ಬೆಳಗಾವಿ: ಪ್ರಸಕ್ತ ಸಾಲಿನಲ್ಲಿ ಕಬ್ಬು ಬೆಳೆದ ರೈತರಿಗೆ ಪ್ರತೀ ಟನ್ ಕಬ್ಬಿಗೆ ರೂ.5,500 ರೂ ನಿಗದಿ ಮಾಡಬೇಕೆಂದು ಆಗ್ರಹಿಸುತ್ತಿರುವ ರೈತರು ಪ್ರತಿಭಟನೆಗೆ ಮುಂದಾಗಿದ್ದು, ಧರಣಿಯ ಎರಡನೇ ದಿನವಾದ ಇಂದು ಬೆಳಗಾವಿ ಜಿಲ್ಲಾಧಿಕಾರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ ರೈತರು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.
ಬೆಳಗಾವಿ ನಗರದಲ್ಲಿ ನೆನ್ನೆ(ಅಕ್ಟೋಬರ್ 10) ಬೃಹತ್ ಪ್ರತಿಭಟನೆ ನಡೆಸಿದ ವಿವಿಧ ರೈತಪರ ಸಂಘಟನೆಗಳು ಪ್ರತಿ ಟನ್ ಕಬ್ಬಿಗೆ ರೈತರಿಗೆ 5,500 ರೂ. ದರ ನಿಗದಿ ಸೇರಿದಂತೆ ಇತರ ಬೇಡಿಕೆ ಈಡೇರಿಸುವಂತೆ ನಿನ್ನೆ ಜಿಲ್ಲಾಧಿಕಾರಿಗಳಿಗೆ ರೈತರು ಮನವಿ ಮಾಡಿದ್ದರು. ಆದರೆ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನಡೆಸಿದ ಸಂಧಾನ ಸಭೆ ಫಲಪ್ರದ ನೀಡದ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದುವರಿದಿದೆ.
ಜಿಲ್ಲಾಧಿಕಾರಿ ಕಛೇರಿಗೆ ಬೀಗ ಜಡಿದು ಪ್ರತಿಭಟನೆಗೆ ಮುಂದಾದ ರೈತರು ಧರಣಿ ಮುಂದುವರೆಸಿದ್ದಾರೆ. ಅಷ್ಟೇ ಅಲ್ಲದೇ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿಯೇ ಹಾಸಿಗೆ ಹಾಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಮಾತನಾಡಿ, ಕಳೆದ ಒಂದು ದಶಕದಿಂದ ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆ ಮಾಲೀಕರಿಂದ ಮೋಸವಾಗುತ್ತಿದೆ. ರೈತರಿಗೆ ಸೂಕ್ತ ದರ ನೀಡುತ್ತಿಲ್ಲ. ಹಾಗಾಗಿ ಪ್ರತಿ ಟನ್ ಕಬ್ಬಿಗೆ ರೂ.5500 ದರ ನೀಡಬೇಕು. ಕಬ್ಬು ಬೆಳೆಗಾರರಿಗೆ ನ್ಯಾಯ ಸಿಗುವ ವರೆಗೂ ಹೋರಾಟ ಮುಂದುವರೆಯಲಿದೆ ಎಂದ ಅವರು, ಸ್ಥಳಕ್ಕೆ ಸಕ್ಕರೆ ಸಚಿವರು ಆಗಮಿಸುವಂತೆ ಪಟ್ಟು ಹಿಡಿದಿದ್ದಾರೆ.
ನೆನ್ನೆಯ ಪ್ರತಿಭಟನೆ ವೇಳೆ ಧಾರಾಕಾರವಾಗಿ ಸುರಿಯುವ ಮಳೆಯಲ್ಲಿಯೇ ಬೀದಿಗಿಳಿದ ರೈತರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ರೈತಪರ ಸಂಘಟನೆಗಳ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.