಲಿ ಕಸರತ್ತು ನಡೆಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.
ಕೆ. ಸಿ. ವ್ಯಾಲಿ ಯೋಜನೆ ಮುಂದಿಟ್ಟುಕೊಂಡು ಕೋಲಾರ ಶಾಸಕ ಕೆ. ಶ್ರೀನಿವಾಸ ಗೌಡ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಮೂಲಕ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಶಾಸಕ ಕೆ. ಶ್ರೀನಿವಾಸ ಗೌಡ ಈಗಾಗಲೇ ಜೆಡಿಎಸ್ ತೊರೆಯಲು ಚಿಂತನೆ ನಡೆಸಿದ್ದಾರೆ. ಈ ಕುರಿತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಜೊತೆ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇಂತಹ ಸಮಯದಲ್ಲಿಯೇ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ.