ಬೆಂಗಳೂರು : ಕನ್ನಡದ ಹಿರಿಯ ಲೇಖಕಿ ಮತ್ತು ಸಾಹಿತಿ ಡಾ ಕಮಲಾ ಹಂಪನಾ(88ವ) ಅವರು ಹೃದಯಾಘಾತದಿಂದ ಶನಿವಾರ ನಸುಕಿನ ವೇಳೆ ನಿಧನ ಹೊಂದಿದ್ದಾರೆ.
ಅವರು ಪತಿ ಹಿರಿಯ ಸಾಹಿತಿ ಡಾ ಹಂ.ಪ.ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಹಾಗೂ ಅಪಾರ ಬಂಧುಮಿತ್ರರು, ಹಿತೈಷಿಗಳನ್ನು ಅಗಲಿದ್ದಾರೆ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಪುತ್ರಿ ಡಾ. ಆರತಿ ಮನೆಯಲ್ಲಿ ವಾಸವಿದ್ದರು. ನಿನ್ನೆ ರಾತ್ರಿ 10 ಗಂಟೆ ವೇಳೆಗೆ ಅವರಿಗೆ ಹೃದಯಾಘಾತ ಆಗಿತ್ತು. ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಅಸುನೀಗಿದ್ದಾರೆ.
ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿ ಡಾ. ಕಮಲಾ ಹಂಪನಾ ಅವರ ನಿಧನಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ.ಕಮಲಾ ಹಂಪನಾ ಅವರು ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿಯೂ ತಮ್ಮ ಕೃತಿಗಳ ಮೂಲಕ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಅನನ್ಯ ಜೀವನ ಪ್ರೀತಿಯ ಅಧ್ಯಾಪಕರಾಗಿದ್ದ ಅವರು ಅಪಾರ ಶಿಷ್ಯವೃಂದವನ್ನು ಹೊಂದಿದ್ದಾರೆ.
ಕನ್ನಡ ಪುಸ್ತಕ ಲೋಕದಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ ,ಅವರ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕ ಬಹುದೊಡ್ಡ ನಷ್ಟ ಹೊಂದಿದೆ ಎಂದು ಮಾನಸ ರವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಮಾಜಿ ಸಿಎಂ ಬಸವರಾಜಬೊಮ್ಮಾಯಿ, ಬೆಂಗಳೂರುನಾಡಿನ ಖ್ಯಾತ ಸಾಹಿತಿಗಳು ಹಾಗೂ ನಾಡೋಜ ಕಮಲಾ ಹಂಪನಾ ಅವರ ನಿಧನದ ಸುದ್ದಿ ಅತ್ಯಂತ ನೋವಿನ ಸಂಗತಿ. ಅವರ ಅಗಲಿಕೆಗೆ ಸಂತಾಪಗಳನ್ನು ಹೇಳಿದ್ದಾರೆ.
ಇದನ್ನು ಓದಿ : ಅಂಗನವಾಡಿ ಆಹಾರದಲ್ಲಿ ಗುಣಮಟ್ಟ ಕಾಪಾಡಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ತಮ್ಮ ಲೇಖನಗಳು, ಸಂಶೋಧನೆಗಳ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಭಾಜನರಾಗಿದ್ದರು. ಮೂಡಬಿದಿರೆಯಲ್ಲಿ ನಡೆದ 71 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕನ್ನಡ ಸಾರಸ್ವತ ಲೋಕಕ್ಕೆ ಹೆಮ್ಮೆ ತಂದಿದ್ದರು.
ಅವರ ಅಗಲಿಕೆಯಿಂದ ಕನ್ನಡ ನಾಡು ಹಾಗೂ ಸಾಹಿತ್ಯ ಲೋಕ ಬಡವಾದಂತಾಗಿದೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಸಚಿವ ಶಿವರಾಜ ತಂಗಡಗಿ ಸಂತಾಪ ಸೂಚಿಸಿದ್ದು, ಡಾ. ಕಮಲ ಹಂಪನಾ ಅವರು ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿ, ಕಥೆ ,ಕಾದಂಬರಿ,ವಿಮರ್ಶೆ, ವೈಚಾರಿಕ ಸಾಹಿತ್ಯ , ಶಿಶು ಸಾಹಿತ್ಯ,ಅನುವಾದ ಹಾಗೂ ಸಂಶೋಧನಾ ಸಾಹಿತ್ಯ ಹೀಗೆ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಅಮೂಲ್ಯವಾದ ಕೃತಿಗಳನ್ನು ರಚಿಸಿದ್ದ ಡಾ. ಕಮಲ ಹಂಪನಾ ಅವರು ಮಹಾರಾಣಿ ಕಾಲೇಜಿ ನಲ್ಲಿ ಅಧ್ಯಾಪಕರಾಗಿ ವೃತ್ತಿ ಆರಂಭಿಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾಗಿ ಹಾಗೂ ಮೈಸೂರು ವಿಶ್ವವಿದ್ಯಾಲಯ, ಹಂಪಿ ವಿಶ್ವವಿದ್ಯಾಲಯ ಮುಂತಾದ ಕಡೆಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಬಹಳ ದೊಡ್ಡ ಶಿಷ್ಯ ಪರಂಪರೆಯನ್ನು ಹೊಂದಿದ್ದಾರೆ.
71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರು ,ನಾಡೋಜ ಸೇರಿದಂತೆ ವಿವಿಧ ಪ್ರತಿಷ್ಠಿತ ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದರು.
ಅವರ ಇಡಿಯ ಕುಟುಂಬ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಅನನ್ಯವಾದ ಕೊಡುಗೆಯನ್ನ ನೀಡುತ್ತಿದೆ. ಭಗವಂತ ಅವರ ಕುಟುಂಬಕ್ಕೆ ಅವರ ಅಗಲಿಕೆಯ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ, ಕನ್ನಡ ಸಾಂಸ್ಕೃತಿಕ ಲೋಕ ಅವರನ್ನು ಸದಾ ಗೌರವಪೂರ್ವಕವಾಗಿ ನೆನಪಿಸಿಕೊಳ್ಳುತ್ತದೆ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಇದನ್ನು ನೋಡಿ : ಅಂಗನವಾಡಿಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧ – ಲಕ್ಷ್ಮೀ ಹೆಬ್ಬಾಳ್ಕರ್Janashakthi Media