ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಕರೆ ನಾಡು ಮಂಡ್ಯದಲ್ಲಿ ನಡೆಯಲಿದ್ದು, ಅಧ್ಯಕ್ಷರಾಗಿ ಹಿರಿಯ ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ. ಡಿಸೆಂಬರ್ 20ರಿಂದ ಮೂರು ದಿನಗಳ ಕಾಲ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊರುಚ ಎಂದೇ ಖ್ಯಾತರಾಗಿರುವ ಗೊ.ರು. ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಮಹಿಳಾ ಸಾಹಿತಿಗಳನ್ನು ಈ ಬಾರಿ ಸಮ್ಮೇಳನಾಧ್ಯಕ್ಷರಾಗಿ ನೇಮಕ ಮಾಡಬೇಕು ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಜಾನಪದ ವಿದ್ವಾಂಸ, ನಾಡೋಜ ಗೊ.ರು. ಚನ್ನಬಸಪ್ಪ ಅವರನ್ನು ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಗೊಂಡೇದಹಳ್ಳಿಯಲ್ಲಿ ಹುಟ್ಟಿದ ಗೊ.ರು. ಚನ್ನಬಸಪ್ಪ ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ಅಲ್ಲದೇ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾನಪದ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇದನ್ನೂ ಓದಿ : ಆರ್.ಬಿ. ಮೋರೆ; ದಲಿತ ಮತ್ತು ಕಮ್ಯುನಿಸ್ಟ್ ಚಳವಳಿ ನಡುವಿನ ಸೇತುವೆ: ಅಶೋಕ ಧವಳೆ
ಚನ್ನಬಸಪ್ಪ ಕರ್ನಾಟಕ ಜನಪದ ಕಲೆಗಳು ಎಂಬ ಕೃತಿಯನ್ನು ಸಂಪಾದಿಸಿದ್ದು ಕರ್ನಾಟಕ ಪ್ರಗತಿಪಥ, ಸಾಕ್ಷಿಕಲ್ಲು, ಬಾಗೂರು ನಾಗಮ್ಮ ಗ್ರಾಮಗೀತೆಗಳು, ಹೊನ್ನ ಬಿತ್ತೇವು ನೆಲಕಲ್ಲ, ಇತ್ಯಾದಿ ಕೃತಿಗಳನ್ನು ರಚಿಸಿದ್ದಾರೆ.
ಪತ್ರಿಕಾವೃತ್ತಿಯನ್ನೂ ಮಾಡಿರುವ ಗೊರುಚ ಅವರು, ‘ಜಾನಪದ ಜಗತ್ತು’, `ಪಂಚಾಯತ್ ರಾಜ’, `ಕನ್ನಡ ಸಾಹಿತ್ಯ ಪರಿಷತ್ಪತ್ರಿಕೆ’ ಮೊದಲಾದ ಪತ್ರಿಕೆಗಳ ಸಂಪಾದಕರಾಗಿ ವಿಶೇಷ ಸೇವೆ ಸಲ್ಲಿಸಿದ್ದಾರೆ. 1992 ರಿಂದ 1995ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ 18ನೇ ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ಕೊಪ್ಪಳ (1993) ಮಂಡ್ಯ (1994), ಮುಧೋಳಗಳಲ್ಲಿ (1995) 62, 63, 64ನೇ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿದ್ದು, ಅನೇಕ ಮೌಲಿಕ ಗ್ರಂಥಗಳನ್ನೂ ಪ್ರಕಟಿಸುವಲ್ಲಿ ಮುಖ್ಯ ಪಾತ್ರವಹಿಸಿದ್ದರು.
ಇದನ್ನೂ ನೋಡಿ : ‘ಆರ್.ಬಿ. ಮೋರೆ | ದಲಿತರಿಗೂ ಕಮ್ಯುನಿಸ್ಟರಿಗೂ ಹಿಡಿದ ಕನ್ನಡಿ – ಬಂಜಗೆರೆ ಜಯಪ್ರಕಾಶ್ Janashakthi Media