ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಅರಳಿದ ಕಮಲ, ನಡೆಯದ ʻಕೈʼ ಕಸರತ್ತು, ಬಾಡಿದ ತೆನೆ

ವಿಜಯಪುರ: ಸಿಂದಗಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31,088 ಮತಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದ ಬಿಜೆಪಿ ಅಭ್ಯರ್ಥಿ ಭೂಸನೂರ ಅವರಿಗೆ ಅನುಕಂಪದ ಅಲೆ ಕೆಲಸ ಮಾಡಿದೆ.  ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರು 62,680 ಮತಗಳನ್ನು ಪಡೆದುಕೊಂಡಿದ್ದಾರೆ.

ಆರಂಭದಿಂದಲೂ ಮುನ್ನಡೆ : ಆರಂಭದಿಂದಲೂ ಭರ್ಜರಿ ಮುನ್ನಡೆಯನ್ನು ಬಿಜೆಪಿ ಕಾಯ್ದುಕೊಂಡಿತ್ತು. ಅಂತಿಮವಾಗಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರಗೆ 93,865, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿಗೆ 62,680, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿಗೆ 4,353 ಪಡೆದುಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸೇರಿದಂತೆ ಕಣದಲ್ಲಿದ್ದ ಇತರೆ ನಾಲ್ವರು ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.

ಸಿಂದಗಿ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕ್ಷೇತ್ರದಲ್ಲಿ ಜಾತಿ ಸಮೀಕರಣ ಮಾಡುವ ಮೂಲಕ ಬಿಜೆಪಿಗೆ ಜಯ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ರಾಜಕೀಯ ತಜ್ಞರು ಹೇಳುತ್ತಿದ್ದಾರೆ.

ಎಣಿಕೆ ಕೇಂದ್ರದತ್ತ ಬಾರದ ಕಾಂಗ್ರೆಸ್‌ ಅಭ್ಯರ್ಥಿ : ವಿಜಯಪುರದಲ್ಲಿದ್ದರೂ ಮತ ಎಣಿಕೆ ಕೇಂದ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ದೂರ ಉಳಿದ್ದಾರೆ. ಗೆಲುವಿನ ನಿರೀಕ್ಷೆಯಲ್ಲಿದ್ದ ಅಶೋಕ ಮನಗೂಳಿಗೆ ನಿರಾಸೆಯಾಗಿದ್ದು, ಕೊನೆವರೆಗೂ ಮತ ಎಣಿಕೆ ಕೇಂದ್ರದತ್ತ ಮುಖ ಮಾಡಲೇ ಇಲ್ಲ.

ಕಾಂಗ್ರೆಸ್‌ ಆತ್ಮಾವಲೋಕನ ಮಾಡಿಕೊಳ್ಳಲಿ : ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಹಿನ್ನೆಲೆ ವಿಜಯಪುರದಲ್ಲಿ ಮಾಜಿ ಸಚಿವ ಲಕ್ಷ್ಮಣ ಸವದಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇದು ಮತದಾರರ ಗೆಲುವು, ಅವರ ಪಾದಗಳಿಗೆ ಹಣೆ ಹಚ್ಚಿ ನಮಸ್ಕಾರ ಮಾಡುತ್ತೇನೆ. ಹೆಚ್ಚಿನ ಮಟ್ಟದಲ್ಲಿ ಮತದಾರರನ್ನು ತಲುಪುವ ಕೆಲಸ ಮಾಡಿದ್ದೇವೆ. ನಮ್ಮ ನಿರೀಕ್ಷೆಯಂತೆ  ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದೇವೆ. ಸಿಂದಗಿಯಲ್ಲಿ ಸೋತ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.

ಸಿಂದಗಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭರ್ಥಿ ಗೆಲುವು ಸಾಧಿಸಿರುವುದಕ್ಕೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಟ್ವೀಟ್‌ ಮಾಡಿ ಅಭಿನಂದನೆ ತಿಳಿಸಿದ್ದಾರೆ.

“ಸಿಂದಗಿ ಉಪ ಚುನಾವಣೆಯಲ್ಲಿ ಉತ್ತಮ ಅಂತರದಲ್ಲಿ ವಿಜಯ ಸಾಧಿಸಿದ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ್ ಅವರಿಗೆ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *